ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಯ ಭೂತ ದಹನ: ಪ್ರತಿಭಟನೆ

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರೈತ ಸಂಘ ಸದಸ್ಯರ ವಿರೋಧ
Last Updated 10 ಡಿಸೆಂಬರ್ 2020, 13:19 IST
ಅಕ್ಷರ ಗಾತ್ರ

ಕೋಲಾರ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಮೆಕ್ಕೆ ವೃತ್ತದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ಭೂತ ದಹನ ಮಾಡಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ. ಸರ್ಕಾರದ ಈ ನಡೆ ಖಂಡನೀಯ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ರೈತರ ತೀವ್ರ ವಿರೋಧದ ನಡುವೆಯೂ ಸರ್ಕಾರ ಸದನದಲ್ಲಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕರಿಸಿದೆ. ಹಿಟ್ಲರ್‌ ನೀತಿ ಅನುಸರಿಸುತ್ತಿರುವ ಸರ್ಕಾರ ಕೃಷಿ ಕ್ಷೇತ್ರ ನಾಶ ಮಾಡಿ ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸಲು ಹೊರಟಿದೆ. ಸರ್ಕಾರದ ಕೃಷಿ ವಿರೋಧಿ ನಡೆಯಿಂದ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬರಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತ ಕುಲವನ್ನು ಸರ್ವ ನಾಶ ಮಾಡಲು ಹೊರಟಿದ್ದಾರೆ. ರೈತರ ಪರವಾಗಿದ್ದ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರದ ಮೇಲೆ ಗದಾ ಪ್ರಹಾರ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ನೈತಿಕತೆಯಿಲ್ಲ’ ಎಂದು ಗುಡುಗಿದರು.

ಅಪಾಯಕಾರಿ: ‘ಸರ್ಕಾರ ಜನಾಭಿಪ್ರಾಯ ಸಂಗ್ರಹಿಸದೆ ತರಾತುರಿಯಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ. ಈವರೆಗೆ ಕೃಷಿಕರಿಗೆ ಮಾತ್ರ ಕೃಷಿ ಭೂಮಿ ಖರೀದಿಸಲು ಅವಕಾಶವಿತ್ತು. ಕಾಯ್ದೆ ತಿದ್ದುಪಡಿಯಿಂದ ಕೃಷಿಕರಲ್ಲದವರಿಗೂ ಕೃಷಿ ಭೂಮಿ ಖರೀದಿಸಲು ಅವಕಾಶ ಸಿಕ್ಕಿದೆ. ಸರ್ಕಾರ ಬ್ರಿಟೀಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆ ಜಾರಿಗೊಳಿಸಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಸ್ವಾತಂತ್ರ್ಯ ನಂತರ ದೇಶದಲ್ಲಿ ಭೀಕರ ಬರಗಾಲ ಎದುರಾಗಿ ಜನ ಹಸಿವಿನಿಂದ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರ ಪ್ರತಿ ಹಳ್ಳಿಯಲ್ಲೂ ಕೃಷಿ ಭೂಮಿ ವಿಂಗಡಣೆ ಮಾಡಿ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದಿತು. ಆದರೆ, ಈಗಿನ ಸರ್ಕಾರ ಕೃಷಿ ನಾಶ ಮಾಡಿ ಕಾರ್ಪೊರೇಟ್‌ ಕಂಪನಿಗಳ ಬೂಟು ನೆಕ್ಕಿ ಆಹಾರ ಭದ್ರತೆಗೆ ಸಂಚಕಾರ ತಂದಿದೆ. ರೈತರನ್ನು ಬೀದಿಗೆ ತಳ್ಳಿ, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿದೆ’ ಎಂದು ಕಿಡಿಕಾರಿದರು.

ಹೋರಾಟ ತೀವ್ರ: ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಣ್ಣ ಭೂ ಹಿಡುವಳಿದಾರರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ರೈತ ಕುಲಕ್ಕೆ ಮಾರಕವಾಗಿರುವ ಕಾಯ್ದೆ ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ, ಸದಸ್ಯರಾದ ತಿಮ್ಮಣ್ಣ, ನಾಗೇಶ್, ಕಿರಣ್, ಜಮೀರ್‌ಪಾಷಾ, ವೆಂಕಟೇಶ್, ಚಾಂದ್ ಪಾಷಾ, ನವೀನ್, ಕೇಶವ, ವೇಣು ಪಾಲ್ಗೊಂಡರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT