ಗುರುವಾರ , ಅಕ್ಟೋಬರ್ 1, 2020
21 °C
ಹಾಸ್ಟೆಲ್‌ಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆಯಲ್ಲಿ ಅಕ್ರಮ

ಕೋಲಾರ | ತನಿಖೆಗೆ ಸಮಿತಿ ರಚಿಸಿ: ಸಂಸದ ಮುನಿಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳಿಗೆ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆಯಲ್ಲಿ ಅಕ್ರಮ ನಡೆದಿದ್ದು, ತನಿಖೆಗೆ ಸಮಿತಿ ರಚಿಸಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ಇಲ್ಲಿ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ‘ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಅದೇ ರೀತಿ 2017ರಿಂದ ಜಿಲ್ಲೆಯಲ್ಲಿ ಕೊಳವೆ ಬಾವಿ ಕೊರೆದಿರುವುದರಲ್ಲೂ ಅವ್ಯವಹಾರ ನಡೆದಿದೆ’ ಎಂದು ಹೇಳಿದರು.

‘ಬಹುಪಾಲು ಕೊಳವೆ ಬಾವಿಗಳ ಆಳ ಸರಾಸರಿ 1,400 ಅಡಿ ಎಂದು ದಾಖಲೆಪತ್ರ ತೋರಿಸಿ ಬಿಲ್‌ ಮಂಜೂರು ಮಾಡಲಾಗಿದೆ. ಈ ಬಗ್ಗೆ ಅನುಮಾನವಿದೆ. ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಮತ್ತು ಕೊಳವೆ ಬಾವಿಗಳ ಅಕ್ರಮದ ಸಂಬಂಧ ಪಾರದರ್ಶಕ ತನಿಖೆಯಾಗಬೇಕು’ ಎಂದು ಸೂಚನೆ ನೀಡಿದರು.

‘ಮನೆ ಮನೆಗೂ ನೀರು ಕೊಡಲು ಜಲಶಕ್ತಿ ಮತ್ತು ಅಟಲ್‌ ಭೂಜಲ ಯೋಜನೆಯಡಿ ಸಾವಿರಾರು ಕೋಟಿ ಖರ್ಚು ಮಾಡಲಾಗುತ್ತಿದೆ. ಆದರೆ, ಕುಡಿಯುವ ನೀರಿನ ಉದ್ದೇಶಕ್ಕೆ ಕೊಳವೆ ಬಾವಿ ಕೊರೆಸುವುದರಲ್ಲಿ ಅಕ್ರಮ ನಡೆದರೆ ಹೇಗೆ? ಗ್ರಾಮ ಪಂಚಾಯಿತಿಗಳ ವಾಟರ್‌ಮನ್‌ಗಳಿಗೆ ಏಳೆಂಟು ತಿಂಗಳಿಂದ ಸಂಬಳ ಕೊಟ್ಟಿಲ್ಲ. ಅವರಿಗೆ ಶೀಘ್ರವೇ ವೇತನ ಪಾವತಿಸಿ’ ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಶಿಷ್ಟಾಚಾರ ಪಾಲಿಸಿ: ‘ಅಧಿಕಾರಿಗಳು ಸರ್ಕಾರಿ ಕಾರ್ಯಕ್ರಮಗಳು, ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಶಿಷ್ಟಾಚಾರ ಪಾಲಿಸಬೇಕು’ ಎಂದು ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಹೇಳಿದರು.

‘ಜಿ.ಪಂ ಸದಸ್ಯರನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಅಹ್ವಾನಿಸದ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಚರ್ಚೆ ಮಾಡಿದ್ದೇವೆ. ಶಿಷ್ಟಾಚಾರ ಪಾಲಿಸುವಂತೆ ಸೂಚಿಸಿದ್ದರೂ ಅಧಿಕಾರಿಗಳು ನಮ್ಮ ಆದೇಶ ಪಾಲಿಸದೆ ನಿರ್ಲಕ್ಷ್ಯ ತೋರುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಯೋಧರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳಿಗೆ ಸಂಬಂಧಪಟ್ಟ ಕಡತಗಳು ಬಾಕಿಯಿದ್ದು, ಇವುಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು’ ಎಂದು ತಿಳಿಸಿದರು.

ಆನೆ ಕಾರಿಡಾರ್‌: ‘ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಸುತ್ತಮುತ್ತ ಆನೆಗಳ ದಾಳಿಯನ್ನು ಶಾಶ್ವತವಾಗಿ ತಡೆಯಲು ನರೇಗಾ ಯೋಜನೆಯಡಿ ಆನೆ ಕಾರಿಡಾರ್ ನಿರ್ಮಿಸಲಾಗುತ್ತದೆ. ಕೊರೊನಾ ಸೋಂಕಿನ ತಡೆಗೆ ಜನರು ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮನವಿ ಮಾಡಿದರು.

‘ಕೆಆರ್‌ಐಡಿಎಲ್‌ ವತಿಯಿಂದ ಬಂಗಾರಪೇಟೆ ತಾಲ್ಲೂಕಿನ ಕಳ್ಳಿಪುರ- ಶಿಳ್ಳೇಕೆರೆ ರಸ್ತೆಯನ್ನು ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿದೆ. ಆ ರಸ್ತೆಯ ಅಕ್ಕಪಕ್ಕದ ಜಮೀನುಗಳಿಗೆ ಮಳೆ ನೀರು ಹರಿದು ಬೆಳೆ ಹಾಳಾಗಿದೆ. ಈ ಸಮಸ್ಯೆಯನ್ನು ಕೆಆರ್‌ಐಡಿಎಲ್‌ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಲಿಲ್ಲ. ಮುಂದೆ ಈ ರೀತಿ ಆಗಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಖಡಕ್‌ ಎಚ್ಚರಿಕೆ ನೀಡಿದರು.

ಶಾಸಕ ಕೆ.ಶ್ರೀನಿವಾಸಗೌಡ, ಜಿ.ಪಂ ಉಪಾಧ್ಯಕ್ಷೆ ಯಶೋದಾ, ಕೃಷಿ ಮತ್ತು ಕೈಗಾರಿಕಾ ಸ್ಧಾಯಿ ಸಮಿತಿ ಅಧ್ಯಕ್ಷೆ ಸಿ.ನಿರ್ಮಲಾ, ಸಾಮಾಜಿಕ ನ್ಯಾಯ ಸ್ಧಾಯಿ ಸಮಿತಿ ಅಧ್ಯಕ್ಷ ಸಿ.ಎನ್‌.ಅರುಣ್‌ಪ್ರಸಾದ್‌, ಶಿಕ್ಷಣ ಮತ್ತು ಆರೋಗ್ಯ ಸ್ಧಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು