ಅವಕಾಶ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ

ಸೋಮವಾರ, ಮಾರ್ಚ್ 18, 2019
31 °C
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್‌ ಹೇಳಿಕೆ

ಅವಕಾಶ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ

Published:
Updated:
Prajavani

ಕೋಲಾರ: ‘ಕೋಲಾರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಮಹಿಳೆಗೆ ಟಿಕೆಟ್‌ ನೀಡಿದರೆ ಗೆಲುವು ನಿಶ್ಚಿತ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್‌ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕ್ಷೇತ್ರದಲ್ಲಿ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದು, ಅವಕಾಶ ಕೊಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ’ ಎಂದರು.

‘ನನಗೆ ಟಿಕೆಟ್‌ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಟಿಕೆಟ್‌ ಸಿಗುವ ವಿಶ್ವಾಸವಿದೆ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿದರೆ  ದೇಶದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.

‘ಮೋದಿ ಅವರು ನಾಲ್ಕೂವರೆ ವರ್ಷದಲ್ಲಿ ಅನೇಕ ಜನಪರ ಯೋಜನೆ ಜಾರಿಗೆ ತಂದಿದ್ದಾರೆ. ನೋಟು ಅಮಾನ್ಯೀಕರಣ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸುತ್ತಿದ್ದಂತೆ ವಿರೋಧ ಪಕ್ಷದವರು ಬಹಳಷ್ಟು ಟೀಕೆ ಮಾಡಿದರು. ಅವರಿಗೆ ಜನ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು’ ಎಂದು ಕೋರಿದರು.

ಕೋಲಾರ ಹಿಂದುಳಿದಿದೆ: ‘ಕೋಲಾರ ಕ್ಷೇತ್ರದಲ್ಲಿ ಸತತ 7 ಬಾರಿ ಸಂಸದರಾಗಿರುವ ಮುನಿಯಪ್ಪ ಅವರ ಸಾಧನೆ ಶೂನ್ಯ. ಪಕ್ಕದ ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಕ್ಕೆ ಹೋಲಿಕೆ ಮಾಡಿದರೆ ಕೋಲಾರ ತುಂಬಾ ಹಿಂದುಳಿದಿದೆ. ಇದರಿಂದ ರೋಸಿ ಹೋಗಿರುವ ಕ್ಷೇತ್ರದ ಜನ ಬಿಜೆಪಿಯತ್ತ ಮುಖ ಮಾಡಿದ್ದಾರೆ’ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದು ಆಡಳಿತ ನಡೆಸಲಾಗದೆ ಮೋಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಜನರ ವಿಶ್ವಾಸ ಕಳೆದುಕೊಂಡಿದೆ. ಈ ಎರಡೂ ಪಕ್ಷಗಳ ನಾಯಕರು ಜನರನ್ನು ಎಷ್ಟೇ ಯಾಮಾರಿಸಿದರೂ ಜನ ಬಿಜೆಪಿಯನ್ನು ಬೆಂಬಲಿಸುತ್ತಾರೆ’ ಎಂದರು.

ಜನರಿಗೆ ಪರಿಚಿತ: ‘ವಿಧಾನ ಪರಿಷತ್ ಸದಸ್ಯೆಯಾಗಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಮತ್ತು ಸದಸ್ಯೆಯಾಗಿ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಮಾಡಿ ಜನರಿಗೆ ಪರಿಚಿತಳಾಗಿದ್ದೇನೆ. ಈ ಭಾಗದ ಅನೇಕ ಸಮಸ್ಯೆ ಬಗೆಹರಿಸಿದ್ದೇನೆ. ಈಗಲೂ ಮಹಿಳೆಯರು ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ’ ಎಂದು ವಿವರಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 3

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !