ಗುರುವಾರ , ನವೆಂಬರ್ 21, 2019
26 °C

ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ಅಗತ್ಯ

Published:
Updated:
Prajavani

ಕೋಲಾರ: ‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ವ್ಯವಸ್ಥಿತ ಅಧ್ಯಯನ ಅಗತ್ಯ. ವಿದ್ಯಾರ್ಥಿಗಳು ಪರೀಕ್ಷೆಗೆ ಆತ್ಮವಿಶ್ವಾಸದಿಂದ ಸಿದ್ಧತೆ ನಡೆಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದು ಉಪ ವಿಭಾಗಾಧಿಕಾರಿ ಸೋಮಶೇಖರ್‌ ಕಿವಿಮಾತು ಹೇಳಿದರು.

ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ‘ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುತ್ತಿದ್ದರು. ಆದರೆ, ಈಗ ಜಿಲ್ಲೆಯಲ್ಲಿ ಕೆಪಿಎಸ್‌ಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ’ ಎಂದು ಅಭಿಪ್ರಾಯಪಟ್ಟರು.

‘ಎಲ್ಲಾ ವಿದ್ಯಾರ್ಥಿಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆ ಬರೆಯುತ್ತಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಹಿಂಜರಿಯುತ್ತಿದ್ದಾರೆ. ವ್ಯವಸ್ಥಿತ ಅಧ್ಯಯನ, ಮಾರ್ಗದರ್ಶನ ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣ. ಗ್ರಾಮೀಣ ವಿದ್ಯಾರ್ಥಿಗಳು ಹಿಂಜರಿಕೆ ಬಿಟ್ಟು ಪರೀಕ್ಷೆ ಬರೆಯಬೇಕು’ ಎಂದರು.

‘ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ಹೆಚ್ಚಿನ ತರಬೇತಿ ಪಡೆಯಬೇಕು. ಪರೀಕ್ಷೆಗೆ ಹೆಚ್ಚಿನ ಅಧ್ಯಯನ ನಡೆಸಬೇಕು. ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಗಮನಿಸಿ ಸಿದ್ಧತೆ ಮಾಡಿಕೊಳ್ಳಬೇಕು. ತಪ್ಪದೆ ದಿನಪತ್ರಿಕೆಗಳನ್ನು ಓದಬೇಕು’ ಎಂದು ಸಲಹೆ ನೀಡಿದರು.

‘ಈ ಹಿಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ದೆಹಲಿಗೆ ಹೋಗಬೇಕಿತ್ತು. ಆದರೆ, ಈಗ ಹತ್ತಿರದಲ್ಲೇ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳು ಲಭ್ಯವಿವೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು’ ಎಂದು ಎಕ್ಸಲೆಂಟರ್‌ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಸ್ಥಾಪಕ ಲಕ್ಷ್ಮೀನಾರಾಯಣ ತಿಳಿಸಿದರು.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಅಶ್ವತ್ಥ್, ಪ್ರಾಧ್ಯಾಪಕರಾದ ಜಿ.ಶಿವಪ್ಪ ಅರಿವು, ಪ್ರೊ.ಸಿ.ಎ.ರಮೇಶ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)