ಶುಕ್ರವಾರ, ಜನವರಿ 15, 2021
21 °C
ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿ

ದೇಶದಲ್ಲಿ ಕಾಂಗ್ರೆಸ್‌ ಮುಳುಗುವ ಹಡಗು: ಸಂಸದ ಮುನಿಸ್ವಾಮಿ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ದೇಶದಲ್ಲಿ ಕಾಂಗ್ರೆಸ್‌ ಮುಳುಗುವ ಹಡಗು. ಮುಂದಿನ 40ರಿಂದ 50 ವರ್ಷದವರೆಗೆ ಪ್ರತಿಪಕ್ಷಗಳು ದೆಹಲಿ ಕಡೆ ನೋಡಬಾರದು. ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೂ ಸಿಗದಂತೆ ನೋಡಿಕೊಳ್ಳಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಇಲ್ಲಿ ಸೋಮವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿ, ‘ಬಿಜೆಪಿಯು ವಿದ್ಯುನ್ಮಾನ ಮತ ಯಂತ್ರದ ಮೂಲಕ ಚುನಾವಣೆ ಗೆಲ್ಲುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದವು. ಇತ್ತೀಚೆಗೆ ನಡೆದ ಗ್ರಾ.ಪಂ ಚುನಾವಣೆಯು ಪ್ರತಿಪಕ್ಷಗಳ ಆರೋಪಕ್ಕೆ ತಕ್ಕ ಉತ್ತರ ನೀಡಿದೆ’ ಎಂದರು.

‘ಬಿಜೆಪಿಯು ಗ್ರಾ.ಪಂ ಚುನಾವಣೆಯಲ್ಲಿ ಬ್ಯಾಲೆಟ್‌ ಮೂಲಕ ಶೇ 60ರಷ್ಟು ಮತ ಪಡೆದ ನಂತರ ತಳ ಮಟ್ಟದಲ್ಲೂ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ ಎಂಬುದು ಪ್ರತಿಪಕ್ಷಗಳಿಗೆ ಅರ್ಥವಾಗಿದೆ. ತಳ ಮಟ್ಟದ ಕಾರ್ಯಕರ್ತರು ನಾಯಕರಾಗಿದ್ದಾರೆ. ಕಾಂಗ್ರೆಸ್‌ಗೆ ಜನ್ಮ ನೀಡಿದವರು ಚುನಾವಣೆಗೆ ನಿಂತರೂ ಜನರು ಸೋಲಿಸಿ ಮನೆಗೆ ಕಳುಹಿಸುತ್ತಾರೆ ಎಂಬುದು ಮನದಟ್ಟಾಗಿದೆ’ ಎಂದು ವ್ಯಂಗ್ಯವಾಡಿದರು.

‘ಜನಸಂಘದ ಕಾಲದಿಂದ ಸಂಘಟನೆ ಮಾಡಿಕೊಂಡು ಬಂದಿದ್ದರ ಪ್ರತಿಫಲವಾಗಿ 2 ಸಂಸದರನ್ನು ಹೊಂದಿದ್ದ ಬಿಜೆಪಿಯು ಇಂದು 303 ಸ್ಥಾನಕ್ಕೇರಿದೆ. ಎಲ್ಲಾ ಹಿಂದುಳಿದ ವರ್ಗಗಳನ್ನು ಪಕ್ಷದೊಂದಿಗೆ ಜೋಡಿಸುವ ಕೆಲಸವಾದರೆ ಸಾರ್ವತ್ರಿಕ ಚುನಾವಣೆಗಳಲ್ಲಿ ಸುಲಭವಾಗಿ ಗೆಲುವು ಸಾಧಿಸಬಹುದು’ ಎಂದು ಅಭಿಪ್ರಾಯಪಟ್ಟರು.

‘ಬೂತ್ ಮಟ್ಟದಲ್ಲಿ ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸುವ ಮೂಲಕ ಸಂಘಟನೆ ಬಲಿಷ್ಠಗೊಳಿಸಬೇಕು. ಹಿಂದುಳಿದ ಎಲ್ಲಾ ವರ್ಗಗಳನ್ನು ಒಟ್ಟಿಗೆ ಸೇರಿಸಿಕೊಂಡು ಕೆಲಸ ಮಾಡಿದರೆ ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳನ್ನು ಧೈರ್ಯದಿಂದ ಮನೆಗೆ ಕಳುಹಿಸಬಹುದು’ ಎಂದು ತಿಳಿಸಿದರು.

ಆತ್ಮಾವಲೋಕನ: ‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಾಲ್ಕೈದು ಕ್ಷೇತ್ರದಲ್ಲಿ ಗೆಲ್ಲಬಹುದು. ಕೆಜಿಎಫ್, ಮಾಲೂರು, ಬಂಗಾರಪೇಟೆಯಲ್ಲಿ ಬಿಜೆಪಿ ಶಾಸಕರಾಗಿದ್ದರು. ನಮ್ಮದೇ ತಪ್ಪುಗಳಿಂದ ಪಕ್ಷದ ಅಭ್ಯರ್ಥಿಗಳು ಸೋಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಬರುವಾಗ ವಿಧಾನಸಭೆ, ಜಿ.ಪಂ, ತಾ.ಪಂ ಮತ್ತು ಗ್ರಾ.ಪಂಗಳಲ್ಲಿ ಯಾಕೆ ಬರುತ್ತಿಲ್ಲ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ಸೇರಿಸಿಕೊಂಡು ಪಕ್ಷ ಸಂಘಟಿಸಿ’ ಎಂದು ಸಲಹೆ ನೀಡಿದರು.

‘ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೋವಿಡ್‌ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸ್ವದೇಶಿ ಲಸಿಕೆ ನೀಡಲು ಕೇಂದ್ರವು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಕೋವಿಡ್‌ ಸಂದರ್ಭದಲ್ಲಿ ದೇಶವನ್ನು ಗುಡಿಸಿ ಗುಂಡಾಂತರ ಮಾಡುತ್ತಿತ್ತು’ ಎಂದು ಕುಟುಕಿದರು.

ಸಂಘಟನೆ ಬಲಪಡಿಸಿ: ‘ಬೂತ್ ಮಟ್ಟದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಮಂಡಲ್ ವ್ಯಾಪ್ತಿಯಲ್ಲಿ ಸಂಘಟನೆ ಬಲಪಡಿಸುವ ಕೆಲಸ ಆಗಬೇಕು. ಒಟ್ಟು ಜನಸಂಖ್ಯೆಯಲ್ಲಿ ಶೇ 50ಕ್ಕಿಂತಲೂ ಹೆಚ್ಚು ಹಿಂದುಳಿದ ವರ್ಗಳ ಜನರಿದ್ದಾರೆ. ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಸೂಚಿಸಿದರು.

‘ಎಲ್ಲಾ ಹಿಂದುಳಿದ ವರ್ಗಗಳನ್ನು ಸಂಘಟನೆ ಜತೆ ಸೇರಿಸಿಕೊಂಡಾಗ ಪ್ರಧಾನಿ ಮೋದಿಯವರ ಆಶಯ ಈಡೇರಲು ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ನೀಡಿದ ಸಾಂವಿಧಾನಿಕ ಮಾನ್ಯತೆಯನ್ನು ಮೋದಿ ಒಬಿಸಿ ಆಯೋಗಕ್ಕೂ ನೀಡಿದ್ದಾರೆ. ಹಿಂದಿನ ಸರ್ಕಾರಗಳು ಯಾಕೆ ಈ ಮಾನ್ಯತೆ ನೀಡಿರಲಿಲ್ಲ?’ ಎಂದು ಪ್ರಶ್ನಿಸಿದರು.

‘ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಕೋಲಾರ ಜಿಲ್ಲೆಯಲ್ಲಿ ಒಬಿಸಿ ಮೋರ್ಚಾ ಬಲಪಡಿಸಬೇಕು. ಮುಂದೆ ಮಂಡಲ ಮಟ್ಟಕ್ಕೆ ಭೇಟಿ ನೀಡುತ್ತೇವೆ. ವೆಬಿನಾರ್ ಮೂಲಕ ಮಂಡಲಗಳ ಪದಾಧಿಕಾರಿಗಳನ್ನು ಸಂಪರ್ಕಿಸುತ್ತೇವೆ. ತಿಂಗಳಲ್ಲಿ ಕನಿಷ್ಠ ಒಂದು ಬಾರಿಯಾದರೂ ಶ್ರಮದಾನ ಮಾಡಿ’ ಎಂದು ಸಲಹೆ ನೀಡಿದರು.

ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಸುರೇಶ್‌ಬಾಬು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲ್, ಜಿಲ್ಲಾ ಮೋರ್ಚಾ ಅಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು