ಸೋಮವಾರ, ಏಪ್ರಿಲ್ 12, 2021
26 °C
ರಾಜ್ಯದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಸಂಚು: ಧರಣಿನಿರತರ ಆರೋಪ

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಬಿಜೆಪಿ ಮುಖಂಡರು ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇಲ್ಲಿ ಶುಕ್ರವಾರ ಧರಣಿ ನಡೆಸಿದರು.

ಕಾಲೇಜು ವೃತ್ತದಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ಮಾಡಿದರು.

‘ಬಿಜೆಪಿ ನಾಯಕರು ವಾಮ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಸಂಚು ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಅಧಿಕಾರ ದಾಹದಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ವಾಗ್ದಾಳಿ ನಡೆಸಿದರು.

‘ಅತೃಪ್ತ ಶಾಸಕರ ರಾಜೀನಾಮೆ ಹಿಂದೆ ಮೋದಿ ಹಾಗೂ ಅಮಿತ್‌ ಷಾ ಅವರ ಕೈವಾಡವಿದೆ. ಪ್ರಜಾತಂತ್ರ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ಮುಖಂಡರಿಗೆ ನೈತಿಕತೆಯಿಲ್ಲ. ವಿಪಕ್ಷ ಸ್ಥಾನದ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿರುವ ಬಿಜೆಪಿಯು ಅಧಿಕಾರಕ್ಕಾಗಿ ಅಡ್ಡ ದಾರಿ ಹಿಡಿದಿದೆ’ ಎಂದು ಟೀಕಿಸಿದರು.

‘ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ಸಮ್ಮಿಶ್ರ ಸರ್ಕಾರದ ಶಾಸಕರನ್ನು ಮುಂಬೈನಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಪೊಲೀಸ್‌ ಹಾಗೂ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ಕಿಡಿಕಾರಿದರು.

ಹಣದ ಆಮಿಷ: ‘ಬಿಜೆಪಿ ಮುಖಂಡರು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿದ್ದಾರೆ. ಅಲ್ಲದೇ, ಕೆಲ ಶಾಸಕರಿಗೆ ಸಿಬಿಐ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ಮೂಲಕ ಶಾಸಕರನ್ನು ಬೆದರಿಸಿ ರಾಜೀನಾಮೆ ಕೊಡುವಂತೆ ಮಾಡಿದ್ದಾರೆ. ಆದರೂ ರಾಜ್ಯದಲ್ಲಿ ಅಧಿಕಾರ ಹಿಡಿಯುವ ಬಿಜೆಪಿಯವರ ಕನಸು ನನಸಾಗುವುದಿಲ್ಲ’ ಎಂದು ಧರಣಿನಿರತರು ವ್ಯಂಗ್ಯವಾಡಿದರು.

‘ಬಿಜೆಪಿ ಮುಖಂಡರ ಆಮಿಷಕ್ಕೆ ಬಲಿಯಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಅತೃಪ್ತ ಶಾಸಕರಿಗೆ ಮುಖಭಂಗವಾಗಲಿದೆ. ನ್ಯಾಯಾಲಯದಲ್ಲಿ ಸರ್ಕಾರ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಬಿಜೆಪಿ ಮುಖಂಡರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಿಲ್ಲಿಸದಿದ್ದರೆ ರಾಜ್ಯದೆಲ್ಲೆಡೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಮಾವು ಮಾರುಕಟ್ಟೆ ಮತ್ತು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಪಕ್ಷದ ಮುಖಂಡರಾದ ಪಾರ್ಥಸಾರಥಿ, ನಂಜಪ್ಪ, ರಾಜೇಶ್‌ಸಿಂಗ್, ಮಂಜುನಾಥ್, ಸುರೇಶ್, ಅಶ್ವತ್ಥ್‌ರೆಡ್ಡಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು