ಬುಧವಾರ, ಸೆಪ್ಟೆಂಬರ್ 30, 2020
23 °C
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ ಅಭಿಪ್ರಾಯ

ಕೋಲಾರ: ತಂಬಾಕು ಸೇವನೆ ಸ್ವಪ್ರೇರಿತ ಅಪರಾಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ತಂಬಾಕು ಉತ್ಪನ್ನ ಸೇವನೆ ಚಟ ತ್ಯಜಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ ತಿಳಿಸಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಅನುಷ್ಠಾನ ಸಂಬಂಧ ಇಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ತಂಬಾಕು ಉತ್ಪನ್ನಗಳ ಸೇವನೆಯು ಸ್ವಯಂಪ್ರೇರಿತ ಅಪರಾಧ’ ಎಂದು ಅಭಿಪ್ರಾಯಪಟ್ಟರು.

‘ತಂಬಾಕು ಉತ್ಪನ್ನ ಸೇವಿಸುವವರ ಆರೋಗ್ಯ ಹಾಳಾಗುವುದರ ಜತೆಗೆ ಅಕ್ಕಪಕ್ಕದವರ ಆರೋಗ್ಯವೂ ಕೆಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದ್ದು, ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ತಂಬಾಕು ಬೆಳೆಯುವ ಮತ್ತು ತಂಬಾಕು ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ತಂಬಾಕು ಉತ್ಪನ್ನ ಸೇವನೆಯಲ್ಲಿ ತೊಡಗಿರುವವರನ್ನು ಆ ಚಟದಿಂದ ಮುಕ್ತಗೊಳಿಸಬೇಕು. ತಂಬಾಕು ಉತ್ಪನ್ನಗಳ ಸೇವನೆಯಲ್ಲಿ ಹೊಸಬರು ಸೇರ್ಪಡೆಯಾಗದಂತೆ ಅರಿವು ಮೂಡಿಸಬೇಕು’ ಎಂದು ಕಿವಿಮಾತು ಹೇಳಿದರು.

‘ತಂಬಾಕು ಉತ್ಪನ್ನಗಳ ಸೇವನೆಯಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗುವ ವ್ಯಕ್ತಿಗಳ ಆರೋಗ್ಯ ಸುಧಾರಣೆಗಾಗಿ ಸರ್ಕಾರ ಸಾವಿರಾರು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಜನ ದುಶ್ಚಟಗಳಿಂದ ದೂರ ಉಳಿದರೆ ಈ ಹಣ ಸಮಾಜದ ಅಭಿವೃದ್ಧಿಗೆ ಬಳಕೆಯಾಗಿ ಸಾಕಷ್ಟು ಉಪಯೋಗವಾಗುತ್ತದೆ’ ಎಂದರು.

ದಂಡ ವಿಧಿಸಿ: ‘ಕೋವಿಡ್–19 ಭೀತಿ ಹೆಚ್ಚಿದ್ದು, ತಂಬಾಕು ಉತ್ಪನ್ನಗಳನ್ನು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವಂತಿಲ್ಲ. ಆಹಾರ ಸುರಕ್ಷತಾ ಕಾಯ್ದೆ ಉಲ್ಲಂಘಿಸುವ ಹೋಟೆಲ್, ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ. ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ ಮತ್ತು ಸಿಗರೇಟು ಸೇದುವವರಿಗೆ, ತಂಬಾಕು ಉತ್ಪನ್ನಗಳನ್ನು ಜಗಿಯುವವರಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಂಡ ವಿಧಿಸಬೇಕು’ ಎಂದು ಹೇಳಿದರು.

‘ಧೂಮಪಾನಿಗಳು ಬೇರೆಯವರ ಆರೋಗ್ಯದ ಬಗ್ಗೆ ಆಲೋಚಿಸಬೇಕು. ತಂಬಾಕು ಉತ್ಪನ್ನ ಸೇವನೆಯ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಅರಿವು ಮೂಡಿಸಬೇಕು. ಇದರಿಂದ ಮಕ್ಕಳು ಮನೆಯ ಸದಸ್ಯರನ್ನು ಜಾಗೃತಗೊಳಿಸುತ್ತಾರೆ. ಜತೆಗೆ ಅವರು ಭವಿಷ್ಯದಲ್ಲಿ ಈ ದುಶ್ಚಟಕ್ಕೆ ಬಲಿಯಾಗುವುದಿಲ್ಲ’ ಎಂದರು.

ತಂಬಾಕು ಮುಕ್ತ ಶಾಲೆ: ‘ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರು ನಿಯಮ ಪಾಲನೆ ಮಾಡಬೇಕು ಮತ್ತು ಆ ಉತ್ಪನ್ನಗಳಿಂದ ಆರೋಗ್ಯ ಹಾಳಾಗುತ್ತದೆ ಎಂಬ ಸಂದೇಶವುಳ್ಳ ಸೂಚನಾ ಫಲಕ ಅಳವಡಿಸಬೇಕು’ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರ ಮೊಹಮ್ಮದ್ ಸಲಹೆ ನೀಡಿದರು.

‘ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಸಂಬಂಧ ಹಿಂದಿನ ವರ್ಷ ಜಿಲ್ಲೆಯ 100 ಶಾಲೆಗಳಲ್ಲಿ ಅರಿವು ಕಾರ್ಯಕ್ರಮ ನಡೆಸಲಾಗಿತ್ತು. ಜಿಲ್ಲೆಯ 63 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳಾಗಿ ಘೋಷಿಸಲಾಗಿದೆ. 430 ಮಂದಿ ವ್ಯಸನಿಗಳಿಗೆ ಚಿಕಿತ್ಸೆ ನೀಡಿ ತಂಬಾಕು ಚಟ ಬಿಡಿಸಲಾಗಿದೆ ಹಾಗೂ ರೋಸ್ ಕ್ಯಾಂಪೈನ್ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಆರೋಗ್ಯ, ಶಿಕ್ಷಣ, ಪೊಲೀಸ್‌ ಇಲಾಖೆ, ಕೆಎಸ್‌ಆರ್‌ಟಿಸಿ ಹಾಗೂ ನಗರಸಭೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು