ಮಂಗಳವಾರ, ಜನವರಿ 26, 2021
20 °C
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ

ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಕಡಿವಾಣ: ಸಚಿವ ನಾಗೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯಲ್ಲಿ ಕಳಪೆ ಬಿತ್ತನೆ ಬೀಜ ಮತ್ತು ಸಸಿ ಮಾರಾಟದ ಬಗ್ಗೆ ಸಾಕಷ್ಟು ದೂರು ಬಂದಿದ್ದು, ಈ ಅಕ್ರಮಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್‌ ಸೂಚಿಸಿದರು.

‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕೀಟನಾಶಕ, ಗೊಬ್ಬರ, ಬಿತ್ತನೆ ಬೀಜ ಮಳಿಗೆಗಳು ಹಾಗೂ ನರ್ಸರಿಗಳ ಮಾಲೀಕರು ಹೆಚ್ಚಿನ ಹಣ ಸಂಪಾದನೆಗಾಗಿ ರೈತರನ್ನು ವಂಚಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.‌

‘ಜಿಲ್ಲೆಯು ರಾಜ್ಯದ ರಾಜಧಾನಿ ಬೆಂಗಳೂರಿಗೆ ಹತ್ತಿರದಲ್ಲಿರುವುದರಿಂದ ಇಲ್ಲಿನ ಜನರು ಕೆಲಸಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಹೋಗಿ ಬರುತ್ತಿರುತ್ತಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರ ಕೊರತೆಯಾಗಿದೆ. ಈ ಸಮಸ್ಯೆ ನಿವಾರಣೆಗೆ ಸರ್ಕಾರ ಕೃಷಿ ಯಂತ್ರೋಪಕರಣ ನೀಡಿಕೆ, ಕೃಷಿ ಉತ್ಪನ್ನ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಹೆಚ್ಚು ಒತ್ತು ನೀಡುತ್ತಿದೆ’ ಎಂದರು.

‘ಕೃಷಿ ಸಚಿವರು ಜಿಲ್ಲೆಯ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡಿದ್ದು, ಹೋದ ಕಡೆಯಲ್ಲೆಲ್ಲಾ ಜಿಲ್ಲೆಯ ಬಗ್ಗೆ ರೈತರು ಮತ್ತು ಕೃಷಿ ತಾಂತ್ರಿಕತೆ ಬಗ್ಗೆ ಮೆಚ್ಚುಗೆಯ ಮಾತನಾಡುತ್ತಾರೆ. ಕೃಷಿ ಸಚಿವರು ಜಿಲ್ಲೆಗೆ ಕೃಷಿ ಯಂತ್ರೋಪಕರಣ ಖರೀದಿ, ಟೊಮೆಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯು ರೇಷ್ಮೆ, ಹಾಲು, ಚಿನ್ನ, ತರಕಾರಿ, ಮಾವು, ಹೂವುಗಳ ಉತ್ಪಾದನೆಗೆ ಹೆಸರುವಾಸಿಯಾಗಿದೆ. ಮುಖ್ಯವಾಗಿ ಜಿಲ್ಲೆಯ ಮಾವು ಜಾಗತಿಕ ಮನ್ನಣೆ ಪಡೆದಿದೆ. ಜಿಲ್ಲೆಯಲ್ಲಿ ನೀರಿನ ಶಾಶ್ವತ ಮೂಲಗಳಿಲ್ಲ ಮತ್ತು ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಆದರೂ ರೈತರು ಎದೆಗುಂದದೆ ಅಲ್ಪಸ್ವಲ್ಪ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಸಮಗ್ರ ಕೃಷಿ ಪದ್ಧತಿಯಲ್ಲಿ ಬೆಳೆ ಬೆಳೆಯುತ್ತಿದ್ದಾರೆ’ ಎಂದರು.

ಬೆನ್ನೆಲುಬು: ‘ರೈತರು ದೇಶದ ಬೆನ್ನೆಲುಬು. ಪ್ರಧಾನಿ ಮೋದಿಯವರು ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಕೃಷಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಹಾವಳಿ ತಡೆಗಾಗಿ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದಾರೆ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

‘ದೇಶದಲ್ಲಿ 60 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ದಲಿತರು, ರೈತರು ನೆಪ ಮಾತ್ರಕ್ಕೆ ಹೆಸರೇಳಿಕೊಂಡು ರಾಜಕಾರಣ ಮಾಡಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಚಾರ ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲೇ ಇತ್ತು. ಈಗ ಕಾಂಗ್ರೆಸ್‌ ಮುಖಂಡರಿಗೆ ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡಲು ಯಾವುದೇ ವಿಚಾರಗಳಿಲ್ಲ. ಹೀಗಾಗಿ ಸುಳ್ಳು ಹೇಳುತ್ತಾ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ದೇಶದಲ್ಲಿ ಈವರೆಗೆ ದಲ್ಲಾಳಿಗಳು, ಮಧ್ಯವರ್ತಿಗಳು ರೈತರ ಕೃಷಿ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಲಾಭ ಗಳಿಸುತ್ತಿದ್ದರು. ಇನ್ನು ಮುಂದೆ ರೈತರು ತಮ್ಮ ಬೆಳೆಗಳನ್ನು ಹೆಚ್ಚಿನ ಲಾಭಕ್ಕೆ ಮಾರಿ ಸ್ವಾವಲಂಬಿಗಳಾಗಬೇಕು. ಒಂದೇ ರೀತಿಯ ಬೆಳೆ ಬೆಳೆಯುವ ಬದಲು ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಸಕ ಕೆ.ವೈ.ನಂಜೇಗೌಡ, ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಉಪಾಧ್ಯಕ್ಷೆ ಯಶೋದಾ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ, ಸದಸ್ಯೆ ನಾಗಮಣಿ, ಮುಳಬಾಗಿಲು ಎಪಿಎಂಸಿ ಅಧ್ಯಕ್ಷ ವೆಂಕಟೇಶ್, ತಾ.ಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್, ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್, ಜಂಟಿ ನಿರ್ದೇಶಕಿ ರೂಪಾದೇವಿ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಬಿ.ಸಿ.ಸತೀಶ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿ.ಪಂ ಸಿಇಒ ಎನ್.ಎಂ.ನಾಗರಾಜ್, ಉಪ ವಿಭಾಗಾಧಿಕಾರಿ ಸೋಮಶೇಖರ್ ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು