ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ಮಾರಾಟ ನಿಯಂತ್ರಿಸಿ: ಎ.ನಳಿನಿಗೌಡ

Last Updated 2 ಜೂನ್ 2021, 13:03 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲಾಡಳಿತವು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಕೋವಿಡ್‌ ಸಂಕಷ್ಟದಲ್ಲಿರುವ ಬಡ ಕುಟುಂಬಗಳ ರಕ್ಷಣೆಗೆ ನಿಲ್ಲಬೇಕು ಎಂದು ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಒತ್ತಾಯಿಸಿದ್ದಾರೆ.

ಸರ್ಕಾರ ನಡೆಸಲು ಅಬಕಾರಿ ತೆರಿಗೆ ಬೇಕು. ಹೀಗಾಗಿ ಸರ್ಕಾರ ಲಾಕ್‌ಡೌನ್‌ ನಡುವೆಯೂ ಮದ್ಯದ ವಹಿವಾಟಿಗೆ ಸೀಮಿತ ಅವಕಾಶ ನೀಡಿದೆ. ಆದರೆ, ಮದ್ಯದಂಗಡಿ ಮಾಲೀಕರು ಗ್ರಾಮೀಣ ಭಾಗದಲ್ಲಿ ನಿಯಮಬಾಹಿರವಾಗಿ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.

ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಕೋವಿಡ್‌ 2ನೇ ಅಲೆ ತೀವ್ರವಾಗಿ ವ್ಯಾಪಿಸುತ್ತಿದೆ. ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲ. ಆರ್ಥಿಕ ಸಂಕಷ್ಟದಲ್ಲಿರುವ ಗ್ರಾಮೀಣ ಭಾಗದ ಜನರು ಕುಡಿತದ ಚಟಕ್ಕೆ ಬಲಿಯಾಗಿ ಮದ್ಯಕ್ಕೆ ವ್ಯರ್ಥವಾಗಿ ಹಣ ಖರ್ಚು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೆಂಡ ಸಾರಾಯಿ ಸಹವಾಸ ಮನೆ ಮಕ್ಕಳೆಲ್ಲಾ ಉಪವಾಸ ಎಂಬ ಗಾದೆಯಂತೆ ರೈತ ಮತ್ತು ಕೃಷಿ ಕಾರ್ಮಿಕರ ಕುಟುಂಬಗಳು ಪ್ರತಿನಿತ್ಯ ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಕುಟುಂಬ ನಿರ್ವಹಣೆ ಕಷ್ಟವಾಗಿರುವಾಗ ಸರ್ಕಾರದಿಂದ ನೀಡುವ ಉಚಿತ ಅಕ್ಕಿ ಹಾಗೂ ಹಾಲು ಬಟವಾಡೆ ನಂಬಿಕೊಂಡಿರುವ ಗ್ರಾಮೀಣ ಪ್ರದೇಶದ ಲಕ್ಷಾಂತರ ಬಡವರಿಗೆ ಆಕ್ರಮ ಮದ್ಯ ಮಾರಾಟವು ನುಂಗಲಾರದ ಬಿಸಿ ತುಪ್ಪವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜನರು ಮನೆಗೆ ಸೇರಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿ ಅದರಿಂದ ಬಂದ ಹಣದಲ್ಲಿ ಮದ್ಯ ಖರೀದಿಸಿ ಕುಡಿಯುತ್ತಿದ್ದಾರೆ. ಮನೆಯಲ್ಲಿರುವ ಅಲ್ಪಸ್ವಲ್ಪ ಚಿನ್ನಾಭರಣ ಅಡವಿಟ್ಟು ಮದ್ಯಕ್ಕೆ ಹಣ ಹೊಂದಿಸಿಕೊಳ್ಳುತ್ತಿದ್ದಾರೆ. ಮದ್ಯವ್ಯಸನಿಗಳ ಹೆಂಡತಿ ಮಕ್ಕಳು ಹಸಿವಿನಿಂದ ನರಳುವಂತಾಗಿದೆ. ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಬಕಾರಿ ತಮ್ಮ ಜವಾಬ್ದಾರಿ ಅರಿತು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಬಡ ಜನರ ರಕ್ಷಣೆಗೆ ನಿಲ್ಲಬೇಕು. ಅಕ್ರಮವಾಗಿ ಮದ್ಯ ಮಾರುವವರ ವಿರುದ್ದ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಅವರ ಪರವಾನಗಿ ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT