ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಷೇಧ ಕಾಯ್ದೆ: ಅಸಂವಿಧಾನಿಕ ನಡೆ

ರಾಜ್ಯ ಸರ್ಕಾರದ ವಿರುದ್ಧ ಪಿಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಪಾಷಾ ಕಿಡಿ
Last Updated 14 ಮೇ 2022, 14:24 IST
ಅಕ್ಷರ ಗಾತ್ರ

ಕೋಲಾರ: ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ರಾಜ್ಯ ಸರ್ಕಾರ ಕ್ರಮ ಅಸಾಂವಿಧಾನಿಕವಾಗಿದ್ದು, ಇದು ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ದುರುದ್ದೇಶ ಹೊಂದಿದೆ ಎಂದು ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಪಾಷಾ ಕಿಡಿಕಾರಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯವು ದೇಶದ ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕಾಗಿದೆ. ಸಂವಿಧಾನದ ಪ್ರಕಾರ ಪ್ರತಿ ವ್ಯಕ್ತಿ ತನಗೆ ಇಷ್ಟವಾದ ಧರ್ಮವನ್ನು ಅಂಗೀಕರಿಸುವ, ಆಚರಿಸುವ, ಪ್ರಚಾರ ಪಡಿಸುವ ಸ್ವಾತಂತ್ರ್ಯ ಹೊಂದಿರುತ್ತಾನೆ. ಆದರೆ, ಅಲ್ಪಸಂಖ್ಯಾತರ ವಿರೋಧಿಯಾಗಿರುವ ಬಿಜೆಪಿಯು ಈ ಹಕ್ಕನ್ನು ಬಲವಂತದ ಕಾನೂನಿನ ಮೂಲಕ ದಮನ ಮಾಡಲು ಹೊರಟಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.

ಬಲವಂತದ ಮತಾಂತರಕ್ಕೆ ಅವಕಾಶ ಇಲ್ಲದಿದ್ದರೂ ಅದರ ನಿಯಂತ್ರಣಕ್ಕೆ ಪ್ರತ್ಯೇಕವಾಗಿ ಕಾನೂನು ರೂಪಿಸುತ್ತಿರುವುದರ ಹಿಂದೆ ಬಿಜೆಪಿ ಸರ್ಕಾರದ ರಾಜಕೀಯ ಲೆಕ್ಕಾಚಾರವಿದೆ. ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಜಾರ್ಖಂಡ್‌ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ವಿವಾದಿತ ಮತಾಂತರ ವಿರೋಧಿ ಕಾನೂನು ಜಾರಿಗೊಳಿಸಲಾಗಿದೆ. ಇದು ಪ್ರಮುಖವಾಗಿ ಮುಸ್ಲಿಂ, ಕ್ರಿಶ್ಚಿಯನ್, ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಸಂಘ ಪರಿವಾರದ ಶಕ್ತಿಗಳು ರಾಜ್ಯದಲ್ಲಿ ಭಾವನಾತ್ಮಕ ವಿಚಾರಗಳ ಮೂಲಕ ಅಲ್ಪಸಂಖ್ಯಾತರನ್ನು ನಿರಂತರವಾಗಿ ಬೇಟೆಯಾಡುತ್ತಿದ್ದು, ಅವರು ವಿವಾದಿತ ಕಾನೂನನ್ನು ಮತ್ತೊಂದು ಅಸ್ತ್ರವಾಗಿ ಬಳಸುವುದರಲ್ಲಿ ಸಂಶಯವಿಲ್ಲ. ಭ್ರಷ್ಟಾಚಾರ, ಹಗರಣದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರವು ಜನರಿಂದ ಬಹಳಷ್ಟು ಟೀಕೆ ಎದುರಿಸುತ್ತಿದೆ. ಸಚಿವ ಸಂಪುಟದ ಈ ತುರ್ತು ನಿರ್ಧಾರವು ಜನರ ಹಾದಿ ತಪ್ಪಿಸುವ ಪ್ರಯತ್ನ ಎಂದು ಟೀಕಿಸಿದ್ದಾರೆ.

ದಮನಿತ ವರ್ಗಗಳನ್ನು ವಿಶೇಷವಾಗಿ ಅಲ್ಪಸಂಖ್ಯಾತರನ್ನು ಗುರಿಪಡಿಸುವ ವಿವಾದಿತ ಮತಾಂತರ ನಿಷೇಧ ಕಾನೂನನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ರಾಜ್ಯಪಾಲರು ಇದಕ್ಕೆ ಅಂಕಿತ ಹಾಕದೆ ನಾಗರಿಕರ ಧಾರ್ಮಿಕ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು. ಜತೆಗೆ ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಖಾತರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT