ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ 34 ಮಂದಿಗೆ ಕೊರೊನಾ ವೈರಸ್‌ ಸೋಂಕು

ಒಂದೇ ದಿನ 34 ಮಂದಿಗೆ ಸೋಂಕು: ಬೆಚ್ಚಿದ ಜನ
Last Updated 9 ಜುಲೈ 2020, 15:23 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಗುರುವಾರ ಕೊರೊನಾ ಸೋಂಕಿನ ಮಹಾ ಸ್ಫೋಟವಾಗಿದ್ದು, ಒಂದೇ ದಿನ 34 ಮಂದಿಗೆ ಸೋಂಕು ಹರಡಿದೆ.

ಜಿಲ್ಲೆಯಲ್ಲಿ ಮೇ 12ರಂದು ಮೊದಲ ಬಾರಿಗೆ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಆ ನಂತರ ಈವರೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಸೋಂಕು ಸುನಾಮಿಯಂತೆ ಆತಂಕ ಸೃಷ್ಟಿಸಿದ್ದು, ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆವರೆಗೆ ಸಕ್ರಿಯ ಸೋಂಕಿತರ ಸಂಖ್ಯೆ 110 ಇತ್ತು. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 8 ಮಂದಿ ಗುಣಮುಖರಾಗಿ ಗುರುವಾರ ಬೆಳಿಗ್ಗೆಯಷ್ಟೇ ಮನೆಗೆ ಮರಳಿದ್ದರು. ಕೋಲಾರ ತಾಲ್ಲೂಕಿನ 3 ಮಂದಿ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರು ಸೋಂಕಿತರನ್ನು ಮನೆಗೆ ಕಳುಹಿಸಲಾಗಿತ್ತು.

ಇದರ ಬೆನ್ನಲ್ಲೇ ಮತ್ತೆ 34 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 136ಕ್ಕೆ ಏರಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 17 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಉಳಿದಂತೆ ಕೆಜಿಎಫ್‌ ತಾಲ್ಲೂಕಿನಲ್ಲಿ 8 ಮಂದಿಗೆ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ತಲಾ 4 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಸೋಂಕಿತರ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯು ಸೋಂಕಿತರ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಿದ್ದಾರೆ.

ಹಾಸಿಗೆ ಕೊರತೆ ಆತಂಕ: ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಯ ನಿದ್ದೆಗಡೆಸಿದೆ. ಕೋವಿಡ್‌–19ಗೆ ಚಿಕಿತ್ಸೆ ನೀಡುತ್ತಿರುವ ಜಿಲ್ಲಾ ಕೇಂದ್ರದ ಎಸ್‌ಎನ್‌ಆರ್‌ ಆಸ್ಪತ್ರೆ ಹಾಗೂ ಆರ್‌.ಎಲ್.ಜಾಲಪ್ಪ ಆಸ್ಪತ್ರೆಯು ಸೋಂಕಿತರಿಂದ ತುಂಬಿ ಹೋಗಿವೆ. ಸೋಂಕಿತರ ಸಂಖ್ಯೆ ಇದೇ ರೀತಿ ಹೆಚ್ಚುತ್ತಾ ಹೋದರೆ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಸೃಷ್ಟಿಯಾಗುವ ಆತಂಕ ಎದುರಾಗಿದೆ.

620 ಮಂದಿಗೆ ಪರೀಕ್ಷೆ: ಆರೋಗ್ಯ ಇಲಾಖೆಯು ಜಿಲ್ಲೆಯಲ್ಲಿ ದಿನಕ್ಕೆ ಕೊರೊನಾ ಸೋಂಕಿನ ಸಂಬಂಧ 320 ಮಂದಿಯ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಗುರಿ ನಿಗದಿಪಡಿಸಿದೆ. ಆದರೆ, ಜಿಲ್ಲೆಯಲ್ಲಿ ಈ ನಿಗದಿತ ಗುರಿಯನ್ನು ಮೀರಿ ದಿನಕ್ಕೆ 620 ಮಂದಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಮುಖ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ಜನರ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT