ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಕೊರೊನಾ ತಪಾಸಣಾ ಕೇಂದ್ರ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್‌ ಭರವಸೆ
Last Updated 28 ಏಪ್ರಿಲ್ 2020, 16:17 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕು ತಪಾಸಣಾ ಕೇಂದ್ರ ಆರಂಭಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಜತೆ ಮಾತನಾಡುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್‌ ಭರವಸೆ ನೀಡಿದರು.

ಇಲ್ಲಿನ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆರಂಭಿಸಿರುವ ಐಸೋಲೇಷನ್‌ ವಾರ್ಡ್‌ಗೆ ಮಂಗಳವಾರ ಭೇಟಿ ನೀಡಿ ವೈದ್ಯರ ಸಭೆ ನಡೆಸಿದ ಉಮಾ ಮಹದೇವನ್‌, ‘ಜಿಲ್ಲಾಡಳಿತ ಕೊರೊನಾ ಸೋಂಕಿನ ತಡೆಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಿಲ್ಲೆಯ ಗಡಿಗೆ ಹೊಂದಿಕೊಂಡಂತಿರುವ ಆಂಧ್ರಪ್ರದೇಶ, ತಮಿಳುನಾಡು, ರಾಜ್ಯದ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿದೆ. ಆದರೆ, ಕೋಲಾರ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಜಿಲ್ಲೆಯು ಕೊರೊನಾ ಸೋಂಕು ಮುಕ್ತವಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯಲ್ಲಿ ಸೋಂಕು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು. ಸೋಂಕು ತಡೆಗೆ ಜಿಲ್ಲಾಡಳಿತಕ್ಕೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ತಾಂತ್ರಿಕ ನೆರವು ನೀಡಲಾಗುತ್ತದೆ’ ಎಂದು ಹೇಳಿದರು.

ಮುಖ್ಯ ಜಿಲ್ಲೆ: ‘ರಾಜ್ಯದ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿರುವ ಕೋಲಾರವು ಮುಖ್ಯ ಜಿಲ್ಲೆಯಾಗಿದೆ. ಇಲ್ಲಿಂದ ಬೆಂಗಳೂರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು, ತರಕಾರಿ ಪೂರೈಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 8 ಸಾವಿರ ಕೈಗಾರಿಕೆಗಳಿದ್ದು, ಇಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯಗಳ ಕಾರ್ಮಿಕರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಬೇಕು’ ಎಂದು ಸೂಚಿಸಿದರು.

‘ಲಾಕ್‌ಡೌನ್‌ ಕಾರಣಕ್ಕೆ ಕೈಗಾರಿಕೆಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿದ್ದು, ಹಣದ ಹರಿವು ಕಡಿಮೆಯಾಗಿದೆ. ಇಡೀ ದೇಶದಲ್ಲಿ ಈ ರೀತಿಯ ಬಿಕ್ಕಟ್ಟು ಎದುರಾಗಿದೆ. ಪರಿಸ್ಥಿತಿ ಸುಧಾರಣೆಗೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಕೊರೊನಾ ಸೋಂಕು ತಡೆಗೆ ಜಿಲ್ಲೆಯಲ್ಲಿ ಜನರ ಆರೋಗ್ಯ ತಪಾಸಣೆ ಹೆಚ್ಚು ಮಾಡಬೇಕು’ ಎಂದು ಸಲಹೆ ನೀಡಿದರು.

ಸಕಲ ಸಿದ್ಧತೆ: ‘ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. 3 ಹಾಸಿಗೆ ಸಾಮರ್ಥ್ಯದ ಐಸೋಲೇಷನ್ ವಾರ್ಡ್‌ಗಳಿವೆ. ಜತೆಗೆ 3 ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕವಿದೆ. ಹೆಚ್ಚುವರಿಗೆ 15 ಐಸೋಲೇಷನ್ ವಾರ್ಡ್‌ ತೆರೆಯಲಾಗಿದೆ’ ಎಂದು ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ವೈದ್ಯಕೀಯ ಅಧೀಕ್ಷಕ ಡಾ.ಎಸ್‌.ಎಂ.ಅಜೀಂ ಮೋಹಿಯುದ್ದೀನ್‌ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್‌.ವಿ.ದರ್ಶನ್‌, ಉಪ ವಿಭಾಗಾಧಿಕಾರಿ ಸಿ.ಸೋಮಶೇಖರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT