ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು: ಆತಂಕ ಬೇಡ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಡಿಡಿಪಿಐ ರತ್ನಯ್ಯ ಕಿವಿಮಾತು‌
Last Updated 20 ಮೇ 2020, 14:03 IST
ಅಕ್ಷರ ಗಾತ್ರ

ಕೋಲಾರ: ‘ಕೊರೊನಾ ಸೋಂಕಿನ ಬಗ್ಗೆ ಆತಂಕ ಬೇಡ. ಇಲಾಖೆಯು ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪರೀಕ್ಷೆ ನಡೆಸುತ್ತದೆ. ಪುನರ್ಮನನ ತರಗತಿ ಸಹ ನಡೆಸುತ್ತೇವೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಇಲಾಖೆಯು ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಫೋನ್‌–ಇನ್‌ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡಿ, ‘ಕೊರೊನಾ ಸೋಂಕಿನ ಕಾರಣಕ್ಕೆ ಪರೀಕ್ಷಾ ಕೊಠಡಿಯಲ್ಲಿ ತಲಾ ಒಂದು ಮೀಟರ್ ಅಂತರ ಕೊಟ್ಟು ಮಕ್ಕಳನ್ನು ಕೂರಿಸಲಾಗುತ್ತದೆ. ಆತಂಕವಿಲ್ಲದೆ ಅಭ್ಯಾಸ ಮುಂದುವರಿಸಿ’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮಕ್ಕೆ ಕರೆ ಮಾಡಿದ ಬಹುಪಾಲು ವಿದ್ಯಾರ್ಥಿಗಳು, ‘ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಹೆಚ್ಚುತ್ತಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತದೆಯೇ? ಪುನರ್ಮನನ ತರಗತಿ ಯಾವಾಗ ಆರಂಭವಾಗುತ್ತದೆ’ ಎಂದು ಪ್ರಶ್ನೆ ಕೇಳಿದರು.

ಒಟ್ಟಾರೆ 226 ವಿದ್ಯಾರ್ಥಿಗಳು ಕರೆ ಮಾಡಿದರು. ಈ ಪೈಕಿ ಗ್ರಾಮೀಣ ಭಾಗದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕರೆ ಮಾಡಿದ್ದು ವಿಶೇಷವಾಗಿತ್ತು. ಪ್ರವೇಶಪತ್ರ ನೀಡಿಕೆ ಬಗ್ಗೆ ಹೆಚ್ಚಿನ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರು.

ಇಲಾಖೆಯಿಂದ ಮಾಸ್ಕ್‌: ‘ನಮಗೆ ಪುನರ್ಮನನ ತರಗತಿಯ ಅಗತ್ಯವಿದೆ. ಪರೀಕ್ಷೆಗೆ ಬರುವಾಗ ನಾವೇ ಮಾಸ್ಕ್ ತರಬೇಕಾ ಅಥವಾ ಇಲಾಖೆಯಿಂದ ಕೊಡುತ್ತೀರಾ? ಸ್ಯಾನಿಟೈಸರ್ ನೀಡುತ್ತೀರಾ’ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ‘ಇಲಾಖೆಯಿಂದಲೇ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ ಕೊಡುತ್ತೇವೆ’ ಎಂದು ಹೇಳಿದರು.

ಶಿಕ್ಷಕರನ್ನು ಸಂಪರ್ಕಿಸಿ: ‘ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶಕ್ಕೆ ಫೋನ್‌–ಇನ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಮಸ್ಯೆಗಳಿದ್ದರೆ ಶಿಕ್ಷಕರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಉತ್ತರ ಪಡೆದುಕೊಳ್ಳಿ. ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರಬೇಡಿ. ಮಕ್ಕಳಿಗೆ ಇನ್ನೂ ಸಮಸ್ಯೆಗಳಿದ್ದರೆ ಮೇ 28ರಂದು ಮತ್ತೆ ನಡೆಯುವ ಫೋನ್‌–ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿ’ ಎಂದು ಮಾಹಿತಿ ನೀಡಿದರು.

ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಡಿವೈಪಿಸಿ ಮೋಹನ್‌ಬಾಬು, ಎವೈಪಿಸಿ ಸಿದ್ದೇಶ್, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT