ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಸಕಲ ಸಿದ್ಧತೆ

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಕಟ್ಟೆಚ್ಚರ
Last Updated 27 ಅಕ್ಟೋಬರ್ 2020, 13:13 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಬುಧವಾರ (ಅ.28) ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತವು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿದೆ.

ಮಂಗಳವಾರ ಸಂಜೆಯೇ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳಿಂದ 3 ಅಭ್ಯರ್ಥಿಗಳು, ನೋಂದಾಯಿತ ರಾಜಕೀಯ ಪಕ್ಷಗಳಿಂದ 2 ಅಭ್ಯರ್ಥಿಗಳು ಹಾಗೂ ಪಕ್ಷೇತರರಾಗಿ 10 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅಂತಿಮವಾಗಿ 15 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಮತದಾರರು ಬುಧವಾರ ಅಭ್ಯರ್ಥಿಗಳ ಸೋಲು ಗೆಲುವು ನಿರ್ಧರಿಸಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟಾರೆ 21,521 ಮಂದಿ ಪದವೀಧರ ಮತದಾರರಿದ್ದಾರೆ. ಈ ಪೈಕಿ 13,061 ಮಂದಿ ಪುರುಷ ಮತ್ತು 8,460 ಮಂದಿ ಮಹಿಳಾ ಮತದಾರರಿದ್ದಾರೆ. ಆರು ತಾಲ್ಲೂಕುಗಳಿಂದ ಒಟ್ಟಾರೆ 36 ಮತಗಟ್ಟೆ ಸ್ಥಾಪಿಸಲಾಗಿದೆ. ಇದರಲ್ಲಿ 27 ಮುಖ್ಯ ಮತಗಟ್ಟೆ ಮತ್ತು 9 ಹೆಚ್ಚುವರಿ ಮತಗಟ್ಟೆ ಸೇರಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕಕರು ಸೇರಿದಂತೆ 250 ಮಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಯಾವುದೇ ಅಡೆತಡೆ ಇಲ್ಲದೆ ಪಾರದರ್ಶಕವಾಗಿ ಚುನಾವಣೆ ನಡೆಸುವ ಉದ್ದೇಶಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ತಲಾ 4 ಮಂದಿ ಒಳಗೊಂಡ 18 ಫ್ಲೈಯಿಂಗ್‌ ಸ್ಕ್ವಾಡ್‌, ತಲಾ 3 ಮಂದಿ ಒಳಗೊಂಡ 6 ವಿಶೇಷ ವಿಡಿಯೋ ತಂಡ ರಚಿಸಲಾಗಿದೆ. ಪ್ರತಿ ಹೋಬಳಿಗೆ ಒಬ್ಬರಂತೆ 27 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಓಲೈಕೆ ಕಸರತ್ತು: ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳ ಬೆಂಬಲಿಗರು ಮತದಾರರ ಓಲೈಕೆಗೆ ಅಂತಿಮ ಕ್ಷಣದ ಕಸರತ್ತು ನಡೆಸಿದ್ದಾರೆ. ಹಣ ಹಂಚಿಕೆ ಹಾಗೂ ಉಡುಗೊರೆ ನೀಡಿಕೆಯ ಗುಸುಗುಸು ಕೇಳಿ ಬರುತ್ತಿದ್ದು, ಜಿಲ್ಲಾಡಳಿತವು ಚುನಾವಣಾ ಅಕ್ರಮ ತಡೆಗೆ ಕಟ್ಟೆಚ್ಚರ ವಹಿಸಿದೆ.

ಜಿಲ್ಲೆಯ ಪ್ರವೇಶ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಹಣ ಹಾಗೂ ಮದ್ಯ ಸಾಗಣೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಚುನಾವಣಾ ಅಕ್ರಮಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.

ಹಿರಿಯ ಪೊಲೀಸ್‌ ಅಧಿಕಾರಿಗಳು, ಮಾದರಿ ಚುನಾವಣಾ ನೀತಿಸಂಹಿತೆ ತಂಡದ ಅಧಿಕಾರಿಗಳು ಜಿಲ್ಲೆಯಲ್ಲಿ ನಿಯಮಿತವಾಗಿ ಗಸ್ತು ನಡೆಸಲಿದ್ದಾರೆ. ಮತಗಟ್ಟೆ ಅಧಿಕಾರಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸೇವೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಔಷಧಗಳು, ಓಆರ್‍ಎಸ್ ಪೊಟ್ಟಣ ಮತ್ತು ಆಯಕಟ್ಟಿನ ಜಾಗದಲ್ಲಿ ಆಂಬುಲೆನ್ಸ್‌ ಸೇವೆ ಕಲ್ಪಿಸಲಾಗಿದೆ.

ತಂಡ ರಚನೆ: ಕೋವಿಡ್-–19 ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ 1 ಮತ್ತು ಪ್ರತಿ ತಾಲ್ಲೂಕಿಗೆ ಒಂದರಂತೆ 6 ತಂಡ ರಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರು ಜಿಲ್ಲಾ ಮಟ್ಟದ ತಂಡಕ್ಕೆ ನೋಡಲ್‌ ಅಧಿಕಾರಿಯಾಗಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ.

ಮತಗಟ್ಟೆಗಳಲ್ಲಿ ಕೋವಿಡ್‌ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ವಿತರಿಸಲಾಗಿದೆ. ಮತದಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಮತಗಟ್ಟೆಗೆ ಬರಬೇಕೆಂದು ಸೂಚಿಸಲಾಗಿದೆ. ಜತೆಗೆ ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.ಮತಗಟ್ಟೆ ಸಿಬ್ಬಂದಿಯು ಆಯಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರಗಳಲ್ಲಿ ಮಂಗಳವಾರ ಬ್ಯಾಲೆಟ್‌ ಪೇಪರ್‌ ಮತ್ತು ಮತಪೆಟ್ಟಿಗೆ ಪಡೆದು ಪೊಲೀಸ್‌ ಭದ್ರತೆಯಲ್ಲಿ ಮತಗಟ್ಟೆಗಳಿಗೆ ತೆರಳಿದರು.

ಗುರುತಿನ ಚೀಟಿ: ಮತದಾರರು ಎಪಿಕ್ ಕಾರ್ಡ್, ಚಾಲನಾ ಪರವಾನಗಿ (ಡಿ.ಎಲ್‌), ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಸಾರ್ವಜನಿಕ ನಿಗಮ ಮಂಡಳಿಯಿಂದ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಕಚೇರಿಯಿಂದ ನೀಡಿರುವ ಭಾವಚಿತ್ರವಿರುವ ಪಾಸ್‌ಬುಕ್‌, ಪಾನ್‌ಕಾರ್ಡ್‌, ನರೇಗಾ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಸೇರಿದಂತೆ 12 ಬಗೆಯ ಪರ್ಯಾಯ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT