ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಯೋಜನೆಗೆ ನ್ಯಾಯಾಲಯದ ಕಣ್ಗಾವಲು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ್ ಹೇಳಿಕೆ
Last Updated 30 ಸೆಪ್ಟೆಂಬರ್ 2020, 14:31 IST
ಅಕ್ಷರ ಗಾತ್ರ

ಕೋಲಾರ: ‘ಕೇಂದ್ರ ಸರ್ಕಾರದ ಬಡತನ ನಿರ್ಮೂಲನಾ ಯೋಜನೆಯಡಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆಯೇ ಎಂಬ ಬಗ್ಗೆ ಕಾನೂನು ಸೇವಾ ಪ್ರಾಧಿಕಾರ ಮೇಲ್ವಿಚಾರಣೆ ನಡೆಸಲಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ತಿಳಿಸಿದರು.

ಇಲ್ಲಿ ಬುಧವಾರ ಜಿಲ್ಲೆಯ ಸಾಮಾನ್ಯ ಸೇವಾ ಕೇಂದ್ರಗಳ ಮುಖ್ಯಸ್ಥರ ಜತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿ, ‘ಬಡವರ ಶ್ರೇಯೋಭಿವೃದ್ದಿಗಾಗಿ ಸರ್ಕಾರ ಬಡತನ ನಿರ್ಮೂಲನಾ ಯೋಜನೆ ಜಾರಿಗೆ ತಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ಆರೋಪವಿದೆ’ ಎಂದರು.

‘ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸರ್ಕಾರಗಳ ಯೋಜನೆ ಅನುಷ್ಠಾನ ಸಂಬಂಧ ಪರಿಶೀಲನೆ ನಡೆಸಲಿದೆ. ರಾಷ್ಟ್ರೀಯ ಪ್ರಾಧಿಕಾರದ ನಿರ್ದೇಶನವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿ ರಚಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ವೇಣುಗೋಪಾಲಗೌಡ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ’ ಎಂದು ವಿವರಿಸಿದರು.

‘ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳಿಂದ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಆಯಾ ಇಲಾಖೆಯಿಂದ ಪಡೆದುಕೊಳ್ಳಲಾಗಿದೆ’ ಎಂದು ತಿಳಿಸಿದರು.

ಅಧಿಕಾರಿ ನೇಮಕ: ‘ವಿಡಿಯೋ ಸಂವಾದದಲ್ಲಿ ವ್ಯಕ್ತವಾದ ಅಭಿಪ್ರಾಯ ಆಧರಿಸಿ ಸಮಿತಿಯು ಪ್ರತಿ ಗ್ರಾಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯ್ಕೆಯಾದ ವಕೀಲರನ್ನು ಕಾನೂನು ಸೇವೆಗಳ ಅಧಿಕಾರಿ ಎಂದು ನೇಮಿಸಿದೆ. ಇವರು 3 ಮಂದಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಸಮಿತಿ ರಚಿಸಿ ಅವರ ಮೂಲಕ ಯೋಜನೆ ಅರ್ಹರಿಗೆ ತಲುಪಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ’ ಎಂದರು.

‘ಗ್ರಾಮ ಮಟ್ಟದಲ್ಲಿ ಸ್ವಯಂ ಸೇವಕರ ಸಮಿತಿಯು ಪ್ರತಿ ಮನೆಗೆ ಖುದ್ದು ಭೇಟಿ ನೀಡಿ ಯೋಜನೆಯ ಲಾಭ ಸಿಗುತ್ತಿದೆಯೇ ಅಥವಾ ಇಲ್ಲವೇ ಎನ್ನುವುದರ ಜತೆಗೆ ಯೋಜನೆಯ ಸಮಗ್ರ ಮಾಹಿತಿ ಕಲೆ ಹಾಕಲಿದೆ. ಅರ್ಹರು ಯೋಜನೆಯಿಂದ ವಂಚಿತರಾಗಿರುವುದು ಕಂಡುಬಂದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಕರೆಸಿ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ಕೆಲಸ ಮಾಡಲಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ವಕೀಲರ ಸಂಘಟದ ಕಾರ್ಯದರ್ಶಿ ರಘುಪತಿಗೌಡ, ವಕೀಲ ಕೆ.ಆರ್.ಧನರಾಜ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT