ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಿಕ್ಷಕರ ಪ್ಯಾಕೇಜ್‌ ಹೆಚ್ಚಿಸಿ

Last Updated 4 ಜೂನ್ 2021, 14:09 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಅನುದಾನರಹಿತ ಶಾಲೆ, ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಘೋಷಿಸಿರುವ ಪ್ಯಾಕೇಜ್‌ನ ಮೊತ್ತವನ್ನು ₹ 10 ಸಾವಿರಕ್ಕೆ ಹೆಚ್ಚಿಸಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ನೇತೃತ್ವದಲ್ಲಿ ಹೋಗಿದ್ದ ವಿಧಾನ ಪರಿಷತ್‌ ಸದಸ್ಯರ ನಿಯೋಗಕ್ಕೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ ಖಾಸಗಿ ಶಿಕ್ಷಕರಿಗೆ ತಲಾ ₹ 5 ಸಾವಿರದ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ, ಈ ಹಣ ಯಾವುದಕ್ಕೂ ಸಾಲದು. ಮತ್ತೊಂದು ಕಂತಿನಲ್ಲಿ ಇನ್ನೂ ₹ 5 ಸಾವಿರ ಘೋಷಿಸುವ ಮೂಲಕ ಶಿಕ್ಷಕರ ನೆರವಿಗೆ ಬರಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ರಾಜ್ಯದಲ್ಲಿ ಖಾಸಗಿ ಶಿಕ್ಷಣ ಕ್ಷೇತ್ರವು ಶಿಕ್ಷಣ ವ್ಯವಸ್ಥೆಗೆ ಅಪಾರ ಕೊಡುಗೆ ನೀಡಿದೆ. ಕೋವಿಡ್‌ನಿಂದ ಬಹುಪಾಲು ಶಾಲಾ ಕಾಲೇಜು ಆಡಳಿತ ಮಂಡಳಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಅಲ್ಲಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಸಂಬಳವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಶುಲ್ಕ ವಸೂಲಿಗೆ ಅಡ್ಡಿಯಾಗಿದೆ. ತಾಲ್ಲೂಕು, ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಪೋಷಕರು ಸರ್ಕಾರ ನಿಗದಿಪಡಿಸಿದ ಶುಲ್ಕವನ್ನೂ ಕಟ್ಟಿಲ್ಲ. 6ನೇ ತರಗತಿಯಿಂದ 9ನೇ ತರಗತಿವರೆಗೂ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಸೂಚಿಸಿದ್ದರಿಂದ ಪರೀಕ್ಷಾ ಸಂದರ್ಭದಲ್ಲಿ ವರ್ಷದ ಬಾಕಿ ಶುಲ್ಕ ಕಟ್ಟುತ್ತಿದ್ದ ಪೋಷಕರು ಶಾಲೆಗಳತ್ತ ತಿರುಗಿ ನೋಡಿಲ್ಲ ಎಂದು ಹೇಳಿದ್ದಾರೆ.

ಕೋವಿಡ್‌ ಖಾಸಗಿ ಅನುದಾನರಹಿತ ಶಾಲಾ ಕಾಲೇಜು ಸಿಬ್ಬಂದಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಪೋಷಕರು ಶುಲ್ಕ ಭರಿಸದ ಕಾರಣ ಶಾಲೆಗಳ ಆಡಳಿತ ಮಂಡಳಿಗಳು ಶಿಕ್ಷಕರಿಗೆ ವೇತನ ನೀಡುತ್ತಿಲ್ಲ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT