ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೋವಿಡ್‌ ಆತಂಕ; ಸ್ವಾತಂತ್ರ್ಯ ದಿನಾಚರಣೆ ಸರಳ

Last Updated 3 ಆಗಸ್ಟ್ 2021, 15:15 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು. ರಾಷ್ಟ್ರೀಯ ಹಬ್ಬಗಳಲ್ಲಿ ಕನ್ನಡ ಸಂಸ್ಕೃತಿಗೆ ಆದ್ಯತೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಸೂಚಿಸಿದರು.

ಸ್ವಾತಂತ್ರ ದಿನಾಚರಣೆ ಸಂಬಂಧ ಇಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲಾ ಕೇಂದ್ರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಇರಬೇಕು’ ಎಂದರು.

‘ಸರ್ಕಾರಿ ಕಚೇರಿಗಳಲ್ಲಿ ಬೆಳ್ಳಿಗೆ 8 ಗಂಟೆಗೆ ಧ್ವಜಾರೋಹಣ ಮಾಡಿ ನಂತರ ಬೆಳಿಗ್ಗೆ 8.55ಕ್ಕೆ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಯಾವುದೇ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗೈರಾದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ 2 ದಿನ ಸರ್ಕಾರಿ ಕಚೇರಿಗಳಿಗೆ ದೀಪಾಂಲಕಾರ ಮಾಡಿಸಬೇಕು. ಮತ್ತು ಕಚೇರಿಗಳನ್ನು ಸ್ವಚ್ಛಗೊಳಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆಯನ್ನು ಸುಸಜ್ಜಿತವಾಗಿ ಸಿದ್ಧಗೊಳಿಸಬೇಕು. ಪರೇಡ್‌ನಲ್ಲಿ ಭಾಗಿಯಾಗುವ ತಂಡಗಳಿಗೆ ಬೆಳಿಗ್ಗೆ ಉಪಹಾರದ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

ಮಾರ್ಗಸೂಚಿ ಪಾಲನೆ: ‘ಕೋವಿಡ್ 3ನೇ ಅಲೆಯ ಆತಂಕವಿರುವುದರಿಂದ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಲಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಸಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಕೊರೊನಾ ವಾರಿಯರ್ಸ್‌ಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ಜತೆಗೆ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು. ಪೊಲೀಸ್, ಗೃಹರಕ್ಷಕದಳ, ಸೇವಾ ದಳ, ಎನ್‌ಸಿಸಿ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಪರೇಡ್‌ನಲ್ಲಿ ಭಾಗಿಯಾಗಬೇಕು. ಕೋವಿಡ್ ಕಾರಣಕ್ಕೆ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್‌ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಉಪ ವಿಭಾಗಾಧಿಕಾರಿ ಆನಂದ್ ಪ್ರಕಾಶ್‌ಮೀನಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT