ಶುಕ್ರವಾರ, ಮೇ 14, 2021
27 °C
ಜಿಲ್ಲಾಧಿಕಾರಿ ಸಭೆಯಲ್ಲಿ ವಿಸ್ತೃತ ಚರ್ಚೆ: ಸದಸ್ಯರ ಸಹಮತ

ಕೋವಿಡ್‌: ವಾರಾಂತ್ಯಕ್ಕೆ ಎಪಿಎಂಸಿ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೊರೊನಾ ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದ ಎಪಿಎಂಸಿಯನ್ನು ವಾರಾಂತ್ಯದ ಶನಿವಾರ ಮತ್ತು ಭಾನುವಾರ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಯಿತು.

ಇಲ್ಲಿ ಗುರುವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ನಡೆದ ಎಪಿಎಂಸಿ ಸದಸ್ಯರ ಸಭೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗೆ ಮಾರುಕಟ್ಟೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ವಹಿವಾಟು ಸ್ಥಗಿತಗೊಳಿಸುವ ಬಗ್ಗೆ ವಿಸ್ತೃತ ಚರ್ಚೆ ನಡೆದು ವಾರಾಂತ್ಯದಲ್ಲಿ ಮಾರುಕಟ್ಟೆ ಬಂದ್‌ ಮಾಡುವ ನಿರ್ಧಾರಕ್ಕೆ ಬರಲಾಯಿತು.

‘ಜಿಲ್ಲೆಯಲ್ಲಿ ದಿನದಿಂದ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಎಪಿಎಂಸಿ ಬಂದ್‌ ಮಾಡುವುದು ಸೇರಿದಂತೆ ಕೆಲ ತೀರ್ಮಾನಗಳನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಮಾರುಕಟ್ಟೆಗೆ ಶನಿವಾರ ಮತ್ತು ಭಾನುವಾರ ರಜೆ ನೀಡುವಂತೆ ಇಲಾಖೆ ಸೂಚಿಸಿದೆ. ಅದರಂತೆ ರಜೆ ನೀಡಬೇಕಿದೆ. ಆದರೆ, ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿದೆ. ಇದರಿಂದ ರೈತರಿಗೆ ತೊಂದರೆ ಆಗಬಹುದು’ ಎಂದು ಎಪಿಎಂಸಿ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಸದ್ಯ ಕೋವಿಡ್‌ ಆತಂಕ ಹೆಚ್ಚಿರುವುದರಿಂದ ಕೆಲ ವಾರಗಳ ಮಟ್ಟಿಗೆ ವಾರಾಂತ್ಯದಲ್ಲಿ ಮಾರುಕಟ್ಟೆ ಬಂದ್‌ ಮಾಡಲೇಬೇಕು. ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಹಮಾಲಿಗಳಿಗೆ ಕೋವಿಡ್‌ ಲಸಿಕೆ ನೀಡಬೇಕು. ಜತೆಗೆ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಎಪಿಎಂಸಿಗೆ ಬರುವ ಪ್ರತಿಯೊಬ್ಬರು ಮಾಸ್ಕ್‌ ಧರಿಸಬೇಕು. ಎಪಿಎಂಸಿ ಆವರಣ ಮತ್ತು ಮಂಡಿಗಳಲ್ಲಿ ಹೆಚ್ಚು ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು’ ಎಂದು ಸೂಚಿಸಿದರು.

ಮುಲಾಜಿಲ್ಲದೆ ಶಿಸ್ತುಕ್ರಮ: ‘ಕೊರೊನಾ ಸೋಂಕು ತಡೆಗಾಗಿ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿಗೆ ತಂದಿದ್ದು, ಇದನ್ನು ಪ್ರತಿಯೊಬ್ಬರು ಪಾಲಿಸಬೇಕು. ಮಾರ್ಗಸೂಚಿ ಉಲ್ಲಂಘಿಸಿದರೆ ಯಾವುದೇ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಜನರಿಗೆ ಅತ್ಯಗತ್ಯವಾಗಿ ಬೇಕಿರುವ ದಿನನಿತ್ಯದ ವಸ್ತುಗಳ ಖರೀದಿಗೆ ಅವಕಾಶ ನೀಡುತ್ತೇವೆ. ಜನರು ಈ ಅವಕಾಶ ದುರ್ಬಳಕೆ ಮಾಡಿಕೊಂಡು ವಿನಾಕಾರಣ ಮನೆಯಿಂದ ಹೊರಬಂದು ಓಡಾಡಿದರೆ ಸಹಿಸಲ್ಲ. ಹಾಲು, ತರಕಾರಿ, ಔಷಧ, ದಿನಸಿ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಇರುತ್ತದೆ. ಬಟ್ಟೆ, ವಿದ್ಯುತ್ ಉಪಕರಣ ಸೇರಿದಂತೆ ಇತರೆ ವಾಣಿಜ್ಯ ಮಳಿಗೆಗೆಳನ್ನು ತೆರೆಯುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಜನರು ಅಂತರ ಪಾಲಿಸದೆ ಒಂದೆಡೆ ಗುಂಪುಗೂಡಿದರೆ ಕೊರೊನಾ ಸೋಂಕಿನ ಹರಡುವಿಕೆ ಹೆಚ್ಚುತ್ತದೆ. ಸದ್ಯ 100 ಮಂದಿ ಪೈಕಿ ಕನಿಷ್ಠ 10 ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ. ಕೋವಿಡ್‌ ಪರಿಸ್ಥಿತಿಯು ಮನುಕುಲಕ್ಕೆ ದೊಡ್ಡ ಸವಾಲು ತಂದೊಡ್ಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜನರು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಕಠಿಣ ಕ್ರಮ ಅನಿರ್ವಾಯ: ‘ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ ಮತ್ತಷ್ಟು ಕಠಿಣ ಕ್ರಮ ಜಾರಿಗೊಳಿಸಲು ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪಿದೆ. ಹೀಗಾಗಿ ಕಠಿಣ ಕ್ರಮಗಳು ಅನಿರ್ವಾಯ’ ಎಂದರು.

‘ಜಿಲ್ಲೆಯ ಜನರು ಕೋವಿಡ್‌ ಪರಿಸ್ಥಿತಿಯ ಗಂಭೀರತೆ ಅರಿತು ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಕೋವಿಡ್‌ ಲಸಿಕೆಯಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡಪರಿಣಾಮವಾಗುವುದಿಲ್ಲ’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಉಪ ನಿರ್ದೇಶಕ ರವಿಚಂದ್ರ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.