ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ನೋಡಲ್‌ ಅಧಿಕಾರಿಗಳ ನೇಮಕ

Last Updated 20 ಮೇ 2021, 16:20 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಕೋಲಾರ ನಗರಸಭೆ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಜನರ ಓಡಾಟ ನಿಯಂತ್ರಿಸಲು ಜಿಲ್ಲಾಧಿಕಾರಿಯು ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಕೊರೊನಾ ಸೋಂಕಿನ ತಡೆಗೆ ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಣ್ಣ ನೀರಾವರಿ ಇಲಾಖೆ ತಾಂತ್ರಿಕ ಸಹಾಯಕ ಬಸವೇಗೌಡ ಅವರನ್ನು 15ನೇ ವಾರ್ಡ್‌ಗೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ವೆಂಕಟರಮಣ ಅವರನ್ನು 17ನೇ ವಾರ್ಡ್‌ಗೆ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಮಹಮ್ಮದ್‌ ರಫೀಕ್‌ ಉಲ್ಲಾ ರೆಹಮಾನ್ ಅವರನ್ನು 19ನೇ ವಾರ್ಡ್‌ಗೆ ನೋಡಲ್‌ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನೋಡಲ್ ಅಧಿಕಾರಿಗಳು ತಮಗೆ ನಿಗದಿಪಡಿಸಿದ ವಾರ್ಡ್‌ಗಳಿಗೆ ಪ್ರತಿನಿತ್ಯ ಖುದ್ದು ಭೇಟಿ ಕೊಟ್ಟು ನಗರಸಭೆಯ ವಾರ್ಡ್ ಸದಸ್ಯರು, ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಬೇಕು. ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು ಮತ್ತು ಸ್ಯಾನಿಟೈಸರ್‌ ಬಳಕೆ ಬಗ್ಗೆ ಜನರಿಗೆ ತಿಳಿ ಹೇಳಿಬೇಕು ಎಂದು ಸೂಚಿಸಿದ್ದಾರೆ.

ಸ್ವಚ್ಫತೆ, ಸೋಂಕು ನಿವಾರಕ ದ್ರಾವಣ ಸಿಂಪಡಣೆ, ವೈದ್ಯಕೀಯ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಕಾರ್ಯವನ್ನು ನಗರ ಸ್ಥಳೀಯ ಸಂಸ್ಥೆಯು ಸಮರ್ಪಕವಾಗಿ ನಿರ್ವಹಿಸುತ್ತಿದೆಯೇ ಎಂಬ ಬಗ್ಗೆ ನೋಡಲ್‌ ಅಧಿಕಾರಿಗಳು ಪರಿಶೀಲನೆ ನಡೆಸಿ ಖಾತ್ರಿಪಡಿಸಿಕೊಳ್ಳಬೇಕು. ವಾರ್ಡ್‌ಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜ್ವರ ಚಿಕಿತ್ಸಾಲಯ ಮತ್ತು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಜನರಿಗೆ ಸಮರ್ಪಕವಾಗಿ ಚಿಕಿತ್ಸೆ ಸಿಗುವಂತೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ತುರ್ತಾಗಿ ಚಿಕಿತ್ಸೆ: ಉಸಿರಾಟ ಸಮಸ್ಯೆ ಎದುರಿಸುತ್ತಿರುವ ಸೋಂಕಿತರನ್ನು ಗುರುತಿಸಿ ಆದ್ಯತೆ ಮೇಲೆ ಅವರಿಗೆ ತುರ್ತಾಗಿ ಚಿಕಿತ್ಸೆ ಸಿಗುವಂತೆ ಮಾಡಬೇಕು. ವಾರ್ಡ್ ವ್ತಾಪ್ತಿಯಲ್ಲಿ ಕೋವಿಡ್ ಲಕ್ಷಣ ಕಾಣಿಸಿಕೊಂಡವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಅಥವಾ ನಿಗದಿತ ಆಸ್ಪತ್ರೆಗಳಿಗೆ ದಾಖಲು ಮಾಡಿಸಬೇಕು. ಮನೆಯಲ್ಲಿ ಕ್ವಾರಂಟೈನ್‌ ಆಗಿರುವ ಸೋಂಕಿತರು ಪರೀಕ್ಷಾ ವಿಧಾನ ಪಾಲಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಅವರಿಗೆ ಟೆಲಿ ಮೆಡಿಸಿನ್ ಮೂಲಕ ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿತರಿಗೆ ಸಕಾಲಕ್ಕೆ ಆಂಬುಲೆನ್ಸ್ ವ್ಯವಸ್ಥೆ ಸಿಗುವಂತೆ ಮಾಡಬೇಕು. ಸಕ್ರಿಯ ಪ್ರಕರಣ ಹೆಚ್ಚಿರುವ ಪ್ರದೇಶಗಳನ್ನು ಕಂಟೈನ್‌ಮೆಂಟ್‌ ವಲಯಗಳಾಗಿ ಮಾಡಬೇಕು. ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಆಗಾಗ್ಗೆ ಬರುವ ಮಾರ್ಗಸೂಚಿ ಅನ್ವಯ ಕಾರ್ಯ ನಿರ್ವಹಿಸಬೇಕು. ನಗರಸಭೆ ಆಯುಕ್ತರು ನೋಡಲ್ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಬೇಕು ಮತ್ತು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT