ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಬೇಡಿ

ವೈದ್ಯಕೀಯ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸೂಚನೆ
Last Updated 12 ಆಗಸ್ಟ್ 2021, 14:20 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಬಾರದು. ಸೋಂಕಿತರು ಸಂಪೂರ್ಣ ಗುಣಮುಖ ಆಗುವವರೆಗೆ ಚಿಕಿತ್ಸೆ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.

ನಗರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಪರಿಶೀಲನೆ ನಡೆಸಿ ಮಾತನಾಡಿ, ‘ಎಲ್ಲೆಡೆ ಕೋವಿಡ್‌ 3ನೇ ಅಲೆಯ ಭೀತಿ ಹೆಚ್ಚಿದೆ. 3ನೇ ಅಲೆ ತಡೆಲು ಎಲ್ಲರೂ ಸಜ್ಜಾಗಬೇಕು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.

‘3ನೇ ಅಲೆಯಲ್ಲಿ ವಿಶೇಷವಾಗಿ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗುಲುತ್ತದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಹೆಚ್ಚು ಕಾಳಜಿ ವಹಿಸಬೇಕು. ವೈದ್ಯಕೀಯ ಸಿಬ್ಬಂದಿಯು ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ವೆಂಟಿಲೇಟರ್ ಹಾಗೂ ವೈದ್ಯಕೀಯ ಸಲಕರಣೆಗಳ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಆಂಬುಲೆನ್ಸ್‌ಗಳು ಸುಸ್ಥಿಯಲ್ಲಿರಬೇಕು. ಆಂಬುಲೆನ್ಸ್‌ ಸೇವೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಯವಾಗಬಾರದು. ಕೊರೊನಾ ಸೋಂಕಿತ ಮಕ್ಕಳು ಅಥವಾ ವಯಸ್ಕರನ್ನು ಆಸ್ಪತ್ರೆಗೆ ಸಾಗಿಸುವ ಪ್ರಕ್ರಿಯೆಯಲ್ಲಿ ಲೋಪವಾಗಬಾರದು. ಸೋಂಕಿತರ ಬೆಡ್‌, ವೈದ್ಯಕೀಯ ಆಮ್ಲಜನಕ ಹಾಗೂ ವೆಂಟಿಲೇಟರ್‌ನ ಕೊರತೆ ಆಗಬಾರದು’ ಎಂದು ತಿಳಿಸಿದರು.

‘ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಗೆ ಸೋಂಕಿತ ಮಕ್ಕಳ ಹಾಗೂ ವಯಸ್ಕರ ಚಿಕಿತ್ಸೆಗೆ ಪ್ರತ್ಯೇಕವಾಗಿ 10 ವೆಂಟಿಲೇಟರ್‌ ನೀಡಲಾಗುವುದು. ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಯಲ್ಲಿ 10 ಹಾಸಿಗೆ ಸಾಮರ್ಥ್ಯದ ವಿಶೇಷ ಕೋವಿಡ್ ವಾರ್ಡ್‌ ನಿರ್ಮಿಸಲಾಗುತ್ತಿದೆ. 10 ದಿನದೊಳಗೆ ಈ ವಾರ್ಡ್‌ ಸೇವೆಗೆ ಮುಕ್ತವಾಗಲಿದೆ’ ಎಂದು ವಿವರಿಸಿದರು.

ಕೋವಿಡ್ ವಾರ್‌ರೂಂ: ‘ಜಿಲ್ಲೆಯಲ್ಲಿ 10 ದಿನದೊಳಗೆ ಕೋವಿಡ್ ವಾರ್‌ರೂಂ ಆರಂಭಿಸಿ ಸೋಂಕಿತ ಮಕ್ಕಳ ಚಿಕಿತ್ಸೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಸೋಂಕಿತರ ಚಿಕಿತ್ಸೆಗೆ ಗುರುತಿಸಿರುವ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಬೇಕು. ವೈದ್ಯಕೀಯ ಸಿಬ್ಬಂದಿ ಹೆಚ್ಚು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಜನರ ಜೀವ ಉಳಿಸುವ ಕೆಲಸವಾಗಬೇಕು. ಸೋಂಕಿತರ ಚಿಕಿತ್ಸೆಗೆ ಔಷಧ ಮಾತ್ರೆಗಳ ಕೊರತೆ ಆಗಬಾರದು’ ಎಂದರು.

‘ಮುಳಬಾಗಿಲು ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಕಡಿಮೆಯಿದೆ. ಆದ ಕಾರಣ ಆಸ್ಪತ್ರೆಯಲ್ಲಿ ತುರ್ತಾಗಿ ಮತ್ತೊಂದು ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಿ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಬಗ್ಗೆ ನರ್ಸ್‌ಗಳಿಗೆ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ತರಬೇತಿ ನೀಡಿ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್‌ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT