ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಸ್ವಪ್ರೇರಿತರಾಗಿ ಲಸಿಕೆ ಪಡೆಯಿರಿ

Last Updated 16 ಮಾರ್ಚ್ 2021, 14:10 IST
ಅಕ್ಷರ ಗಾತ್ರ

ಕೋಲಾರ: ಕೊರೊನಾ ಸೋಂಕಿನ ತಡೆಗೆ ಸಾರ್ವಜನಿಕರು ಸ್ವಪ್ರೇರಣೆಯಿಂದ ಕೋವಿಡ್‌ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌–19 ಜಾಗತಿಕವಾಗಿ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಕೊರೊನಾ ಸೋಂಕಿನ ಹರಡುವಿಕೆ ತಡೆಗಾಗಿ ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಲಸಿಕೆ ಹಾಕಲಾಗುತ್ತಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿ ಹಾಗೂ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.

2ನೇ ಹಂತದಲ್ಲಿ 45 ವರ್ಷದಿಂದ 59 ವರ್ಷದೊಳಗಿನವರಿಗೆ, ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಎಚ್‌ಐವಿ ಸೋಂಕಿತರು ಹಾಗೂ ಇತರೆ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ, 60 ವರ್ಷ ಮೀರಿದ ಹಿರಿಯ ನಾಗರೀಕರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಲಸಿಕೆ ಪಡೆಯಲು ಅರ್ಹರಿರುವ ಫಲಾನುಭವಿಗಳು ನೇರವಾಗಿ ಲಸಿಕಾ ಕೇಂದ್ರಗಳಿಗೆ ತೆರಳಿ ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್ ಅಥವಾ ಚಾಲನಾ ಪರವಾನಗಿ (ಡಿ.ಎಲ್‌) ನೀಡಿ ಹೆಸರು ನೋಂದಾಯಿಸಬೇಕು. ಆರೋಗ್ಯ ಸೇತು ಆ್ಯಪ್‌ ಮೂಲಕವು ಸ್ವಯಂ ನೋಂದಣಿ ಮಾಡಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಲಸಿಕೆ ಕೇಂದ್ರಗಳು: ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು (ಗೌನಿಪಲ್ಲಿ ಮತ್ತು ಬೇತಮಂಗಲ), ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ₹ 250 ಪಾವತಿಸಿ ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಜನ ಲಸಿಕೆ ಪಡೆದಿದ್ದು, ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಸಾರ್ವಜನಿಕರು 2 ಬಾರಿ ಲಸಿಕೆ ಪಡೆಯುವ ಮೂಲಕ ಕೋವಿಡ್ ತಡೆಗಟ್ಟಲು ಸಹಕರಿಸಬೇಕು. ಕೋವಿಡ್‌ ಸುರಕ್ಷತಾ ಮಾರ್ಗಸೂಚಿಯಂತೆ ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು, ಮನೆಗೆ ಹೋದಾಗ ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಸಾರ್ವಜನಿಕರು ಲಸಿಕೆ ಕುರಿತಂತೆ ಹೆಚ್ಚಿನ ಮಾಹಿತಿಗೆ ಸರ್ಕಾರಿ ಆರೋಗ್ಯ ಕೇಂದ್ರ ಸಂಪರ್ಕಿಸಬಹುದು ಅಥವಾ ಜಿಲ್ಲಾ ಆರೋಗ್ಯ ಸಹಾಯವಾಣಿ ಸಂಖ್ಯೆ 18004254325, ಆರೋಗ್ಯ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT