ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ವೆಂಟಿಲೇಟರ್‌ ಹೆಚ್ಚಳಕ್ಕೆ ಮನವಿ

Last Updated 17 ಏಪ್ರಿಲ್ 2021, 12:17 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್‌ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶನಿವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.

‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಹರಡುವಿಕೆ ಪ್ರಮಾಣ ಗಣನೀಯ ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ. ಜನರ ಜೀವ ರಕ್ಷಣೆ ಉದ್ದೇಶಕ್ಕೆ ಶೀಘ್ರವೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆದು ಹೆಚ್ಚಿನ ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

‘ಕೋವಿಡ್‌ ಮೊದಲನೆ ಅಲೆಯಲ್ಲಿ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ವೆಂಟಿಲೇಟರ್‌ಗಳ ಕೊರತೆ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಬೇಕು. ಸೋಂಕು ಹರಡುವಿಕೆ ತಡೆಗೆ ಹಾಗೂ ಸೋಂಕಿತರ ಸಾವಿನ ಸಂಖ್ಯೆ ತಗ್ಗಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

‘ಜಿಲ್ಲೆಯಲ್ಲಿ ಪ್ರತಿನಿತ್ಯ ಹೊಸದಾಗಿ ಸುಮಾರು 100 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ ಸೋಂಕಿತರಲ್ಲಿ ಬಹುತೇಕ ಮಂದಿಗೆ ಉಸಿರಾಟ ಸಮಸ್ಯೆಯಿರುವ ಕಾರಣಕ್ಕೆ ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಅಲ್ಲಿಯೂ ಚಿಕಿತ್ಸೆ ನೀಡಲಾಗದೆ ಬೆಂಗಳೂರಿಗೆ ಹೋಗುವಂತೆ ಸೂಚನೆ ನೀಡಲಾಗುತ್ತಿದೆ’ ಎಂದು ದೂರಿದರು.

ಬಡವರ ಸುಲಿಗೆ

‘ಬೆಂಗಳೂರಿನಲ್ಲೂ ಕೋವಿಡ್‌ ಪರಿಸ್ಥಿತಿ ಕೈ ಮೀರಿ ಹೋಗಿದ್ದು, ಅಲ್ಲಿನ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಎದುರಾಗಿದೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಯ ನೆಪದಲ್ಲಿ ಬಡ ಜನರನ್ನು ಸುಲಿಗೆ ಮಾಡುತ್ತಿವೆ. ಜನಸಾಮಾನ್ಯರಿಗೆ ಲಕ್ಷಾಂತರ ರೂಪಾಯಿ ಹಣ ಕೊಟ್ಟು ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಸೋಂಕಿನಿಂದ ನರಳಾಡುತ್ತಿದ್ದಾರೆ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಉಪಕರಣಗಳಿದ್ದರೂ ಅವುಗಳ ನಿರ್ವಹಣೆಗೆ ನುರಿತ ಸಿಬ್ಬಂದಿಯಿಲ್ಲ. ಹೀಗಾಗಿ ವೆಂಟಿಲೇಟರ್‌ಗಳು ಉಪಯೋಗಕ್ಕೆ ಬಾರದಂತಾಗಿವೆ. ನುರಿತ ಸಿಬ್ಬಂದಿಯನ್ನು ನಿಯೋಜಿಸಿ ವೆಂಟಿಲೇಟರ್‌ಗಳನ್ನು ಬಳಕೆ ಮಾಡಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ತಿಮ್ಮಣ್ಣ, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT