ಬುಧವಾರ, ಮೇ 27, 2020
27 °C
ಆರ್‌ಡಿಪಿಆರ್‌ ನಿರ್ದೇಶಕ ಅಶ್ರಫ್‌ ಉಲ್ಲಾ ಹಸನ್ ಆದೇಶ

ಗ್ರಾಮ ಮಟ್ಟದ ಕಾರ್ಯಪಡೆ ರಚಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಕೊರೊನಾ ಸೋಂಕು ಹರಡುವಿಕೆ ತಡೆಯಲು ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಸಮಿತಿ ರಚಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ (ಆರ್‌ಡಿಪಿಆರ್‌) ನಿರ್ದೇಶಕ ಎಸ್.ಎ.ಅಶ್ರಫ್‌ ಉಲ್ಲಾ ಹಸನ್ ಆದೇಶಿಸಿದ್ದಾರೆ.

ಕೊರೊನಾ ಸೋಂಕಿನ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸಲು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮಗಳಲ್ಲಿ ಜನರ ಆರೋಗ್ಯ ಕಾಪಾಡಲು ಗ್ರಾಮ ಮಟ್ಟದ ಕಾರ್ಯಪಡೆ ರಚಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಗ್ರಾಮ ಮಟ್ಟದ ಕಾರ್ಯಪಡೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಧ್ಯಕ್ಷರಾಗಿರುತ್ತಾರೆ. ಗ್ರಾ.ಪಂ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ, ಗ್ರಾಮದ ಗಸ್ತು ಪೊಲೀಸರು, ಗ್ರಾಮದ ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ನೋಂದಾಯಿತ ಸ್ಥಳೀಯ ವೈದ್ಯರು ಕಾರ್ಯಪಡೆ ಸದಸ್ಯರಾಗಿರುತ್ತಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ಗ್ರಾಮ ಮಟ್ಟದಲ್ಲಿ 65 ವರ್ಷಕ್ಕಿಂದ ಹೆಚ್ಚಿನ ವಯೋಮಾನದ ಹಿರಿಯ ನಾಗರೀಕರನ್ನು ಗುರುತಿಸಿ ನಿಯಮಿತವಾಗಿ ಅವರ ಆರೋಗ್ಯ ತಪಾಸಣೆ ಮಾಡಬೇಕು. ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಗ್ರಾ.ಪಂ ವ್ಯಾಪ್ತಿಯಲ್ಲಿನ ಗರ್ಭಿಣಿಯರು ಮತ್ತು ಬಾಣಂತಿಯರ ಮನೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಆರೋಗ್ಯದ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ಕೆಮ್ಮು, ನೆಗಡಿ, ತಲೆ ನೋವು, ಜ್ವರ, ಗಂಟಲು ಉರಿ ಸಮಸ್ಯೆ ಎದುರಿಸುತ್ತಿರುವ ಜನರನ್ನು ತಕ್ಷಣವೇ ಗುರುತಿಸಿ ಸಮೀಪದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು. ಕೋವಿಡ್‌–19 ಬಾಧಿತ ದೇಶಗಳಿಂದ ಬರುವ ಭಾರತೀಯರನ್ನು ಗುರುತಿಸಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಜತೆಗೆ ವಿದೇಶದಿಂದ ಬಂದವರನ್ನು ಗುರುತಿಸಿ 14 ದಿನಗಳ ಕಾಲ ಮನೆಯಲ್ಲೇ ಪ್ರತ್ಯೇಕ ನಿಗಾದಲ್ಲಿ (ಹೋಂ ಕ್ವಾರಂಟೈನ್) ಇರಿಸಿ ಹೊರ ಬಾರದಂತೆ ನೋಡಿಕೊಳ್ಳಬೇಕು ಮತ್ತು ಅವರಿಗೆ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಎಚ್ಚರಿಕೆ ವಹಿಸಿ: ವಿದೇಶದಿಂದ ಬಂದವರು ಸಾರ್ವಜನಿಕರೊಂದಿಗೆ ಬೆರೆಯದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಮದುವೆ, ಜಾತ್ರೆ, ಮೆರವಣಿಗೆ, ಸಂತೆ ಹಾಗೂ ಜನರು ಗುಂಪುಗೂಡುವ ಚಟುವಟಿಕೆಗಳನ್ನು ನಿರ್ಬಂಧಿಸಬೇಕು. ಸ್ವಚ್ಛತಾ ಕಾರ್ಯ ನಿರ್ವಹಿಸುವವರು ಮತ್ತು ಘನ ತ್ಯಾಜ್ಯ ನಿರ್ವಹಣೆ ಮಾಡುವ ಪೌರ ಕಾರ್ಮಿಕರಿಗೆ ಮುಖಗವಸು, ಕೈಗವಸು ಮತ್ತು ಶೂಗಳನ್ನು ನೀಡಬೇಕು ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಸಂಬಂಧ ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು