ಶನಿವಾರ, ಮೇ 15, 2021
24 °C

ಬೆಟ್ಟಿಂಗ್‌ ದಂಧೆಗೆ ಕಡಿವಾಣ ಹಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲೆಯಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

‘ಜಿಲ್ಲೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜನರು ಬೆಟ್ಟಿಂಗ್‌ ದಂಧೆಯಲ್ಲಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ’ ಎಂದು ಸಂಘಟನೆ ಸದಸ್ಯರು ದೂರಿದರು.

‘ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದು, ಯುವಕ ಯುವತಿಯರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ನಿರುದ್ಯೋಗಳಾಗಿ ಮನೆಯಲ್ಲೇ ಇರುವ ವಿದ್ಯಾವಂತ ಯುವಕರು ಹಣ ಸಂಪಾದನೆಗಾಗಿ ಜೂಜಾಟ, ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯತ್ತ ಮುಖ ಮಾಡುತ್ತಿದ್ದಾರೆ. ಬೆಟ್ಟಿಂಗ್‌ ದಂಧೆಕೋರರು ಇಂತಹ ಮೊಬೈಲ್‌ ಆ್ಯಪ್‌ಗಳ ಮೂಲಕ ಇಂತಹ ಯುವಕರನ್ನು ಸೆಳೆಯುತ್ತಿದ್ದಾರೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

‘ದಂಧೆಕೋರರು ಪೊಲೀಸರ ಕಣ್ತಪ್ಪಿಸಿ ಜಿಲ್ಲಾ ಕೇಂದ್ರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದಾರೆ. ದಂಧೆಯಲ್ಲಿ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಕೈ ಬದಲಾಗುತ್ತಿದೆ. ಯುವಕರು ಬಡ್ಡಿ ಸಾಲ ಮಾಡಿ ಬೆಟ್ಟಿಂಗ್‌ ದಂಧೆಯಲ್ಲಿ ಭಾಗಿಯಾಗುತ್ತಿದ್ದಾರೆ. ದಂಧೆಕೋರರ ಜತೆ ಕೆಲ ಪೊಲೀಸರು ಸಹ ಕೈಜೋಡಿಸಿದ್ದಾರೆ’ ಎಂದು ಆರೋಪಿಸಿದರು.

ಗೂಂಡಾ ಕಾಯ್ದೆ

‘ಜಿಲ್ಲೆಯಲ್ಲಿ ಹಿಂದಿನ ವರ್ಷ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯಲ್ಲಿ ಹಣ ಕಳೆದುಕೊಂಡ ಏಳೆಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಕುಟುಂಬಗಳು ಬೀದಿ ಪಾಲಾಗಿವೆ. ಹೀಗಾಗಿ ಪೊಲೀಸ್‌ ಇಲಾಖೆ ಎಚ್ಚೆತ್ತು ಬೆಟ್ಟಿಂಗ್‌ ದಂಧೆ ನಿಯಂತ್ರಿಸಬೇಕು. ದಂಧೆಯಲ್ಲಿ ತೊಡಗಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಸದಸ್ಯರಾದ ನಾಗೇಶ್, ತಿಮ್ಮಣ್ಣ, ಮಂಜುನಾಥ್‌ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.