ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ನಷ್ಟ: ಪರಿಹಾರಕ್ಕೆ ಶಿಫಾರಸು

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಭರವಸೆ
Last Updated 30 ಏಪ್ರಿಲ್ 2020, 13:58 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಮಳೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನಾಶವಾಗಿದ್ದು, ರೈತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಏ.28ರಂದು ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾದ ಸೀಸಂದ್ರ, ತಂಬಿಹಳ್ಳಿ, ಮಣಿಘಟ್ಟ, ಗಂಗರಸನಹಳ್ಳಿಯ ರೈತರ ಜಮೀನುಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

‘ಜಿಲ್ಲೆಯಿಂದ ಅಕಾಲಿಕ ಮಳೆಯಿಂದ ಸುಮಾರು 500 ಹೆಕ್ಟೇರ್‌ ಬೆಳೆ ನಾಶವಾಗಿದೆ. ಈ ಸಂಬಂಧ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲಿದ್ದಾರೆ. ನಂತರ ಈ ವರದಿ ಆಧರಿಸಿ ರೈತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ’ ಎಂದು ಮಾಹಿತಿ ನೀಡಿದರು.

‘ಸರ್ಕಾರವು ಈ ಹಿಂದೆ ಬೆಳೆ ನಷ್ಟಕ್ಕೆ ರೈತರಿಗೆ ₹ 48 ಸಾವಿರ ಕೋಟಿ ಪರಿಹಾರ ನೀಡಿದೆ. ಈ ಬಾರಿಯೂ ಶೀಘ್ರವೇ ಪರಿಹಾರ ನೀಡಲಿದೆ. ರಾಷ್ಟ್ರೀಯ ವಿಪತ್ತು ನಿಧಿ ಮಾರ್ಗಸೂಚಿ ಪ್ರಕಾರ ಬಹು ವಾರ್ಷಿಕ ಬೆಳೆಗೆ ಹೆಕ್ಟೇರ್‌ಗೆ ₹ 18 ಸಾವಿರ ಮತ್ತು ವಾರ್ಷಿಕ ಬೆಳೆಗೆ ಹೆಕ್ಟೇರ್‌ಗೆ ₹ 13,500 ಪರಿಹಾರ ನೀಡಲಾಗುತ್ತದೆ. ಈ ಮೊತ್ತಕ್ಕಿಂತ ರೈತರು ಬೆಳೆಗೆ ಮಾಡಿರುವ ಖರ್ಚು ಹೆಚ್ಚಿರುವುದರಿಂದ ಪರಿಹಾರ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.

‘ಮಳೆಯಿಂದ ಅಲ್ಪಸ್ವಲ್ಪ ಹಾನಿಗೊಳಗಾಗಿರುವ ಬೆಳೆಗಳನ್ನು ಪುನಶ್ಚೇತನಗೊಳಿಸಲು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡವನ್ನು ಜಿಲ್ಲೆಗೆ ಕಳುಹಿಸುತ್ತೇವೆ. ಬೆಳೆಗಳನ್ನು ಪುನಶ್ಚೇತನಗೊಳಿಸಲು ಸಾಧ್ಯವಾದರೆ ಆ ಬಗ್ಗೆ ವಿಜ್ಞಾನಿಗಳಿಂದ ರೈತರಿಗೆ ತರಬೇತಿ ಕೊಡಿಸುತ್ತೇವೆ’ ಎಂದು ವಿವರಿಸಿದರು.

ದೊಡ್ಡ ಪೆಟ್ಟು: ‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಾದ ಲಾಕ್‌ಡೌನ್‌ ಕೃಷಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಕೊಟ್ಟಿದೆ. ಸರಕು ಸಾಗಣೆ ಸೇವೆಯಲ್ಲಿ ವ್ಯತ್ಯಯವಾಗಿರುವುದರಿಂದ ತರಕಾರಿಗಳ ಸಾಗಣೆಗೆ ಸಮಸ್ಯೆಯಾಗಿ ಬೆಲೆ ಕುಸಿತವಾಗಿದೆ. ಆದರೂ ಸರ್ಕಾರ ತರಕಾರಿ ಸಾಗಾಟಕ್ಕೆ ಶಕ್ತಿಮೀರಿ ಪ್ರಯತ್ನ ಮಾಡಿದೆ. ಹೊರ ರಾಜ್ಯಗಳಿಗೆ ತರಕಾರಿ ಪೂರೈಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಕೃಷಿ ಕ್ಷೇತ್ರವು ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಆದರೆ, ಕೃಷಿ ಉತ್ಪನ್ನಗಳ ಬೆಲೆ ನಿಗದಿಯು ಕೇಂದ್ರಕ್ಕೆ ಸಂಬಂಧಪಟ್ಟ ವಿಷಯ. ಯಾವುದೇ ಕೃಷಿ ಉತ್ಪನ್ನಕ್ಕೆ ಆಯೋಗವು ಬೆಲೆ ನಿಗದಿ ಮಾಡಲು ಸಾಧ್ಯವಿಲ್ಲ. ಬೆಲೆ ಕುಸಿತ ಮತ್ತು ಬೆಳೆ ನಷ್ಟದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ’ ಎಂದು ತಿಳಿಸಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಎಂ.ಗಾಯತ್ರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ತುಳಸಿರಾಮ್‌, ತೋಟಗಾರಿಕೆ ವಿಜ್ಞಾನಿ ಕೆ.ಎಸ್.ನಾಗರಾಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT