ಶನಿವಾರ, ಮೇ 28, 2022
24 °C

26ಕ್ಕೆ ದಲಿತ ಐಕ್ಯತಾ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಜಿಲ್ಲೆಯ ಶ್ರೀನಿವಾಸಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅ.26ರಂದು ಬೆಳಿಗ್ಗೆ 10.30ಕ್ಕೆ ದಲಿತ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಯುವ ಘಟಕದ ಅಧ್ಯಕ್ಷ ಡಿ.ಎಂ.ಅಂಬರೀಶ್ ತಿಳಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆ ವಿಚಾರದಲ್ಲಿ ರಾಜ್ಯ ಸರ್ಕಾರ ದಲಿತ ಸಮುದಾಯಕ್ಕೆ ರಕ್ಷಣೆ ಹಾಗೂ ನ್ಯಾಯ ನೀಡುವಲ್ಲಿ ವಿಫಲವಾಗಿದೆ. ಸರ್ಕಾರದ ವೈಫಲ್ಯ ಹಾಗೂ ಮುಂದಿನ ಹೋರಾಟದ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ’ ಎಂದು ವಿವರಿಸಿದರು.

‘ಸಮಾವೇಶದ ವೇದಿಕೆಗೆ ದಿವಂಗತ ಬಿ.ನಾರಾಯಣಸ್ವಾಮಿ ಮತ್ತು ಎಂ.ಜಿ.ಜಯಪ್ರಸಾದ್‌ರ ಹೆಸರಿಡಲಾಗಿದೆ. ಅ.26ರಂದು ಬೆಳಿಗ್ಗೆ ಶ್ರೀನಿವಾಸಪುರ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜನಪದ ಕಲಾ ತಂಡಗಳ ಬೃಹತ್‌ ಮೆರವಣಿಗೆ ನಡೆಸಲಾಗುತ್ತದೆ. ದಲಿತ ಮುಖಂಡ ತಮ್ಮಯ್ಯ ಮೆರವಣಿಗೆಗೆ ಚಾಲನೆ ನೀಡುತ್ತಾರೆ’ ಎಂದು ಹೇಳಿದರು.

‘ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಪಠಣ ಮಾಡುವ ಮೂಲಕ ಶ್ರೀನಿವಾಸಪುರ ತಾಲ್ಲೂಕಿನ ಹೋರಾಟಗಾರ ಎಂ.ವೆಂಕಟಸ್ವಾಮಿ ಸಮಾವೇಶಕ್ಕೆ ಚಾಲನೆ ನೀಡುತ್ತಾರೆ. ನಿವೃತ್ತ ಐಎಎಸ್ ಅಧಿಕಾರಿ ಎನ್.ಸಿ.ಮುನಿಯಪ್ಪ ರಚನೆಯ ಅಂಬೇಡ್ಕರ್ ಸಾಮಾಜಿಕ ಋಣಸಂದಾಯ ಚಿಂತನೆ ಪುಸ್ತಕವನ್ನು ಅಸ್ಪೃಶ್ಯತೆ ಆಚರಣೆ ವಿರೋಧಿ ಅಭಿಯಾನದ ಮುಖಂಡ ಅರಿವು ಶಿವಪ್ಪ ಬಿಡುಗಡೆ ಮಾಡುತ್ತಾರೆ’ ಎಂದು ಮಾಹಿತಿ ನೀಡಿದರು.

‘ಅಂಬೇಡ್ಕರ್‌ರ ಆಶಯ ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿರುವ ಶ್ರೀನಿವಾಸಪುರ ತಾಲ್ಲೂಕಿನ ಹಲವು ಸಾಧಕರನ್ನು ಸಮಾವೇಶದಲ್ಲಿ ಸನ್ಮಾನಿಸಲಾಗುತ್ತದೆ. ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಮುಖಂಡರು ಅತಿಥಿಗಳಾಗಿ ಭಾಗವಹಿಸಲಿದ್ದು, ದಲಿತ ಜನಾಂಗಗಳ ಐಕ್ಯತಾ ಅನಿವಾರ್ಯತೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ. 2 ಸಾವಿರಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ’ ಎಂದರು.

ಒಕ್ಕೂಟದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ರವೀಂದ್ರನಾಥ್, ಪ್ರಧಾನ ಕಾರ್ಯದರ್ಶಿ ಚಿಟ್ಟಿ ಬಾಬು, ಜಿಲ್ಲಾ ಘಟಕದ ಉಪಾಧ್ಯಕ್ಷ ರಾಮಣ್ಣ, ಸದಸ್ಯ ಬೇಟಪ್ಪ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಮುನಿರಾಜು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.