ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೊಂದ ದಲಿತರಿಗೆ ಅನ್ಯಾಯ ಆಗಬಾರದು

ಕಾನೂನು ರೀತಿ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸೂಚನೆ
Last Updated 24 ಮೇ 2022, 14:33 IST
ಅಕ್ಷರ ಗಾತ್ರ

ಕೋಲಾರ: ‘ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನು ರೀತಿ ಕ್ರಮ ಕೈಗೊಂಡು ನೊಂದ ದಲಿತರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಿ’ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ‘ದಲಿತರ ವಿರುದ್ಧದ ದೌರ್ಜನ್ಯ ಪ್ರಕರಣದ ಮಾಹಿತಿಯನ್ನು ಅಧಿಕಾರಿಗಳು ನಮ್ಮ ಗಮನಕ್ಕೆ ತರಬೇಕು. ಜತೆಗೆ ಪ್ರಕರಣ ಸಂಬಂಧ ಸೂಕ್ತ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 2022ರಲ್ಲಿ ದಲಿತರ ಮೇಲಿನ ದೌರ್ಜನ್ಯದ ಸಂಬಂಧ 27 ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳಲ್ಲಿ ನೊಂದವರಿಗೆ ಶೀಘ್ರವೇ ಪರಿಹಾರ ಒದಗಿಸಲಾಗುವುದು. ದಲಿತರ ಮೇಲೆ ದೌರ್ಜನ್ಯ ನಡೆದ ತಕ್ಷಣ ಅಧಿಕಾರಿಗಳು ವಿಳಂಬ ಮಾಡದೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ನೊಂದವರು ಕಾನೂನು ಸಲಹೆಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ವಕೀಲರ ಸೇವೆ ಪಡೆಯಬಹುದು. ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಪರಿಶೀಲಿಸಿ ನಂತರ ಪರಿಹಾರ ನೀಡಲಾಗುವುದು. ನೊಂದ ದಲಿತ ಕುಟುಂಬಗಳಲ್ಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಉಪಯುಕ್ತ ಸೌಲಭ್ಯ ಒದಗಿಸಲಾಗುವುದು. 2020-21ರಲ್ಲಿ 64 ಪ್ರಕರಣ ದಾಖಲಾಗಿದ್ದು, ಪರಿಹಾರ ಒದಗಿಸಲಾಗಿದೆ’ ಎಂದು ವಿವರಿಸಿದರು.

‘ದೌರ್ಜನ್ಯದಿಂದ ನೊಂದ ಸಂತ್ರಸ್ತರಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾ ಮತ್ತು ಕುಡಿಯುವ ನೀರು, ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧ ಪ್ರಕರಣವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಆಕ್ರಮಿಸಿರುವುದು ಮತ್ತು ಸಾಗುವಳಿ ಮಾಡಿದ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದರು.

54 ಪ್ರಕರಣ: ‘ದಲಿತರ ಮೇಲಿನ ದೌರ್ಜನ್ಯದ ಸಂಬಂಧ 2021ರಲ್ಲಿ 54 ಪ್ರಕರಣ ದಾಖಲಾಗಿವೆ. ದೌರ್ಜನ್ಯ ನಡೆದ 24 ತಾಸಿನೊಳಗೆ ಪ್ರಕರಣ ದಾಖಲಾಗಬೇಕು. ಪ್ರಕರಣಗಳ ತನಿಖೆ ನಡೆಸಿ ಸಂಪೂರ್ಣ ಮಾಹಿತಿ ಒದಗಿಸುತ್ತೇವೆ. ಸಮಾಜ ಕಲ್ಯಾಣ ಇಲಾಖೆಯವರು ಸಂತ್ರಸ್ತರಿಗೆ ನೀಡಿರುವ ಪರಿಹಾರದ ಮಾಹಿತಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಒದಗಿಸಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ್‌ ಸೂಚಿಸಿದರು.

‘ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಯಾವುದೇ ಪ್ರಕರಣಗಳಲ್ಲಿ ಪರಿಹಾರದ ಜತೆಗೆ ನ್ಯಾಯ ಸಹ ಒದಗಿಸಲು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಪ್ರಕರಣಗಳಲ್ಲಿ ಊಹೆ ಮಾಡಿ ಸುಮ್ಮನೆ ಯಾರ ಹೆಸರನ್ನು ನೋಂದಾಯಿಸಬಾರದು. ಪ್ರಕರಣ ನಡೆದ ಸ್ಥಳ ಪರಿಶೀಲಿಸಿ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳಲಾಗುತ್ತದೆ' ಎಂದು ವಿವರಿಸಿದರು.

ಶಿಸ್ತುಕ್ರಮದ ಎಚ್ಚರಿಕೆ: ‘ದಲಿತರ ಮೇಲೆ ದೌರ್ಜನ್ಯ ನಡೆದಾಗ ಶೀಘ್ರವಾಗಿ ನಮ್ಮ ಗಮನಕ್ಕೆ ತರಬೇಕು. ಆ ಪ್ರಕರಣಗಳನ್ನು ಪರಿಶೀಲಿಸಿ ನ್ಯಾಯ ಒದಗಿಸಲು ಶ್ರಮಿಸುತ್ತೇವೆ. ಪ್ರಕರಣಗಳ ತನಿಖೆಯಲ್ಲಿ ನ್ಯೂನ್ಯತೆ ಕಂಡುಬಂದಲ್ಲಿ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾ ಪಂಚಾಯಿಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್‌ಕುಮಾರ್‌ ಎಚ್ಚರಿಕೆ ನೀಡಿದರು.

ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಧರಣಿದೇವಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಆನಂದ್‌ಪ್ರಕಾಶ್‌ ಮೀನಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT