ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನಾ ನಿರ್ದೇಶಕರಿಗೆ ಡಿ.ಸಿ ತರಾಟೆ

Last Updated 14 ಜನವರಿ 2020, 9:04 IST
ಅಕ್ಷರ ಗಾತ್ರ

ಕೋಲಾರ: ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡದ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣ ಅವರನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತರಾಟೆಗೆ ತೆಗೆದುಕೊಂಡರು.

ದಿಶಾ ಸಭೆ ಸಂಬಂಧ ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಸಂಸದರ ಅಧ್ಯಕ್ಷತೆಯಲ್ಲಿ ಜನವರಿ 16ರಂದು ದಿಶಾ ಸಭೆ ನಡೆಯಲಿದೆ. ಸಭೆಗೆ 2 ದಿನವಷ್ಟೇ ಬಾಕಿಯಿದೆ. ಈ ವೇಳೆಗಾಗಲೇ ಮಾಹಿತಿ ಪುಸ್ತಕ ಸಿದ್ಧಪಡಿಸಬೇಕಿತ್ತು. ದಿಶಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡದಿದ್ದರೆ ಹೇಗೆ? ಈ ಕೆಲಸ ನಾನು ಮಾಡಬೇಕು’ ಎಂದು ಮುನಿಕೃಷ್ಣ ವಿರುದ್ಧ ಹರಿಹಾಯ್ದರು.

‘ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಇಲಾಖೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿದರೆ ಸಹಿಸುವುದಿಲ್ಲ. ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿ’ ಎಂದು ತಾಕೀತು ಮಾಡಿದರು.

‘ಸ್ವಚ್ಛ ಭಾರತ್, ಫಸಲ್ ಭೀಮಾ ಯೋಜನೆ, ತೋಟಗಾರಿಕೆ ಮಿಷನ್, ರಾಷ್ಟ್ರೀಯ ಆರೋಗ್ಯ ಮಿಷನ್, ಪ್ರಧಾನಮಂತ್ರಿ ವಸತಿ ಯೋಜನೆ, ನರೇಗಾ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ 1 ದಿನದಲ್ಲಿ ಮಾಹಿತಿ ಕೊಡಬೇಕು. ಸಭೆ ಬಗ್ಗೆ ಗೊಂದಲವಿದ್ದರೆ ನಿವಾರಿಸಬೇಕು’ ಎಂದು ಸೂಚಿಸಿದರು.

ಉದ್ಯೋಗ ಮೇಳ: ‘ಫೆಬ್ರವರಿ11 ಮತ್ತು 12ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮೇಳದ ಜವಾಬ್ದಾರಿ ವಹಿಸಲಾಗುವುದು. ಮೇಳ ಯಶಸ್ವಿಗೊಳಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು’ ಎಂದು ಕೋರಿದರು.

‘ಜಿಲ್ಲಾ ಕೇಂದ್ರದ ಹೊರವಲಯದಲ್ಲಿರುವ ಸಿ.ಬೈರೇಗೌಡ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳ ನಡೆಯುತ್ತದೆ. ಉದ್ಯೋಗದಾತರು ಮತ್ತು ಉದ್ಯೋಗ ಆಕ್ಷಿಂಗಳ ನೋಂದಣಿಗೆ ಸದ್ಯದಲ್ಲೇ ವೆಬ್‌ಪೋರ್ಟ್‌ ಆರಂಭಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್‌, ಉಪಾಧ್ಯಕ್ಷೆ ಯಶೋದಾ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರೂಪಶ್ರೀ, ಉಪ ಕಾರ್ಯದರ್ಶಿ ಸಂಜೀವಪ್ಪ, ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT