ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದ್ಧೂರಿ ಕ್ರೀಡಾಕೂಟ ನಡೆಸಲು ನಿರ್ಧಾರ- ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ

Last Updated 30 ಏಪ್ರಿಲ್ 2022, 14:17 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಅದ್ಧೂರಿಯಾಗಿ ನೌಕರರ ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಿದ್ದು, ಮೇ 2ನೇ ವಾರದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರು ಹೆಸರು ನೋಂದಾಯಿಸಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಮನವಿ ಮಾಡಿದರು.

ಕ್ರೀಡಾಕೂಟದ ಸಂಬಂಧ ಇಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರು ಕಡ್ಡಾಯವಾಗಿ ತಮ್ಮ ಟೀ-ಶರ್ಟ್ ಅಳತೆ ನಮೂದಿಸಬೇಕು. ಇತ್ತೀಚಿನ 2 ಭಾವಚಿತ್ರಗಳ ಜತೆ ಅರ್ಜಿ ಸಲ್ಲಿಸಬೇಕು. ಸಂಘದ ತಾಲ್ಲೂಕು ಅಧ್ಯಕ್ಷರು ಈ ಬಗ್ಗೆ ಗಮನ ಹರಿಸಬೇಕು’ ಎಂದು ಸೂಚಿಸಿದರು.

‘ಕ್ರೀಡಾಕೂಟದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ನೌಕರರು ಭಾಗಹಿಸಬೇಕು. ಆಹಾರ ಇಲಾಖೆಯು ಕ್ರೀಡಾಕೂಟಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಬೇಕು. ನಗರಸಭೆಯು ವೇದಿಕೆ ಸಜ್ಜುಗೊಳಿಸಲಿದೆ. ಅಬಕಾರಿ, ಆರ್‌ಟಿಒ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಗಳು ಸಹಕಾರ ನೀಡಬೇಕು’ ಎಂದು ಕೋರಿದರು.

‘ಟೀ–ಶರ್ಟ್ ವಿತರಣೆಯಲ್ಲಿ ಗೊಂದಲವಾಗದಂತೆ ಕ್ರಮ ವಹಿಸಲಾಗಿದೆ. ಕ್ರೀಡಾಕೂಟಕ್ಕೆ ಬರುವ ನೌಕರರ ನೋಂದಣಿಗೆ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿ ತಾಲ್ಲೂಕಿಗೆ ತಲಾ 2 ಕೌಂಟರ್ ಸ್ಥಾಪಿಸಿ ಟೋಕನ್ ಮತ್ತು ಗುರುತಿನ ಚೀಟಿ ವಿತರಿಸಲಾಗುತ್ತದೆ. ನೋಂದಣಿ ಮಾಡಿಸಿ ಟೋಕನ್ ಪಡೆದ ನೌಕರರು ಟೀ–ಶರ್ಟ್ ಪಡೆದುಕೊಳ್ಳಬೇಕು. ಬೆಳಿಗ್ಗೆ 8 ಗಂಟೆಯಿಂದಲೇ ನೋಂದಣಿ ಆರಂಭವಾಗಲಿದೆ’ ಎಂದು ವಿವರಿಸಿದರು.

‘ರಾಜ್ಯ ಮಟ್ಟದ ಕ್ರೀಡಾಕೂಟ ಮೇ 30ಕ್ಕೆ ನಿಗದಿಯಾಗಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಜಿಲ್ಲೆಯಲ್ಲಿ ಶೀಘ್ರವೇ ಕ್ರೀಡಾಕೂಟ ನಡೆಸುವಂತೆ ಸೂಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮೇ 2ನೇ ವಾರದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ಸಹಕಾರ ಅಗತ್ಯ: ‘ಜಿಲ್ಲೆಯ ಇತಿಹಾಸದಲ್ಲೇ ಅದ್ದೂರಿಯಾಗಿ ಕ್ರೀಡಾಕೂಟ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೆ ನೌಕರರ ಸಹಕಾರ ಅಗತ್ಯ’ ಎಂದು ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ನಾಗರಾಜ್ ಮನವಿ ಮಾಡಿದರು.

ಸಂಘದ ಗೌರವಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷರಾದ ಪುರುಷೋತ್ತಮ್, ಮಂಜುನಾಥ್, ಕಾರ್ಯದರ್ಶಿಗಳಾದ ಶಿವಕುಮಾರ್, ವಿಜಯಮ್ಮ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT