ಸೋಮವಾರ, ಏಪ್ರಿಲ್ 6, 2020
19 °C

ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಸೋಮವಾರ ಕಾಡಾನೆ ದಾಳಿಯಿಂದ ಮೃತಪಟ್ಟ ಆಟೊ ಚಾಲಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಮತ್ತು ತಲಾ ₹ 7.50 ಲಕ್ಷ ಪರಿಹಾರ ಕೊಡುವುದಾಗಿ ಅರಣ್ಯ ಸಚಿವ ಆನಂದ್‌ಸಿಂಗ್‌ ಘೋಷಿಸಿದರು.

ಮೃತರ ಶವಗಳನ್ನು ಇರಿಸಲಾಗಿದ್ದ ಇಲ್ಲಿನ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಗೆ ರಾತ್ರಿ ಭೇಟಿ ನೀಡಿದ ಸಚಿವರು ಕಾಡಾನೆ ದಾಳಿ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಜಿಲ್ಲೆಗೆ ಹೊಂದಿಕೊಂಡಂತೆ ತಮಿಳುನಾಡಿನ ಸುಮಾರು 25 ಕಿ.ಮೀ ಗಡಿಯಿದೆ. ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಿದೆ. ಅರಣ್ಯ ಪ್ರದೇಶಕ್ಕೆ ಹಾನಿಯಾಗದಂತೆ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

‘ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುತ್ತಲೂ ಆನೆ ದಾಳಿ ತಡೆಗೆ ಎತ್ತರದ ಬ್ಯಾರಿಕೇಡ್ ಹಾಕಲಾಗಿದೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲೂ ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ರೈಲು ಹಳಿ ಪಕ್ಕದಲ್ಲಿ ಬ್ಯಾರಿಕೇಡ್‌ ಹಾಕಲಾಗುತ್ತದೆ’ ಎಂದು ತಿಳಿಸಿದರು.

‘ಕಾಡಿನಲ್ಲಿ ಆಹಾರ ಸಿಗದ ಕಾರಣ ಆನೆಗಳು ಅಕ್ಕಪಕ್ಕದ ಗ್ರಾಮಗಳಿಗೆ ಬರುತ್ತವೆ. ಕಾಡಿನಲ್ಲಿ ಆನೆಗಳಿಗೆ ಆಹಾರದ ವ್ಯವಸ್ಥೆ ಮಾಡುವುದು ಸಾಧ್ಯವಿಲ್ಲ. ಕಾಡು ಉಳಿಸುವುದೇ ಆನೆ ದಾಳಿ ತಡೆಗೆ ಇರುವ ಏಕೈಕ ಪರಿಹಾರ. ಕಾಡಾನೆ ದಾಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾಗಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)