ಶನಿವಾರ, ಆಗಸ್ಟ್ 13, 2022
22 °C
ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆ

ಸರ್ಕಾರಿ ಸವಲತ್ತು ರೈತರಿಗೆ ತಲುಪಿಸಿ: ಈರಣ್ಣ ಕಡಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ರೂಪಿಸಿರುವ ಯೋಜನೆಗಳನ್ನು ಮೋರ್ಚಾದ ಪದಾಧಿಕಾರಿಗಳು ಅಧ್ಯಯನ ನಡೆಸಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಕರೆದಿದ್ದ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರಕಾರ ಇರುವುದರಿಂದ ಅತಿಸಣ್ಣ, ಪ್ರಗತಿಪರ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆ, ಸಲಹೆ ಆಲಿಸಿ ಜಿಲ್ಲಾ ಮೊರ್ಚಾದ ಮೂಲಕ ರಾಜ್ಯ ಘಟಕಕ್ಕೆ ಮುಟ್ಟಿಸುವ ಕೆಲಸ ಮಾಡಬೇಕು ಎಂದರು.

ಸಂಸದ ಎಸ್. ಮುನಿಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ರೈತ ಮೋರ್ಚಾ ಬಲಿಷ್ಟಗೊಂಡು ಬೂತ್ ಮಟ್ಟದಲ್ಲಿ ರೈತರನ್ನು ಗುರುತಿಸಿ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ಹಾಗೂ ಮಂಡಲ ಬಲಿಷ್ಠಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ರೈತ ಉತ್ಪಾದಕ ಸಂಸ್ಥೆಗಳನ್ನು ಹೆಚ್ಚು ಸಂಖ್ಯೆಯಲ್ಲಿ ರಚನೆಯಾಗಬೇಕು ಎಂದು ತಿಳಿಸಿದರು.

ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದರೆಡ್ಡಿ ಮಾತನಾಡಿ, ದೇಶದಲ್ಲಿ 10,000 ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಬೇಕೆಂದು ಪ್ರಧಾನಿ ಗುರಿ ಇಟ್ಟುಕೊಂಡಿದ್ದಾರೆ. ಪ್ರಸ್ತುತ 5,000 ಸಂಸ್ಥೆಗಳಿದ್ದರೂ ಸಕ್ರಿಯವಾಗಿರುವ ಸಂಸ್ಥೆಗಳು ಕೇವಲ 1,000 ಮಾತ್ರ. ಹೀಗಾಗಿ ಜಿಲ್ಲೆಯಲ್ಲಿ ಇರುವ 5 ಸಂಸ್ಥೆಗಳ ಜತೆ ಇನ್ನಷ್ಟು ಸಂಖ್ಯೆ ಹೆಚ್ಚಳವಾಗಬೇಕು ಎಂದರು.
ಜಿಲ್ಲಾ ಘಟಕದ ಅಧ್ಯಕ್ಷ ಡಾ. ವೇಣುಗೋಪಾಲ್ ಮಾತನಾಡಿ, ದೇಶ ಕೃಷಿ ಆಧಾರಿತವಾಗಿ ಶೇ 70ರಷ್ಟು ಮಂದಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರೂ ಜಿಡಿಪಿಯ ಪಾಲು ಶೇ 16ರಷ್ಟು ಮಾತ್ರ. 2020-22ರ ಒಳಗೆ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ, ಆಹಾರ ಉತ್ಪಾದನೆ ಮೂಲ ಸೌಕರ್ಯ ಮತ್ತು ಸಂಸ್ಕರಣೆಗೆ ₹ 1,000 ಕೋಟಿ ಒದಗಿಸಿದ್ದಾರೆ ಎಂದರು.

ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಲಕ್ಷ್ಮಣಗೌಡ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್, ಗುರುಲಿಂಗನಗೌಡ, ಉಪಾಧ್ಯಕ್ಷ ಸಿ.ವಿ. ಲೋಕೇಶ್, ಖಜಾಂಚಿ ನಲ್ಲೇಶ್‍ರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಗ್ರಾಮಾಂತರ ಅಧ್ಯಕ್ಷ ಸಿಡಿ ರಾಮಚಂದ್ರ, ನಗರಾಧ್ಯಕ್ಷ ತಿಮ್ಮರಾಯಪ್ಪ, ಪದಾಧಿಕಾರಿ ಪುರ ನಾರಾಯಣಸ್ವಾಮಿ, ಅಶೋಕರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.