ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: 20ಕ್ಕೆ ಹೋರಾಟ

ರಾಜ್ಯ ವಾಲ್ಮೀಕಿ ಅಂಬೇಡ್ಕರ್ ಪ್ರಜಾ ಹೋರಾಟ ಸಮಿತಿ ಅಧ್ಯಕ್ಷ ಮಾದೇಶ್ ಎಚ್ಚರಿಕೆ
Last Updated 16 ಮೇ 2022, 13:51 IST
ಅಕ್ಷರ ಗಾತ್ರ

ಕೋಲಾರ: ‘ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯೋಗ ಹಾಗೂ ಶಿಕ್ಷಣದಲ್ಲಿನ ಮೀಸಲಾತಿ ಬೇಡಿಕೆಯನ್ನು ಮೇ 20ರೊಳಗೆ ಈಡೇರಿಸದಿದ್ದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ರಾಜ್ಯ ವಾಲ್ಮೀಕಿ ಅಂಬೇಡ್ಕರ್ ಪ್ರಜಾ ಹೋರಾಟ ಸಮಿತಿ ಅಧ್ಯಕ್ಷ ಎಂ.ಮಾದೇಶ್ ಎಚ್ಚರಿಕೆ ನೀಡಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ. ‘ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರ ಏಕ ಸದಸ್ಯ ಆಯೋಗದ ವರದಿ ಜಾರಿಗಾಗಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಪ್ರಸನ್ನಾನಂದಪುರಿ ಸ್ವಾಮೀಜಿಯು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಿರಂತರ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ, ಸರ್ಕಾರವು ವಾಲ್ಮೀಕಿ ಸಮುದಾಯದ ಮೀಸಲಾತಿ ಬೇಡಿಕೆಗೆ ಸ್ಪಂದಿಸುತ್ತಿಲ್ಲ’ ಎಂದು ಕಿಡಿಕಾರಿದರು.

‘ಸರ್ಕಾರಕ್ಕೆ ವಾಲ್ಮೀಕಿ ಸಮುದಾಯದ ಬಗ್ಗೆ ಕಾಳಜಿಯಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ಸಮುದಾಯವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿಯಿಂದ ವಂಚಿತವಾಗಿದೆ. ಮೇ 20ಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿಗಳ ಸತ್ಯಾಗ್ರಹ 100 ದಿನ ಪೂರೈಸಲಿದ್ದು, ಸರ್ಕಾರದ ಗಮನ ಸೆಳೆಯಲು ರಾಜ್ಯದೆಲ್ಲೆಡೆ ಅಂದು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಬೃಹತ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ. ಜತೆಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುತ್ತೇವೆ’ ಎಂದು ಗುಡುಗಿದರು.

‘ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಸುಮಾರು 60 ಲಕ್ಷದಷ್ಟಿದೆ. ಅಂಬೇಡ್ಕರ್ ಹೇಳಿರುವಂತೆ ಮತ್ತು ಸಂವಿಧಾನದ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಯಾವುದೇ ನಿರ್ಬಂಧವಿಲ್ಲ. ಆದರೆ, ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿ ನಂತರ ಜಾರಿ ಮಾಡದೆ ಸಮುದಾಯದ ಮೀಸಲಾತಿ ಹಕ್ಕು ಕಸಿದುಕೊಳ್ಳುತ್ತಿವೆ’ ಎಂದು ದೂರಿದರು.


ನ್ಯಾಯಯುತ ಹಕ್ಕು: ‘ಮೇ 20ರಂದು ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ವಾಲ್ಮೀಕಿ ವೃತ್ತದಿಂದ ಮೆಕ್ಕೆ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸುತ್ತೇವೆ. ಜಾಥಾದಲ್ಲಿ ಸುಮಾರು 3 ಸಾವಿರ ಜನ ಪಾಲ್ಗೊಳ್ಳುತ್ತಾರೆ’ ಎಂದು ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಜಿಲ್ಲಾ ಸಂಚಾಲಕ ನರಸಿಂಹಪ್ಪ ವಿವರಿಸಿದರು.

‘ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಶೇ 3ರಿಂದ ಶೇ 7.5ಕ್ಕೆ ಮೀಸಲಾತಿ ಹೆಚ್ಚಿಸಲು ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಿತ್ತು. ಸಮಿತಿ ವರದಿ ನೀಡಿ ವರ್ಷಗಳೇ ಕಳೆದರೂ ಸರ್ಕಾರ ವರದಿ ಜಾರಿ ಮಾಡಿಲ್ಲ, ಮೇ 20ರ ರ‍್ಯಾಲಿಗೆ ದಲಿತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸಮುದಾಯದ ನ್ಯಾಯಯುತ ಹಕ್ಕು ಪಡೆದುಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರತಿಯೊಬ್ಬರೂ ಭಾಗಹಿಸಬೇಕು’ ಎಂದು ಕೋರಿದರು.

ವಾಲ್ಮೀಕಿ ಸಮುದಾಯದ ಮುಖಂಡರಾದ ಶ್ಯಾಮ್‌ ನಾಯಕ್‌, ಮಂಜುಳಾ, ಆನಂದ್‌, ರಮೇಶ್‌, ಶ್ರೀನಿವಾಸ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT