ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ಎದುರು ‘ಕೋಳಿ’ ಪ್ರತಿಭಟನೆ

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಆಗ್ರಹ
Last Updated 19 ಜನವರಿ 2021, 1:54 IST
ಅಕ್ಷರ ಗಾತ್ರ

ಮುಳಬಾಗಿಲು: ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಬಗೆಹರಿಸಿ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ರೈತ ಸಂಘದಿಂದ ಕೋಳಿಗಳ ಸಮೇತ ಸಾರ್ವಜನಿಕ ಆಸ್ಪತ್ರೆಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ‘ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ, ಸಾರ್ವಜನಿಕರಿಗೆ ಸಮರ್ಪಕವಾಗಿ ಆರೋಗ್ಯ ಸೇವೆ ಸಿಗುತ್ತಿಲ್ಲ. ಸಿಬ್ಬಂದಿ ಕೊರತೆಯನ್ನೇ ನೆಪವಾಗಿಟ್ಟು ಕೊಂಡಿರುವ ವೈದ್ಯರು ಹಾಗೂ ಸಿಬ್ಬಂದಿ ಖಾಸಗಿ ಆಸ್ಪತ್ರೆ, ತಮ್ಮ ಸ್ವಂತ ಕ್ಲಿನಿಕ್‌ಗಳಿಗೆ ರೋಗಿಗಳನ್ನು ಕಳುಹಿಸುವ ದಂದೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದರು.

‘ಅನಾರೋಗ್ಯ ಸಮಯದಲ್ಲಿಯೂ ವಿಧಿಯಿಲ್ಲದೆ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಸಾಕಷ್ಟು ಹಣ ವೆಚ್ಚ ಮಾಡುತ್ತಿರುವುದು ತಾಲ್ಲೂಕಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಯೂ ಇಲ್ಲ, ಕನಿಷ್ಠ ಔಷಧಿಗಳು ಸಿಗದೆ ಖಾಸಗಿ ಮೆಡಿಕಲ್ ಅಂಗಡಿಗಳಿಗೆ ಚೀಟಿ ಬರೆದುಕೊಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಭಾಗೀಯ ಜಿಲ್ಲಾಧ್ಯಕ್ಷ ಫಾರೂಖ್‌ ಪಾಷ ಮಾತನಾಡಿ, ‘ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಅಪಘಾತ ಸೇರಿದಂತೆ ಯಾವುದೇ ಸಮಸ್ಯೆಯಾದಾಗ ಆಂಬ್ಯುಲೆನ್ಸ್ ಸೇವೆ ಸಮರ್ಪಕವಾಗಿ ಸಿಗುತ್ತಿಲ್ಲ. ತಡವಾಗಿ ಬರುವ ಚಾಲಕರು ಕಮಿಷನ್‌ಗಾಗಿ ಸರ್ಕಾರಿ ಆಸ್ಪತ್ರೆಗಳನ್ನು ಹೊರತುಪಡಿಸಿ ಖಾಸಗಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗುತ್ತಿದ್ದಾರೆ’ ಎಂದು ಕಿಡಿಕಾರಿದರು.

ಹೆರಿಗೆಗಾಗಿ ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಿಲ್ಲದ ಸ್ಥಿತಿ ಇದೆ. ಸೌಲಭ್ಯಗಳು ಸಮರ್ಪಕವಾಗಿರದ ಕಾರಣ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿದ್ದಾರೆ. ತಾಲ್ಲೂಕಿನಲ್ಲಿ ನಕಲಿ ಕ್ಲಿನಿಕ್‌ಗಳ ಹಾವಳಿ ಮಿತಿಮೀರಿದೆ. ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಖಂಡನೀಯ. ಅನೇಕ ಬಾರಿ ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ದೂರಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ ಮತ್ತು ಡಾ.ಭಾರತಿ ಅವರು ಮನವಿ ಸ್ವೀಕರಿಸಿದರು.

ವಿಭಾಗೀಯ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ರಾಜ್ಯ ವಿಭಾಗೀಯ ಉಪಾಧ್ಯಕ್ಷ ನಲ್ಲಂಡಹಳ್ಳಿ ಕೇಶವ, ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಮೇಲಾಗಾಣಿ ವಿಜಯಪಾಲ್, ರಾಜ್ಯ ಸಂಚಾಲಕ ಸುಪ್ರಿಂಚಲ, ನವೀನ್, ವೇಣು, ನಾಗರಾಜ, ವೆಂಕಟರವಣಪ್ಪ, ಹೆಬ್ಬಣಿ ಆನಂದರೆಡ್ಡಿ, ಪುತ್ತೇರಿರಾಜು, ಗಜೇಂದ್ರ, ಕಿಶೋರ್, ಬಾಲು, ಸಾಗರ್, ರಂಜಿತ್, ಐತಂಡಹಳ್ಳಿ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT