ಮಂಗಳವಾರ, ನವೆಂಬರ್ 12, 2019
19 °C
ಅಧಿಕಾರಿಗಳು ಕಷ್ಟಕ್ಕೆ ಸ್ಪಂದಿಸುತ್ತಿಲ್ಲ: ರೈತ ಸಂಘ ಸದಸ್ಯರ ಆಕ್ರೋಶ

ಟೊಮೆಟೊ ಬೆಳೆ ನಾಶ: ಪರಿಹಾರಕ್ಕೆ ಒತ್ತಾಯ

Published:
Updated:
Prajavani

ಕೋಲಾರ: ಜಿಲ್ಲೆಯಲ್ಲಿ ಅಂಗಮಾರಿ ರೋಗದಿಂದ ನಷ್ಟವಾಗಿರುವ ಟೊಮೆಟೊ ಬೆಳೆಗೆ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶನಿವಾರ ತೋಟಗಾರಿಕೆ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.

‘ಊಜಿ ನೊಣದ ಬಾಧೆಯಿಂದ ಅಕ್ಟೋಬರ್‌ ತಿಂಗಳಲ್ಲಿ ಸಾಕಷ್ಟು ಟೊಮೆಟೊ ಬೆಳೆ ನಾಶವಾಗಿತ್ತು. ಅದರ ಬೆನ್ನಲ್ಲೇ ಅಂಗಮಾರಿ ರೋಗ ಕಾಣಿಸಿಕೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯ ರೈತರು ಅಂತರ್ಜಲ ನಂಬಿ ಕೃಷಿ ಮಾಡುತ್ತಿದ್ದಾರೆ. ಬರ ಪರಿಸ್ಥಿತಿಗೂ ಎದೆಗುಂದದೆ ಬೆಳೆ ಬೆಳೆಯುತ್ತಿದ್ದಾರೆ. ಆದರೆ, ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕ ಮಾರಾಟ ಕಂಪನಿಗಳು, ಅಂಗಡಿಗಳ ಮಾಲೀಕರು ರೈತರನ್ನು ವಂಚಿಸುತ್ತಿದ್ದಾರೆ. ರೈತರಿಗೆ ಕಳಪೆ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ಮಾರಲಾಗುತ್ತಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಜಿಲ್ಲೆಯು ಬರಕ್ಕೆ ತುತ್ತಾಗಿದ್ದು, ಸಾಕಷ್ಟು ರೈತರು ಬೆಳೆ ಕಳೆದುಕೊಂಡಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ರೈತರು ಬಡ್ಡಿ ಸಾಲ ಮಾಡಿ ಕೃಷಿ ಮಾಡಿದ್ದಾರೆ. ನಕಲಿ ಬಿತ್ತನೆ ಬೀಜ ಮಾರಾಟ ಮಳಿಗೆಗಳು ಹಾದಿ ಬೀದಿಯಲ್ಲಿ ತಲೆ ಎತ್ತಿವೆ. ಈ ಮಳಿಗೆಗಳ ಮಾಲೀಕರೊಂದಿಗೆ ಕೈಜೋಡಿಸಿರುವ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಕೀಟಬಾಧೆ ಹತೋಟಿಗೆ ಮಾಹಿತಿ ಕೊಡುತ್ತಿಲ್ಲ’ ಎಂದು ಕಿಡಿಕಾರಿದರು.

ರೈತರ ಶೋಷಣೆ: ‘ಟೊಮೆಟೊ ಜಿಲ್ಲೆಯ ಪ್ರಮುಖ ಬೆಳೆ. ಬಡ್ಡಿ ಸಾಲ ಮಾಡಿ ಟೊಮೆಟೊ ಬೆಳೆದ ರೈತರು ಸಾಲದ ಕಂತು ಹಾಗೂ ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಒಂದೆಡೆ ಬೆಲೆ ಕುಸಿತವು ರೈತರನ್ನು ಸಂಕಷ್ಟಕ್ಕೆ ದೂಡಿದೆ. ಮತ್ತೊಂದೆಡೆ ಕೀಟಬಾಧೆಯಿಂದ ಬೆಳೆ ಹಾಳಾಗಿದೆ. ಮಾರುಕಟ್ಟೆಯಲ್ಲಿ ದಲ್ಲಾಳಿಗಳು ತೂಕದಲ್ಲಿ ಮೋಸ ಮಾಡಿ ರೈತರನ್ನು ಶೋಷಿಸುತ್ತಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ರೈತರಿಗೆ ಶೀಘ್ರವೇ ಬೆಳೆ ಪರಿಹಾರ ಕೊಡಬೇಕು. ಬಿತ್ತನೆ ಬೀಜ ಗುಣಮಟ್ಟದ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಕಳಪೆ ಬಿತ್ತನೆ ಬೀಜ ಮಾರುವ ಅಂಗಡಿಗಳ ಪರವಾನಗಿ ರದ್ದುಪಡಿಸಬೇಕು. ಅಂಗಮಾರಿ ರೋಗ ಹತೋಟಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ಕೀಟನಾಶಕ ಖರೀದಿಗೆ ಸಹಾಯಧನ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆ ಸದಸ್ಯರಾದ ಆಂಜಿನಪ್ಪ, ಸಹದೇವಪ್ಪ, ನಿರಂಜನ್, ಕಿಶೋರ್, ತಿಮ್ಮಣ್ಣ, ವೆಂಕಟೇಶಪ್ಪ, ಮಂಜುನಾಥ್, ಕೇಶವ, ರಮೇಶ್, ಸುಧಾಕರ್, ನವೀನ್, ಶಿವು ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)