ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕುರಹಿತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ: ತಾಲ್ಲೂಕು ವೈದ್ಯಾಧಿಕಾರಿ ರಮ್ಯ ದೀಪಿಕಾ

Last Updated 18 ಆಗಸ್ಟ್ 2021, 16:41 IST
ಅಕ್ಷರ ಗಾತ್ರ

ಕೋಲಾರ: ‘ತಂಬಾಕು ಉತ್ಪನ್ನ ಸೇವನೆ ಚಟ ತ್ಯಜಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ರಮ್ಯ ದೀಪಿಕಾ ಕಿವಿಮಾತು ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಕುರಿತ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

‘ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯ ಹಾಳಾಗುತ್ತದೆ. ಆದ ಕಾರಣ ಜನರು ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಬಲಿಯಾಗದೆ ಆರೋಗ್ಯಕರ ಜೀವನ ನಡೆಸಬೇಕು. ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಬೇಕು. ತಂಬಾಕು ಉತ್ಪನ್ನ ಸೇವನೆ ವ್ಯಸನಿಗಳ ಮನಪರಿವರ್ತನೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ತಂಬಾಕು ಸೇವನೆಯು ಜೀವಕ್ಕೆ ಅಪಾಯವೆಂದು ತಿಳಿದಿದ್ದರೂ ಜನ ಅದರ ಚಟಕ್ಕೆ ಬಿದ್ದು ಹಾಳಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ 60 ರೀತಿಯ ಮಾರಕ ಕಾಯಿಲೆಗಳು ಮತ್ತು ಭಯಾನಕ ಕ್ಯಾನ್ಸರ್ ರೋಗಕ್ಕೆ ತುತ್ತಾಗುವ ಸಂಭವವಿದೆ. ಆದ ಕಾರಣ ಜನ ಎಚ್ಚೆತ್ತು ತಂಬಾಕುರಹಿತ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು’ ಎಂದು ತಿಳಿಸಿದರು.

‘ತಂಬಾಕು ಉತ್ಪನ್ನ ಬಳಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. 18 ವರ್ಷದಿಂದ 25 ವರ್ಷದೊಳಗಿನ ಯುವಕ ಯುವತಿಯರು ತಂಬಾಕು ಉತ್ಪನ್ನಗಳಿಗೆ ಆಕರ್ಷಿತರಾಗಿ ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆ. ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’ ಎಂದರು.

‘ತಂಬಾಕು ಉತ್ಪನ್ನ ಸೇವಿಸುವವರ ಆರೋಗ್ಯ ಹಾಳಾಗುವುದರ ಜತೆಗೆ ಅಕ್ಕಪಕ್ಕದವರ ಆರೋಗ್ಯವೂ ಕೆಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದ್ದು, ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದರು.

ದಂಡ ವಿಧಿಸಬೇಕು: ‘ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉನ್ನತ ಅನುಷ್ಠಾನ ಜಿಲ್ಲೆಯಾಗಿ ಘೋಷಿಸಬೇಕು. ಎಲ್ಲಾ ಸರ್ಕಾರಿ ಕಚೇರಿಗಳು ತಂಬಾಕು ಮುಕ್ತವಾಗಬೇಕು ಹಾಗೂ ಫಲಕ ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸಬೇಕು ಹಾಗೂ ತಂಬಾಕು ನಿಷೇಧ ಫಲಕಗಳನ್ನು ಅಳವಡಿಸಬೇಕು’ ಎಂದು ತಂಬಾಕು ನಿಯಂತ್ರಣ ಘಟಕದ ಅಧಿಕಾರಿ ಡಾ,ಮಹಮ್ಮದ್ ಸೂಚಿಸಿದರು.

‘ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧಿಸಲಾಗಿದೆ. ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಅಂಗಡಿ ಮಾಲೀಕರು ತಂಬಾಕು ಉತ್ಪನ್ನಗಳನ್ನು ಪ್ರದರ್ಶಿಸಬಾರದು. ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ತಂಬಾಕು ಮುಕ್ತ ಪ್ರದೇಶಗಳೆಂಬ ಫಲಕ ಅಳವಡಿಸಬೇಕು’ ಎಂದು ಹೇಳಿದರು.

ತಹಶೀಲ್ದಾರ್‌ ವಿ.ವಿಲಿಯಂ, ಹಿರಿಯ ಆರೋಗ್ಯ ಅಧಿಕಾರಿ ಆರ್.ಸತ್ಯನಾರಾಣಗೌಡ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಂಯೋಜಕ ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT