ಶನಿವಾರ, ಜೂನ್ 19, 2021
28 °C

ಅರಸು ಸಾಮಾಜಿಕ ನ್ಯಾಯದ ಹರಿಕಾರರು: ಜಿಲ್ಲಾಧಿಕಾರಿ ಸತ್ಯಭಾಮ ಬಣ್ಣನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಬಣ್ಣಿಸಿದರು.

ಜಿಲ್ಲಾಡಳಿತವು ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೇವರಾಜ ಅರಸು ಜಯಂತಿಯಲ್ಲಿ ಮಾತನಾಡಿ, ‘ಅರಸು ಅವರ ಅಧಿಕಾರಾವಧಿಯಲ್ಲಿ ಜಾರಿಯಾದ ಯೋಜನೆಗಳು ರಾಜ್ಯದಲ್ಲಿ ಇಂದಿಗೂ ಮನೆ ಮಾತಾಗಿವೆ’ ಎಂದರು.

‘ಸರ್ವರಿಗೂ ಸಮಬಾಳು ಮತ್ತು ಸರ್ವರಿಗೂ ಸಮಪಾಲು ಕಲ್ಪಿಸಲು ಅರಸು ಸಾಕಷ್ಟು ಶ್ರಮಿಸಿದರು. ಅವರ ಯೋಜನೆಗಳು ಸಮಾಜಕ್ಕೆ ದಾರಿದೀಪ. 28 ವರ್ಷ ಶಾಸಕರಾಗಿದ್ದ ಅವರು ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿ ಬಡವರು, ಹಿಂದುಳಿದ ವರ್ಗದವರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು’ ಎಂದು ಹೇಳಿದರು.

‘ಈ ಹಿಂದೆ ಬಡವರು ಬೆಳೆದ ಬೆಳೆಯನ್ನು ಶ್ರೀಮಂತರು ದೋಚಿಕೊಂಡು ಹೋಗುತ್ತಿದ್ದರು. ಇದನ್ನು ಸಹಿಸದ ಅರಸು ಉಳುವವನಿಗೆ ಭೂಮಿ ಯೋಜನೆ ಜಾರಿಗೊಳಿಸಿದರು. ಅವರ ಸೇವೆಯನ್ನು ರೈತರು ಎಂದಿಗೂ ಮರೆಯಬಾರದು. ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯದಲ್ಲಿ ವಿದ್ಯಾರ್ಥಿನಿಲಯ ಸ್ಥಾಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ’ ಎಂದು ಶ್ಲಾಘಿಸಿದರು.

‘ಅರಸು ಅವರು ಜೀತದಾಳು ಹಾಗೂ ಮಲಹೊರುವ ಪದ್ಧತಿ ನಿಷೇಧಿಸಿ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಎಲ್ಲಾ ಬಡವರಿಗೂ ವಸತಿ ಸೌಲಭ್ಯ, ಶಿಕ್ಷಣದಲ್ಲಿ ಸಮಾನತೆ ಕಲ್ಪಿಸುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಿದರು. ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಿ ಸಹಾಯಧನ ನೀಡಿದರು. ಮೌನ ಕ್ರಾಂತಿ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದರು’ ಎಂದು ತಿಳಿಸಿದರು.

ಸುಶಿಕ್ಷಿತರಾಗಿ: ‘ಅರಸು ಅವರು ಕೃಷಿ ಕ್ಷೇತ್ರಕ್ಕೂ ಆದ್ಯತೆ ನೀಡಿದ್ದರು. ಆಗಲೇ ರೈತರ ಸಾಲ ಮನ್ನಾ ಮಾಡಿದ್ದರು. ಅಸಮಾನತೆ ತೊಡೆದು ಹಾಕಲು ಹೆಚ್ಚು ಶ್ರಮ ವಹಿಸಿ ಅಹಿಂದ ವರ್ಗಗಳಿಗೆ ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದರು. ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಾಗಿ ದುಡಿದ ಧೀಮಂತ ನಾಯಕ. ಅವರ ಉದಾತ್ತ ಚಿಂತನೆ ಎಲ್ಲರಿಗೂ ಆದರ್ಶವಾಗಬೇಕು’ ಎಂದು ಕಿವಿಮಾತು ಹೇಳಿದರು.

‘ಅರಸು ಹಿಂದುಳಿದ ವರ್ಗಗಳ ಏಳಿಗೆಗಾಗಿ ವಿದ್ಯಾರ್ಥಿವೇತನ, ರಾಜಕೀಯ ಮತ್ತು ಸಾಮಾಜಿಕ ಮೀಸಲಾತಿ ಜಾರಿಗೆ ತಂದರು. ಅವರನ್ನು ಹಿಂದುಳಿದ ವರ್ಗಗಳ ದೇವರೆಂದು ಭಾವಿಸಬೇಕು. ಅವರು ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು’ ಎಂದು ಸಲಹೆ ನೀಡಿದರು.

ಕೊಡುಗೆ ಅಪಾರ: ‘ದೇವರಾಜ ಅರಸು ಅವರು ಒಂದು ವರ್ಗಕ್ಕೆ ಸೀಮಿತರಾಗಿರಲಿಲ್ಲ. ಎಲ್ಲಾ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂಬ ನಿಟ್ಟಿನಲ್ಲಿ ಅವರು ಯೋಜನೆಗಳನ್ನು ಜಾರಿಗೆ ತಂದರು. ಪ್ರತಿಯೊಬ್ಬರು ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು’ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ನಾರಾಯಣಸ್ವಾಮಿ ಹೇಳಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಪ್ರಸಾದ್‌ಬಾಬು, ಕಾಂಗ್ರೆಸ್‌ ಜಿಲ್ಲಾ ಘಟಕದ ಉಪಾಧ್ಯಕ್ಷ ಎಲ್‌.ಎ.ಮಂಜುನಾಥ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಜಣ್ಣ ಪಾಲ್ಗೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು