ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಭ್ಯ ಸಂಪನ್ಮೂಲದಲ್ಲಿ ಗ್ರಾಮ ಅಭಿವೃದ್ಧಿಪಡಿಸಿ

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಸೀಮಾ ಗೌರ್ ಸಲಹೆ
Last Updated 12 ನವೆಂಬರ್ 2019, 17:13 IST
ಅಕ್ಷರ ಗಾತ್ರ

ಕೋಲಾರ: ‘ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಅಧಿಕಾರ ನೀಡಲಾಗಿದೆ. ಲಭ್ಯ ಸಂಪನ್ಮೂಲ ಬಳಸಿಕೊಂಡು ಗ್ರಾಮಗಳನ್ನು ಅಭಿವೃದ್ಧಿಪಡಿಸಿ’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರರಾದ ಸೀಮಾ ಗೌರ್ ಸಲಹೆ ನೀಡಿದರು.

ತಾಲ್ಲೂಕಿನ ನರಸಾಪುರ ಗ್ರಾಮ ಪಂಚಾಯಿತಿಗೆ ಮಂಗಳವಾರ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ ಮಾತನಾಡಿ, ‘ಗ್ರಾಮಗಳಲ್ಲಿ ಏನೇ ಸಮಸ್ಯೆ ಎದುರಾದರೂ ಜನ ಪಂಚಾಯಿತಿ ಅಧಿಕಾರಿಗಳನ್ನು ಕೇಳುತ್ತಾರೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಪಂಚಾಯಿತಿಗಳ ಪಾತ್ರ ನಿರ್ಣಾಯಕ. ಗ್ರಾ.ಪಂ ಮಟ್ಟದ ಅಧಿಕಾರಿಗಳು ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಬೇಕು’ ಎಂದರು.

‘ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜನರನ್ನು ವಿನಾಕಾರಣ ಕಚೇರಿಗೆ ಅಲೆಸಬಾರದು. ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ದುರ್ಬಳಕೆ ಆಗಬಾರದು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿಯಿದೆ. ಆದರೂ ಜಿಲ್ಲೆಯ ರೈತರು ಎದೆಗುಂದದೆ ಕೃಷಿ ನಿರ್ವಹಣೆ ಮಾಡುತ್ತಿದ್ದಾರೆ. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. 2 ಸಾವಿರ ಅಡಿ ಆಳ ಕೊಳವೆ ಬಾವಿ ಕೊರೆದರೂ ನೀರು ಸಿಗುವುದು ಕಷ್ಟವಾಗಿದೆ. ಜತೆಗೆ ನೀರಿನಲ್ಲಿ ವಿಷಕಾರಿ ಫ್ಲೋರೈಡ್ ಅಂಶ ಹೆಚ್ಚಿರುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ಈ ಕಾರಣಕ್ಕೆ ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ’ ಎಂದು ವಿವರಿಸಿದರು.

‘ನರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೈಗಾರಿಕೆಗಳು ಸ್ಥಾಪನೆಯಾಗಿರುವುದಿಂದ ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್‌) ಸಮುದಾಯದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮುಂದಿನ ವರ್ಷ ಕೈಗೊಳ್ಳುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಂದಾಜು ಪಟ್ಟಿ ತಯಾರಿಸಿ ನೀಡಲಾಗಿದೆ’ ಎಂದು ತಿಳಿಸಿದರು.

ಸಹಕರಿಸುತ್ತಿಲ್ಲ: ‘ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಪಂಚಾಯಿತಿಗೆ 68 ಅಂಕ ಬಂದಿದೆ. ಸಮೀಕ್ಷೆ ಪ್ರಕಾರ ಗ್ರಾ.ಪಂ ವ್ಯಾಪ್ತಿಯಲ್ಲಿ 7,500 ಜನಸಂಖ್ಯೆಯಿದೆ. ಕೈಗಾರಿಕೆಗಳು ಸಂಖ್ಯೆ ಹೆಚ್ಚಿರುವುದರಿಂದ ಸುಮಾರು 10 ಸಾವಿರ ಮಂದಿ ಹೊರಗಿನ ವ್ಯಕ್ತಿಗಳು ವಾಸವಿದ್ದಾರೆ’ ಎಂದು ನರಸಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಹೇಶ್‌ಕುಮಾರ್ ಹೇಳಿದರು.

‘ಕೈಗಾರಿಕೆಯವರು ಸಮುದಾಯ ಅಭಿವೃದ್ಧಿಗೆ ಸಹಕರಿಸುತ್ತಿಲ್ಲ. ಪಂಚಾಯಿತಿಯಿಂದ ನಿರ್ಮಿಸಿರುವ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗಿದ್ದು, ಪ್ರತಿ ತಿಂಗಳು ಆದಾಯ ಬರುತ್ತಿದೆ. ಜತೆಗೆ ಶೇ 70ರಷ್ಟು ತೆರಿಗೆ ವಸೂಲಿ ಮಾಡಲಾಗಿದ್ದು, ಈ ಹಣವನ್ನು ಸಮುದಾಯದ ಅಭಿವೃದ್ಧಿಗೆ ಬಳಸಲಾಗುತ್ತಿದೆ’ ಎಂದು ವಿವರಿಸಿದರು.

‘ಪಂಚಾಯಿತಿ ವ್ಯಾಪ್ತಿಯ 2 ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆ ನೀರು ಬಂದಿದ್ದು, ಅಂತರ್ಜಲ ಮಟ್ಟ ಸುಧಾರಿಸಿದೆ. ಇದರಿಂದ ನೀರಿನ ಸಮಸ್ಯೆ ನಿವಾರಣೆಯಾಗಿದೆ. 605 ಕುಟುಂಬಗಳಿಗೆ ಉದ್ಯೋಗ ಚೀಟಿ ನೀಡಲಾಗಿದ್ದು, 400 ಮಂದಿ ಕೆಲಸಕ್ಕೆ ಬರುತ್ತಿದ್ದಾರೆ. ನರೇಗಾ ಅಡಿ ಮಾಡುವ ಕೆಲಸಕ್ಕೆ ಸಾಮಗ್ರಿಗಳ ಬಿಲ್ ಪಾವತಿಯಾಗಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಮನವಿ ಮಾಡಿದರು.

ನರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಮಾದೇಶ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT