ಭಾನುವಾರ, ಮೇ 22, 2022
22 °C
ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಖಂಡಿಸಿ ಬಂದ್‌

ಜಿಲ್ಲಾ ಕೇಂದ್ರ ಸ್ತಬ್ಧ: ಜನಜೀವನ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ದತ್ತ ಮಾಲಾಧಾರಿಗಳ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಕೋಲಾರ ಬಂದ್‌ಗೆ ಕರೆ ಕೊಟ್ಟಿದ್ದರಿಂದ ಜಿಲ್ಲಾ ಕೇಂದ್ರದಲ್ಲಿ ಗುರುವಾರ ವಾಣಿಜ್ಯ ವಹಿವಾಟು ಹಾಗೂ ಬಸ್‌ ಸೇವೆ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಯಿತು.

ಬಂದ್‌ ಹಿನ್ನೆಲೆಯಲ್ಲಿ ಇಡೀ ದಿನ ಅಂಗಡಿಗಳು ಮುಚ್ಚಿದ್ದವು. ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲೇ ಇಲ್ಲ. ಸರಕು ಸಾಗಣೆ ವಾಹನ ಸೇವೆಯಲ್ಲಿ ವ್ಯತ್ಯಯವಾಗಿ ಜನಜೀವನಕ್ಕೆ ಹೆಚ್ಚಿನ ತೊಂದರೆಯಾಯಿತು. ಬೆಳಿಗ್ಗೆ ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹಿಂದೂಪರ ಸಂಘಟನೆಗಳ ಸದಸ್ಯರು ತಡೆದರು. ಹೀಗಾಗಿ ಬಸ್‌ಗಳನ್ನು ವಾಪಸ್‌ ಡಿಪೊಗೆ ಕಳುಹಿಸಲಾಯಿತು.

ಬ್ಯಾಂಕ್‌, ಅಂಚೆ ಕಚೇರಿ, ಬಿಎಸ್‌ಎನ್‌ಎಲ್‌ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಕೆಲ ಹೊತ್ತು ಕಾರ್ಯ ಚಟುವಟಿಕೆ ನಡೆದವು. ಬಳಿಕ ಸಂಘಟನೆಗಳ ಸದಸ್ಯರು ಖಾಸಗಿ ಕಂಪನಿ ಹಾಗೂ ಸರ್ಕಾರಿ ಕಚೇರಿಗಳನ್ನು ಬಲವಂತವಾಗಿ ಮುಚ್ಚಿಸಿದರು. ಅಲ್ಲದೇ, ಆಟೊಗಳನ್ನು ತಡೆದು ಬಂದ್‌ ಬೆಂಬಲಿಸುವಂತೆ ಒತ್ತಾಯಿಸುತ್ತಿದ್ದ ದೃಶ್ಯ ಹಲವೆಡೆ ಕಂಡುಬಂತು.

ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಬಸ್‌ಗಾಗಿ ಗಂಟೆಗಟ್ಟಲೇ ಕಾಯುತ್ತಾ ಕುಳಿತಿದ್ದರು. ಕೊನೆಗೂ ಬಸ್‌ ಸಂಚಾರ ಆರಂಭವಾಗದಿದ್ದರಿಂದ ಪ್ರಯಾಣ ಮೊಟಕುಗೊಳಿಸಿ ಮನೆಯತ್ತ ಹೆಜ್ಜೆ ಹಾಕಿದರು. ಸಾರ್ವಜನಿಕರು ಅನಿವಾರ್ಯವಾಗಿ ಸರಕು ಸಾಗಣೆ ಆಟೊಗಳಲ್ಲಿ ಸಂಚರಿಸುತ್ತಿದ್ದ ದೃಶ್ಯ ಕಂಡುಬಂತು.

ಸದಾ ಜನಜಂಗುಳಿ ಮತ್ತು ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ಮಾರುಕಟ್ಟೆಗಳು ಬಿಕೋ ಎನ್ನುತ್ತಿದ್ದವು. ರಸ್ತೆಗಳಲ್ಲಿ ಜನರ ಓಡಾಟ ಮತ್ತು ವಾಹನ ಸಂಚಾರ ವಿರಳವಾಗಿತ್ತು. ವರ್ತಕರು, ಹೋಟೆಲ್ ಮಾಲೀಕರ ಸಂಘ, ಸರಕು ಸಾಗಣೆ ವಾಹನ ಮಾಲೀಕರು ಮತ್ತು ಚಾಲಕರು, ಆಟೊ ಚಾಲಕರ ಸಂಘದ ಸದಸ್ಯರು ಬಂದ್‌ಗೆ ಬೆಂಬಲ ಸೂಚಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ಕಡಿಮೆ ಇತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಎಟಿಎಂ ಕೇಂದ್ರಗಳನ್ನು ಮುಚ್ಚಲಾಗಿತ್ತು. ಇದರಿಂದ ಗ್ರಾಹಕರು ತೊಂದರೆ ಅನುಭವಿಸಿದರು. ಆಸ್ಪತ್ರೆಗಳು, ಔಷಧ ಮಾರಾಟ ಮಳಿಗೆಗಳು ಎಂದಿನಂತೆ ಸೇವೆ ಒದಗಿಸಿದವು. ಪೆಟ್ರೋಲ್‌ ಬಂಕ್‌ಗಳಲ್ಲಿ ವಹಿವಾಟು ಸಹಜವಾಗಿತ್ತು.

ಆಕ್ರೋಶ ವ್ಯಕ್ತ: ಬೈಕ್‌ ರ‍್ಯಾಲಿ ನಡೆಸಿದ ಬಜರಂಗದಳ, ಶ್ರೀರಾಮಸೇನೆ, ಹಿಂದೂ ಜಾಗರಣಾ ವೇದಿಕೆ, ವಿಶ್ವ ಹಿಂದೂ ಪರಿಷತ್‌ ಸದಸ್ಯರು ದತ್ತಮಾಲಾಧಾರಿಗಳ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೈಕ್‌ ರ‍್ಯಾಲಿ ಅಂತ್ಯಗೊಂಡ ಬಳಿಕ ಗಾಂಧಿವನದ ಬಳಿ ನಡೆದ ಪ್ರತಿಭಟನೆಯಲ್ಲಿ ಸಂಸದ ಎಸ್‌.ಮುನಿಸ್ವಾಮಿ, ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಹಾಗೂ ಬಿಜೆಪಿ ಮುಖಂಡರು ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.