ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

Last Updated 22 ಸೆಪ್ಟೆಂಬರ್ 2022, 4:25 IST
ಅಕ್ಷರ ಗಾತ್ರ

ಮುಳಬಾಗಿಲು: ನಗರದ ತಾಲ್ಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜಾ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವ ಆರ್. ಅಶೋಕ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಒಂದು ತಾಲ್ಲೂಕಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು
ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ನಿಗದಿತ ಸಮಯಕ್ಕೆ ಪರಿಹಾರ ನೀಡಬೇಕು. ಅದನ್ನು ಬಿಟ್ಟು ವಿನಾಕಾರಣ ಕಚೇರಿಗೆ ಅಲೆದಾಡುವುದು ಸರಿಯಲ್ಲ. ಯಾವುದೇ ಅಧಿಕಾರಿ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದರೆ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದರು.

ಭೂದಾಖಲೆ ಸೇರಿದಂತೆ ನಾನಾ ಇಲಾಖೆಗಳಲ್ಲಿ ಸರ್ಕಾರದ ಯೋಜನೆಗಳು ಪಡೆದುಕೊಳ್ಳಬೇಕಾದರೆ ಸಾರ್ವಜನಿಕರಿಗೆ ತುಂಬಾ ತೊಂದರೆ ಅನುಭವಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ನಾನು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಾರ್ವಜನಿಕ ಕೆಲಸಗಳನ್ನು ತುರ್ತಾಗಿ ಮಾಡಿಕೊಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದರು.

ತಾಲ್ಲೂಕು ಕಚೇರಿಯಲ್ಲಿ ಜಾತಿ ಮತ್ತು ಪ್ರಮಾಣ ಪತ್ರ ಪಡೆದುಕೊಳ್ಳಬೇಕಾದರೆ ಒಂದು ತಿಂಗಳು ಕಾಯಬೇಕಾದ ಪರಿಸ್ಥಿತಿ ಇದೆ. ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಸಮಯಕ್ಕೆ ಜನಸಾಮಾನ್ಯರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯ ಜಮ್ಮನಹಳ್ಳಿ ಕೃಷ್ಣ ಜಿಲ್ಲಾಧಿಕಾರಿಯ ಗಮನಕ್ಕೆ ಸೆಳೆದರು.

ದಲಿತ ಮುಖಂಡ ಸಂಗಸಂದ್ರ ವಿಜಯ್ ಕುಮಾರ್ ಮಾತನಾಡಿ, ಅಧಿಕಾರಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುತ್ತಿಲ್ಲ. ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಕೆಲಸಗಳು ನಡೆಯುತ್ತಿಲ್ಲ. ತಾಲ್ಲೂಕಿನ ಅವ್ಯವಸ್ಥೆ ಹದಗೆಟ್ಟಿದೆ. ಕೆರೆ ಅಂಗಳ ಒತ್ತುವರಿ ಮಾಡುತ್ತಿರುವುದನ್ನು ತೆರವುಗೊಳಿಸಿಲ್ಲ ಎಂದು ದೂರಿದರು.

ಸುಮಾರು ವರ್ಷಗಳಿಂದ ಸರ್ವೆ ಕಾರ್ಯ ವಿಳಂಬ ಮಾಡುತ್ತಿರುವ ಅಧಿಕಾರಿಯನ್ನು ಡಿಸಿ ತರಾಟೆಗೆ ತೆಗೆದುಕೊಂಡರು. ಕೂಡಲೇ ಬಾಕಿ ಇರುವ ಸರ್ವೆ ಕಾರ್ಯವನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕೆಂದು ಸೂಚಿಸಿದರು.

ರೈತ ಸಂಘದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ, ತಾಲ್ಲೂಕಿನಲ್ಲಿ ಹಲವಾರು ರಾಜಕಾಲುವೆ ಮತ್ತು ಗುಂಡು ತೋಪುಗಳು, ಕೆರೆಗಳ ಒತ್ತುವರಿಯಾಗಿದೆ. ಹಲವಾರು ಬಾರಿ ಮನವಿ ಕೊಟ್ಟರೂ ತಹಶೀಲ್ದಾರ್ ತೆರವುಗೊಳಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ತಹಶೀಲ್ದಾರ್ ಆರ್. ಶೋಭಿತಾ, ಉಪ ತಹಶೀಲ್ದಾರ್ ಬಿ.ಆರ್. ಮುನಿವೆಂಕಟಪ್ಪ, ಕಂದಾಯ ನಿರೀಕ್ಷಕರು, ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT