ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂತಿಗೆ ಹಾವಳಿ: ಡಿಡಿಪಿಐ ಕಚೇರಿ ಎದುರು ಧರಣಿ

ಅಧಿಕಾರಿಗಳ ಕುಮ್ಮಕ್ಕಿನಿಂದ ದಂಧೆ: ಧರಣಿನಿರತರ ಆಕ್ರೋಶ
Last Updated 23 ಜುಲೈ 2019, 13:00 IST
ಅಕ್ಷರ ಗಾತ್ರ

ಕೋಲಾರ: ಖಾಸಗಿ ಶಿಕ್ಷಣ ಸಂಸ್ಥೆಗಳ ವಂತಿಗೆ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಕರ್ನಾಟಕ ಜನಸೇನಾ ಸಂಘಟನೆ ಸದಸ್ಯರು ಇಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದರು.

‘ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ವಂತಿಗೆ ದಂಧೆಗೆ ಇಳಿದಿವೆ. ವಂತಿಗೆ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ. ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಈ ದಂಧೆ ನಡೆಯುತ್ತಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಖಾಸಗಿ ಶಿಕ್ಷಣ ಸಂಸ್ಥೆಗಳು ನಾಯಿ ಕೊಡೆಗಳಂತೆ ತಲೆ ಎತ್ತಿವೆ. ವಂತಿಗೆ ಹಾವಳಿಯಿಂದ ಬಡ ವಿದ್ಯಾರ್ಥಿಗಳು ಮತ್ತು ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಂತಿಗೆ ದಂಧೆ ನಿಯಂತ್ರಿಸಬೇಕಾದ ಅಧಿಕಾರಿಗಳು ಹಣದಾಸೆಗೆ ಶಿಕ್ಷಣ ಸಂಸ್ಥೆಗಳ ರಕ್ಷಣೆಗೆ ನಿಂತಿದ್ದಾರೆ. ಅವರಿಗೆ ವಿದ್ಯಾರ್ಥಿಗಳ ಹಿತಕ್ಕಿಂತ ಹಣ ಸಂಪಾದನೆಯೇ ಮುಖ್ಯವಾಗಿದೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಮಂಜುನಾಥ್ ದೂರಿದರು.

‘ವಂತಿಗೆ ಪಡೆಯಬಾರದೆಂದು ಸರ್ಕಾರದ ಆದೇಶವಿದೆ. ಆದರೆ, ಶಿಕ್ಷಣ ಸಂಸ್ಥೆಗಳು ಈ ಆದೇಶ ಉಲ್ಲಂಘಿಸಿ ಪೋಷಕರನ್ನು ಶೋಷಿಸುತ್ತಿವೆ. ಜಿಲ್ಲೆಯ ಜನರಿಗೆ ಜೀವನ ಸಾಗಿಸುವುದೇ ಕಷ್ಟವಾಗಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲೂ ಶಿಕ್ಷಣ ಸಂಸ್ಥೆಗಳು ವಂತಿಗೆ ಸೋಗಿನಲ್ಲಿ ಪೋಷಕರ ರಕ್ತ ಹೀರುತ್ತಿವೆ’ ಎಂದು ಆರೋಪಿಸಿದರು.

‘ಶಿಕ್ಷಣ ಸಂಸ್ಥೆಗಳು ಪ್ರವೇಶ ಶುಲ್ಕ, ಪಠ್ಯಪುಸ್ತಕ, ಬಸ್‌ ಸೌಲಭ್ಯ, ಸಿಇಟಿ ತರಬೇತಿ, ಸಮವಸ್ತ್ರ, ಮನೆಪಾಠ ಶುಲ್ಕದ ನೆಪದಲ್ಲಿ ಪೋಷಕರನ್ನು ಸುಲಿಗೆ ಮಾಡುತ್ತಿವೆ. ಬಡ ವಿದ್ಯಾರ್ಥಿಗಳು ವಂತಿಗೆ ಪಾವತಿಸಲಾಗದೆ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದಾರೆ. ಶಿಕ್ಷಣ ವ್ಯಾಪಾರೀಕರಣವಾಗಿದೆ. ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಜತೆ ಸೇರಿ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

ಮೂಲಸೌಕರ್ಯ ಸಮಸ್ಯೆ: ‘ವಂತಿಗೆ ಪಾವತಿಸಲು ಸಾಧ್ಯವಾಗದ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲಾ ಕಾಲೇಜುಗಳಿಗೆ ಸೇರಿಸುತ್ತಿದ್ದಾರೆ. ಆದರೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಸೌಕರ್ಯ ಸಮಸ್ಯೆಯಿದೆ. ಉಪನ್ಯಾಸಕರು ಹಾಗೂ ಶಿಕ್ಷಕರ ಕೊರತೆಯಿಂದ ಪಠ್ಯ ಬೋಧನೆ ಸರಿಯಾಗಿ ನಡೆಯುತ್ತಿಲ್ಲ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘ಹೊಸ ಖಾಸಗಿ ಶಾಲೆಗಳ ಆರಂಭಕ್ಕೆ ಅನುಮತಿ ನೀಡಬಾರದು. ಎಲ್ಲಾ ಖಾಸಗಿ ಶಾಲೆಗಳಿಗೂ ಕಡ್ಡಾಯ ಶಿಕ್ಷಣ ಕಾಯಿದೆ (ಆರ್‌ಟಿಇ) ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ವಿವರ ಪಟ್ಟಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಮಕ್ಕಳಿಂದ ವಂತಿಗೆ ಪಡೆಯುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಜಿಲ್ಲಾಧಿಕಾರಿಯು ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ವಂತಿಗೆ ಹಾವಳಿ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಮಂಜು, ಎಚ್.ಎನ್.ಮೂರ್ತಿ, ಸಂಜಯ್, ಪ್ರಕಾಶ್, ಶ್ರೀರಾಮ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT