ಬುಧವಾರ, ಏಪ್ರಿಲ್ 14, 2021
24 °C

ಇ–ಆಡಳಿತ ಹೆಚ್ಚು ಪರಿಣಾಮಕಾರಿ: ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಇ–ಆಡಳಿತ ವ್ಯವಸ್ಥೆ ಹೆಚ್ಚು ಪರಿಣಾಮಕಾರಿಯಾಗಿದ್ದು, ಜನರ ಸಮಸ್ಯೆ ಮತ್ತು ಸೇವೆಗೆ ತಕ್ಷಣ ಸ್ಪಂದಿಸಲು ಅನುಕೂಲವಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ ಅಭಿಪ್ರಾಯಪಟ್ಟರು.

ಸೈಬರ್ ಸೆಕ್ಯೂರಿಟಿ ಮತ್ತು ಇ–ಆಡಳಿತ ಕುರಿತು ವಿವಿಧ ಇಲಾಖೆ ಗ್ರೂಪ್ ಎ ಅಧಿಕಾರಿಗಳಿಗೆ ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ‘ಆಧುನಿಕ ಯುಗದಲ್ಲಿ ತಂತ್ರಜ್ಞಾನ ಹೆಚ್ಚು ಮಹತ್ವ ಪಡೆದಿದೆ. ತಂತ್ರಜ್ಞಾನಕ್ಕೆ ತಕ್ಕಂತೆ ಅಧಿಕಾರಿಗಳ ಕಾರ್ಯವೈಖರಿ ಶೈಲಿ ಬದಲಾಗಬೇಕು’ ಎಂದು ಹೇಳಿದರು.

‘ಈ ಹಿಂದೆ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಪತ್ರಗಳ ಮುಖಾಂತರ ಮಾಹಿತಿ ರವಾನೆಯಾಗುತ್ತಿತ್ತು. ಈಗ ಯಾವುದೇ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಹಂಚಿಕೊಳ್ಳುವಷ್ಟು ತಂತ್ರಜ್ಞಾನ ಬೆಳೆದಿದೆ. ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಅಲ್ಪಾವಧಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು’ ಎಂದು ಸಲಹೆ ನೀಡಿದರು.

‘ಅಧಿಕಾರಿಗಳಲ್ಲಿ ವೃತ್ತಿಪರತೆ ಹೆಚ್ಚಿಸಲು ತರಬೇತಿ ಕಾರ್ಯಗಾರಗಳು ಸಹಕಾರಿ. ಅಂತರ್ಜಾಲ ವ್ಯವಸ್ಥೆಯಿಂದ ಅನುಕೂಲ ಎಷ್ಟಿದೆಯೋ ಅಷ್ಟೇ ಅನಾನುಕೂಲ ಸಹ ಇದೆ. ಇಂಟರ್‌ನೆಟ್‌ ಸೇವೆಯನ್ನು ಎಚ್ಚರಿಕೆಯಿಂದ ಬಳಸಬೇಕು. ಅಧಿಕಾರಿಗಳು ಕಾಲಕಾಲಕ್ಕೆ ಬದಲಾಗುತ್ತಿರುವ ತಂತ್ರಜ್ಞಾನವನ್ನು ಸಂಪೂರ್ಣವಾಗಿ ತಿಳಿದುಕೊಂಡು, ಕೌಶಲ ಮತ್ತು ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

‘ಅಧಿಕಾರಿಗಳು ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಸೈಬರ್ ಸುರಕ್ಷತೆ ಮತ್ತು ಇ–-ಆಡಳಿತ ವಿಷಯ ತಿಳಿದುಕೊಳ್ಳುವುದು ಅನಿವಾರ್ಯ. ಸೈಬರ್‌ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು, ಅಧಿಕಾರಿಗಳು ಈ ಬಗ್ಗೆ ಜಾಗರೂಕರಾಗಿರಬೇಕು’ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸ್, ಶಿವರಾಜ್‌ಕುಮಾರ್, ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.