ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಜಿಲ್ಲೆಗೆ ಶಿಕ್ಷಣ ಸಚಿವರ ಭೇಟಿ

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ: ಬಿಇಒ ನಾಗರಾಜಗೌಡ ಹೇಳಿಕ
Last Updated 28 ಜೂನ್ 2020, 13:48 IST
ಅಕ್ಷರ ಗಾತ್ರ

ಕೋಲಾರ: ‘ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರು ಸೋಮವಾರ  (ಜೂನ್‌ 29) ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್‌–19 ಸುರಕ್ಷತಾ ಮಾರ್ಗಸೂಚಿ ಪಾಲನೆ ಸಂಬಂಧ ಪರಿಶೀಲನೆ ನಡೆಸುತ್ತಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ತಿಳಿಸಿದರು.

ಇಲ್ಲಿ ಭಾನುವಾರ ನಡೆದ ತಾಲ್ಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಬಿಆರ್‌ಪಿಗಳು ಹಾಗೂ ಸಿಆರ್‌ಪಿಗಳ ಸಭೆಯಲ್ಲಿ ಮಾತನಾಡಿ, ‘ಈಗಾಗಲೇ ಎಸ್ಸೆಸ್ಸೆಲ್ಸಿಯ 2 ವಿಷಯಗಳ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿದ್ದೇವೆ. ಇಷ್ಟೇ ಕಾಳಜಿಯೊಂದಿಗೆ ಯಾವುದೇ ಲೋಪಕ್ಕೆ ಅವಕಾಶ ನೀಡದೆ ಬಾಕಿ 4 ವಿಷಯಗಳ ಪರೀಕ್ಷೆ ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.

‘ಜೂನ್‌ 29ರಂದು ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ನಡೆಯಲಿದ್ದು, ಕೋವಿಡ್ ಮಾರ್ಗಸೂಚಿಯಡಿ ಕೈಗೊಂಡಿರುವ ಪರೀಕ್ಷಾ ಸಿದ್ಧತೆ ಕ್ರಮಗಳ ಪರಿಶೀಲನೆಗಾಗಿ ಶಿಕ್ಷಣ ಸಚಿವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ಸೂಚಿಸಿದರು.

‘ಸಚಿವರು ತಾಲ್ಲೂಕಿನ ಕ್ಯಾಲನೂರು ಮತ್ತು ವೇಮಗಲ್ ಗ್ರಾಮದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಈ ಕೇಂದ್ರಗಳ ಮುಖ್ಯ ಅಧೀಕ್ಷಕರು ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳನ್ನು ಕೇಂದ್ರದೊಳಗೆ ಬಿಡಬಾರದು’ ಎಂದು ಹೇಳಿದರು.

ಗುರುತಿನ ಚೀಟಿ: ‘ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆ ಬಾರದಂತೆ ಎಚ್ಚರ ವಹಿಸಬೇಕು. ಕೇಂದ್ರಕ್ಕೆ ಬರುವ ಪ್ರತಿ ವ್ಯಕ್ತಿಯ ಗುರುತಿನ ಚೀಟಿ ಪರಿಶೀಲಿಸಬೇಕು. ಶೌಚಾಲಯಗಳು ಮತ್ತು ಕೊಠಡಿಗಳನ್ನು ಪ್ರತಿನಿತ್ಯ ಸ್ಯಾನಿಟೈಸ್‌ ಮಾಡಿಸಬೇಕು. ಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾಪಾಡಬೇಕು’ ಎಂದು ಕಿವಿಮಾತು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿ.ರುದ್ರಪ್ಪ, ತಾಲ್ಲೂಕು ಪರೀಕ್ಷಾ ನೋಡಲ್ ಅಧಿಕಾರಿ ಮುನಿರತ್ನಯ್ಯಶೆಟ್ಟಿ, ಇಸಿಒಗಳಾದ ವೆಂಕಟಾಚಲಪತಿ, ಬೈರೆಡ್ಡಿ, ಬಿಆರ್‌ಪಿಗಳು, ಮುಖ್ಯ ಅಧೀಕ್ಷಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT