ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈದ್‌ ಮಿಲಾದ್‌: ಮಾರ್ಗಸೂಚಿ ಪಾಲಿಸಿ

Last Updated 15 ಅಕ್ಟೋಬರ್ 2021, 15:23 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಈದ್‌ ಮಿಲಾದ್‌ ಹಬ್ಬವನ್ನು ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಹೀಗಾಗಿ ಅಧಿಕಾರಿಗಳು, ಇಲಾಖಾ ಮುಖ್ಯಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಣೆಗೆ ಸಂಬಂಧಿಸಿದ ಸುರಕ್ಷತಾ ಮಾರ್ಗಸೂಚಿ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು ಎಂದು ತಿಳಿಸಿದ್ದಾರೆ.

ಹಬ್ಬದ ದಿನವಾದ ಅ.20ರಂದು ಜಿಲ್ಲೆಯಾದ್ಯಂತ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಹಗಲು ಮತ್ತು ರಾತ್ರಿಯ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಕಾರ್ಯಕ್ರಮಗಳಲ್ಲಿ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಬಳಕೆ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಾರ್ಥನಾ ಮಂದಿರಗಳ ಪ್ರವೇಶದ್ವಾರದಲ್ಲಿ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್‌ನ ವ್ಯವಸ್ಥೆ ಮಾಡಬೇಕು. ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ಮಸೀದಿಯಲ್ಲಿ ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಮಸೀದಿಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ಹೆಚ್ಚು ಜನರು ಆಗಮಿಸಿದರೆ 2 ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಕು. ಮಸೀದಿಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಅಥವಾ ತೆರೆದ ಜಾಗದಲ್ಲಿ ಹಬ್ಬ ಆಚರಿಸುವಂತಿಲ್ಲ. ಖಬರಸ್ಥಾನದಲ್ಲಿ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ, ಪ್ರವಚನ ಆಯೋಜಿಸಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಈದ್‌ ಮಿಲಾದ್ ಹಬ್ಬ ಆಚರಣೆ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದು. ಯಾವುದೇ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳು ಈ ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಕಲಂ 188ರಡಿ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT