ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಬರಹಗಾರರು–ಸಾಹಿತಿಗಳಿಗೆ ಪ್ರೋತ್ಸಾಹ

ಜಿಲ್ಲಾ ಕಸಾಪ ಚುನಾವಣೆ: ಅಭ್ಯರ್ಥಿ ಗೋಪಾಲಗೌಡ ಹೇಳಿಕೆ
Last Updated 7 ಏಪ್ರಿಲ್ 2021, 13:53 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯ ಪ್ರತಿ ಹಳ್ಳಿಗೂ ಕನ್ನಡ ಸಾಹಿತ್ಯದ ಕಂಪು ಪಸರಿಸುವ ಕೆಲಸ ಮಾಡುತ್ತೇನೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಮತದಾರರು ನನಗೆ ಮತ ಹಾಕುವ ಮೂಲಕ ನಾಡು ನುಡಿಯ ಸೇವೆಗೆ ಅವಕಾಶ ಕಲ್ಪಿಸಬೇಕು’ ಎಂದು ಅಭ್ಯರ್ಥಿ ಬಿ.ಎನ್‌.ಗೋಪಾಲಗೌಡ ಮನವಿ ಮಾಡಿದರು.

ಇಲ್ಲಿ ಬುಧವಾರ ತಾಲ್ಲೂಕು ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಜಿಲ್ಲೆಯಲ್ಲಿ ಯುವ ಬರಹಗಾರರು, ಕವಿಗಳು ಹಾಗೂ ಸಾಹಿತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ವಿಶೇಷ ಸ್ಥಾನಮಾನವಿದೆ. ಸುಮಾರು 2 ದಶಕದಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಸಾಹಿತ್ಯ ಕ್ಷೇತ್ರದಲ್ಲೂ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಈ ಬಾರಿ ಮತದಾರರು ಖಂಡಿತ ನನ್ನನ್ನು ಗೆಲ್ಲಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಈ ಹಿಂದೆ 1984ರಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ ಕೈವಾರದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದಿತ್ತು. ನನಗೆ ಅಧ್ಯಕ್ಷಗಾದಿಯ ಅವಕಾಶ ಸಿಕ್ಕಿದರೆ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕೇಂದ್ರ ಪರಿಷತ್ತಿನ ಮೇಲೆ ಒತ್ತಡ ತರುತ್ತೇನೆ’ ಎಂದು ಹೇಳಿದರು.

‘ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಗಿರುವ ಬೆಳವಣಿಗೆ ಎಲ್ಲರಿಗೂ ಗೊತ್ತಿರುವ ವಿಚಾರ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಿಸುವಂತೆ ಜಿಲ್ಲಾಡಳಿತ ಹಾಗೂ ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದರು.

‘ಜಿಲ್ಲಾ ಹಾಗೂ ತಾಲ್ಲೂಕು ಸಮ್ಮೇಳನಗಳ ಜತೆಗೆ ಹೋಬಳಿ ಘಟಕಗಳನ್ನು ರಚಿಸಿ ಸಮ್ಮೇಳನ ನಡೆಸುತ್ತೇವೆ. ಕನ್ನಡಪರ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚಾಗಿ ನಡೆಸುತ್ತೇವೆ. ಜಿಲ್ಲೆಯ ಹಿರಿಯ ಸಾಹಿತಿಗಳು, ಕವಿಗಳು, ಚಿಂತಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ರೂಪಿಸುತ್ತೇವೆ’ ಎಂದು ವಿವರಿಸಿದರು.

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಅಂಬೇಡ್ಕರ್, ಗಾಂಧೀಜಿ, ಕುವೆಂಪು, ಸರ್ವಜ್ಞರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಟಿ.ಚನ್ನಯ್ಯ ರಂಗಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದರು. ಉಪನ್ಯಾಸಕ ಶಂಕರಪ್ಪ, ಖಾಸಗಿ ಅನುದಾನರಹಿತ ಶಾಲೆಗಳ ರಾಜ್ಯ ಸಂಘಟನೆ (ಕ್ಯಾಮ್ಸ್‌) ಜಿಲ್ಲಾ ಅಧ್ಯಕ್ಷ ಎ.ಸದಾನಂದ, ಬೆಂಬಲಿಗರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT