ಪರೀಕ್ಷೆ: ಸುರಕ್ಷತಾ ಮಾರ್ಗಸೂಚಿ ಪಾಲನೆ

ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಶನಿವಾರ ಆರಂಭವಾದ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಕೋವಿಡ್–19 ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲಾಯಿತು.
ಅಂತಿಮ ವರ್ಷದ ಪದವಿಯ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎಂ, ಬಿಸಿಎ ತರಗತಿಗಳು ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು ಹಾಗೂ ಕಾಲೇಜು ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿನ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿತ್ತು. ಮಾಸ್ಕ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಗೆ ಪ್ರವೇಶ ಭಾಗದಲ್ಲೇ ಸ್ಯಾನಿಟೈಸರ್ ನೀಡಲಾಯಿತು.
ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿನಿಯರಿಗೆ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಮೇಜಿನ ವ್ಯವಸ್ಥೆ ಮಾಡಲಾಗಿತ್ತು. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು.
‘ಅಂತಿಮ ವರ್ಷದ ಪದವಿ ಪರೀಕ್ಷೆಯು ವಿದ್ಯಾರ್ಥಿಗಳು ಶೈಕ್ಷಣಿಕ ಹಿತದೃಷ್ಟಿಯಿಂದ ಅನಿವಾರ್ಯವಾಗಿದ್ದು, ಅಂತರ ಕಾಯ್ದುಕೊಳ್ಳುವಂತೆ ಮಾರ್ಗದರ್ಶನ ನೀಡಲಾಗಿದೆ. ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಗಂಗಾಧರರಾವ್ ಸುದ್ದಿಗಾರರಿಗೆ ತಿಳಿಸಿದರು.
ಕಾಲೇಜಿನ ಪ್ರಾಧ್ಯಾಪಕರಾದ ವಿಜಯ್‌ಕುಮಾರ್, ಸೀನಾನಾಯಕ್, ಪದ್ಮಾ, ಸುಜಾತಾ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.