ಕೋಲಾರ: ‘ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿರುವ ವೈದ್ಯಕೀಯ ಕ್ಲಿನಿಕ್‌ಗಳು ಹಾಗೂ ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಪಿಎಂಇ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ 106 ಅಕ್ರಮ ವೈದ್ಯಕೀಯ ಕ್ಲಿನಿಕ್ ಗುರುತಿಸಲಾಗಿದ್ದು, ಮುಂದಿನ 15 ದಿನಗಳೊಳಗೆ ತೆರವುಗೊಳಿಸಬೇಕು’ ಎಂದು ಅವರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್ ಅವರಿಗೆ ಸೂಚನೆ ನೀಡಿದರು.
‘ತಾಲ್ಲೂಕು ಆರೋಗ್ಯಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಕ್ಲಿನಿಕ್‌ಗಳು ಹಾಗೂ ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳ ಬಗ್ಗೆ ವಿವರವಾದ ಮಾಹಿತಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗೆ ಕಾಲಕಾಲಕ್ಕೆ ನೀಡಬೇಕು. ಜಿಲ್ಲಾ ಆರೋಗ್ಯಾಧಿಕಾರಿಯು ವಿಳಂಬ ಮಾಡದೆ ಕ್ಷಿಪ್ರ ಗತಿಯಲ್ಲಿ ದಾಳಿ ನಡೆಸಿ ಅನಧಿಕೃತ ಸಂಸ್ಥೆಯನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಗೆ ಪೂರಕ ದಾಖಲೆಗಳ ಸಾಕ್ಷಿಯನ್ನು ಹುಡುಕದೆ ವಿಡಿಯೊ ಚಿತ್ರೀಕರಣ ಮಾಡಬೇಕು. ಈ ಮೂಲಕ ಪೂರಕ ಸಾಕ್ಷ್ಯಾಧಾರಗಳನ್ನು ನಿರ್ವಹಿಸಬೇಕು. ಯಾವುದೇ ಮುಲಾಜಿಗೆ ಒಳಪಡದೇ ತಮ್ಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ನಿರ್ದೇಶಿಸಿದರು.
‘ಅನಧಿಕೃತ ಕ್ಲಿನಿಕ್ ಕಂಡು ಬಂದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮೊದಲು ವೈದ್ಯರ ಹಾಗೂ ವೈದ್ಯಕೀಯ ಸಂಸ್ಥೆಯ ಅಥವಾ ವೈದ್ಯಕೀಯ ಉಪಕರಣಗಳ ಬಗ್ಗೆ ಸೂಕ್ತ ದಾಖಲೆ ಒದಗಿಸುವಂತೆ ನೋಟಿಸ್ ನೀಡಬೇಕು. ನಿಗದಿತ ಅವಧಿಯೊಳಗೆ ಪೂರಕ ದಾಖಲೆ ಸಲ್ಲಿಸದಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಬೇಕು. ಈ ಮೂಲಕ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ಮಾತ್ರ ಲಭ್ಯವಾಗುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಜವಾಬ್ದಾರಿ’ ಎಂದರು.
‘ಕೆಪಿಎಂಇ ಕಾಯ್ದೆಯಡಿ ಜಿಲ್ಲಾ ಸಕ್ಷಮ ಪ್ರಾಧಿಕಾರದ ಎದುರು ಅನಧಿಕೃತ ಸಂಸ್ಥೆಗಳ ಮುಖ್ಯಸ್ಥರು ಹಾಜರಾಗಿ ಸೂಕ್ತ ದಾಖಲೆ ಸಲ್ಲಿಸಿ ತಮ್ಮ ಕ್ಲಿನಿಕ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದೆ. ಆದಾಗ್ಯೂ ಹಲವು ಸಂಸ್ಥೆಗಳು ಈವರೆಗೆ ಸೂಕ್ತ ದಾಖಲೆ ಸಲ್ಲಿಸಿರುವುದಿಲ್ಲ’ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಐಎಂಎ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ಡಾ.ವಿಜಯಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾರಾಯಣಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಸನ್ನಕುಮಾರ್, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.