ಶನಿವಾರ, ಆಗಸ್ಟ್ 20, 2022
21 °C

ಬೆಳೆ ನಷ್ಟ: ಪರಿಹಾರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ತಾಲ್ಲೂಕಿನ ದಾದಿರೆಡ್ಡಿ ಹಳ್ಳಿಯಲ್ಲಿ ಆಲಿಕಲ್ಲು ಮಳೆಯಿಂದ ಬೆಳೆ ನಷ್ಟವಾಗಿದ್ದು, ರೈತರಿಗೆ ಪ್ರತಿ ಎಕರೆಗೆ ₹ 2 ಲಕ್ಷ ಪರಿಹಾರ ನೀಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಒತ್ತಾಯಿಸಿದರು.

ದಾದಿರೆಡ್ಡಿ ಹಳ್ಳೆಯಲ್ಲಿ ಮಳೆಯಿಂದ ಬೆಳೆ ನಷ್ಟವಾದ ರೈತರ ಜಮೀನುಗಳಿಗೆ ಗುರುವಾರ ಭೇಟಿ ನೀಡಿದ ಸಂಘಟನೆ ಸದಸ್ಯರು, ‘ಕೋವಿಡ್‌–19 ಹಾಗೂ ಲಾಕ್‌ಡೌನ್‌ನಿಂದ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾಗಿ ಈಗಾಗಲೇ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದರು. ಇದೀಗ ಮಳೆಯಿಂದ ಬೆಳೆ ಕಳೆದುಕೊಂಡು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

‘ಕೊರೊನಾ ಸೋಂಕಿನ ಹೊಡೆತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಲಕ್ಷಾಂತರ ರೂಪಾಯಿ ಬಡ್ಡಿ ಸಾಲ ಮಾಡಿ ಟೊಮೆಟೊ, ಕ್ಯಾಪ್ಸಿಕಂ ಮತ್ತು ಹೂಕೋಸು ಬೆಳೆದಿದ್ದವು. ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿತ್ತು. ಆದರೆ, ಆಲಿಕಲ್ಲು ಮಳೆಯಿಂದ ಬೆಳೆಗಳು ಸಂಪೂರ್ಣ ನೆಲಕಚ್ಚಿವೆ’ ಎಂದು ರೈತರಾದ ವೆಂಕಟೇಶಗೌಡ, ಶ್ರೀರಾಮಪ್ಪ ಹಾಗೂ ನಂಜುಂಡಗೌಡ ಅಳಲು ತೋಡಿಕೊಂಡರು

‘ಮಳೆಯಿಂದ ಸುಮಾರು ₹ 50 ಲಕ್ಷ ಮೌಲ್ಯದ ಬೆಳೆ ನಷ್ಟವಾಗಿದ್ದು, ದಿಕ್ಕು ತೋಚದಂತಾಗಿದೆ. ಸಾಲದ ಕಂತು ಮತ್ತು ಬಡ್ಡಿ ಹೇಗೆ ಕಟ್ಟುವುದೆಂದು ಆತಂಕಗೊಂಡಿದ್ದೇವೆ. ಸರ್ಕಾರ ಎಕರೆಗೆ ₹ 18 ಸಾವಿರ ಬೆಳೆ ಪರಿಹಾರ ಘೋಷಿಸಿದೆ. ಬೆಳೆ ವೆಚ್ಚಕ್ಕೆ ಹೋಲಿಸಿದರೆ ಪರಿಹಾರದ ಮೊತ್ತ ಕಡಿಮೆಯಿದೆ. ಸರ್ಕಾರ ಅವೈಜ್ಞಾನಿಕವಾಗಿ ಬೆಳೆ ಪರಿಹಾರ ನಿಗದಿಪಡಿಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಳಜಿಯಿಲ್ಲ: ‘ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಆ್ಯಪ್‌ಗೆ ಚಾಲನೆ ನೀಡಲಾಗಿದೆ. ಮಳೆಯಿಂದ ಬೆಳೆ ನಾಶವಾಗಿ ನಾಲ್ಕೈದು ದಿನವಾದರೂ ಅಧಿಕಾರಿಗಳು ಜಮೀನಿಗೆ ಬಂದು ಪರಿಶೀಲನೆ ನಡೆಸಿಲ್ಲ. ಅಧಿಕಾರಿಗಳಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸರ್ಕಾರ ರೈತರ ಸಂಕಷ್ಟ ಅರಿತು ಬೆಳೆ ಪರಿಹಾರ ಮೊತ್ತ ಹೆಚ್ಚಿಸಬೇಕು’ ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ್, ಸದಸ್ಯರಾದ ನಾಗೇಶ್, ತಿಮ್ಮಣ್ಣ, ವೆಂಕಟೇಶಪ್ಪ, ರಾಜು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.