ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ರೈತ ಸಂಘ ಸದಸ್ಯರು–ಅಧಿಕಾರಿಗಳ ವಾಗ್ವಾದ

ನೆಟ್‌ವರ್ಕ್‌ ಸಮಸ್ಯೆ: ಬಿಎಸ್‌ಎನ್‌ಎಲ್‌ ಕಚೇರಿಗೆ ಬೀಗ ಜಡಿಯುವ ಯತ್ನ
Last Updated 29 ಜನವರಿ 2021, 13:18 IST
ಅಕ್ಷರ ಗಾತ್ರ

ಕೋಲಾರ: ನೆಟ್‌ವರ್ಕ್‌ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಇಲ್ಲಿ ಶುಕ್ರವಾರ ಬಿಎಸ್‌ಎನ್‌ಎಲ್ ಕಚೇರಿಗೆ ಬೀಗ ಜಡಿಯಲು ಮುಂದಾದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರಿಗೆ ಅಧಿಕಾರಿಗಳು ತಡೆಯೊಡ್ಡಿದ್ದರಿಂದ ಪರಸ್ಪರ ವಾಗ್ವಾದ ನಡೆದು ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಯಿತು.

‘ಜಿಲ್ಲೆಯಾದ್ಯಂತ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ ಸೃಷ್ಟಿಯಾಗಿದೆ. ಈ ಸಂಬಂಧ ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಘಟನೆ ಸದಸ್ಯರು ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಯತ್ನಿಸಿದರು.

ಆಗ ಅಧಿಕಾರಿಗಳು ಸದಸ್ಯರನ್ನು ತಡೆದಿದ್ದರಿಂದ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಬಿಎಸ್‌ಎನ್‌ಎಲ್‌ ಕಚೇರಿ ಎದುರು ಧರಣಿ ಕುಳಿತ ಸಂಘಟನೆ ಸದಸ್ಯರು, ‘ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಗುಣಾತ್ಮಕ ಸೇವೆಯೊಂದಿಗೆ ದೇಶದಲ್ಲಿ ಈ ಹಿಂದೆ ಮನೆ ಮಾತಾಗಿತ್ತು. ಆದರೆ, ಕಳೆದ ಕೆಲ ವರ್ಷಗಳಿಂದ ಬಿಎಸ್‌ಎನ್‌ಎಲ್‌ನ ಇಂಟರ್‌ನೆಟ್‌ ಮತ್ತು ಕರೆಗಳ ಸೇವೆಯ ಗುಣಮಟ್ಟ ಕುಸಿದಿದೆ’ ಎಂದು ಆರೋಪಿಸಿದರು.

‘ಬಿಎಸ್‌ಎನ್‌ಎಲ್‌ ದೂರ ಸಂಪರ್ಕ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿ ದೇಶದ ಮೂಲೆ ಮೂಲೆಗೂ ಸೇವೆ ಒದಗಿಸಿತ್ತು. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಕ್ಕೆ ಸೇವೆ ಕಲ್ಪಿಸಿರುವ ಬಿಎಸ್‌ಎನ್‌ಎಲ್‌ ಈಗ ತನ್ನ ಅಸ್ತಿತ್ವ ಕಳೆದುಕೊಂಡಿದೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಿಡಿಕಾರಿದರು.

‘ದೇಶದ ವಿವಿಧ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರ ಬಿಎಸ್‌ಎನ್‍ಎಲ್ ಸಂಸ್ಥೆಯನ್ನು ಖಾಸಗೀಕರಣ ಮಾಡಲು ಹೊರಟಿದೆ. ಗ್ರಾಹಕರಿಗೆ ಅಗತ್ಯವಿರುವ ಅತಿ ವೇಗದ 4ಜಿ ಮತ್ತು 5ಜಿ ನೆಟ್‌ವರ್ಕ್‌ ಸೇವೆ ನೀಡಲು ವಿಫಲವಾಗಿದೆ. ದೂರ ಸಂಪರ್ಕ ಕ್ಷೇತ್ರದಲ್ಲಿನ ಖಾಸಗಿ ಕಂಪನಿಗಳ ಕೈಗೊಂಬೆಯಾಗಿರುವ ಕೇಂದ್ರವು ಬಿಎಸ್‍ಎನ್‍ಎಲ್ ಸಂಸ್ಥೆಯನ್ನು ಮುಚ್ಚುವ ಹುನ್ನಾರ ನಡೆಸಿದೆ’ ಎಂದು ದೂರಿದರು.

ಸೇವೆಗೆ ಅಡ್ಡಿ: ‘ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆಯಿಂದ ಜಿಲ್ಲೆಯಲ್ಲಿ ಸಾರ್ವಜನಿಕರು ಹಾಗೂ ಸರ್ಕಾರಿ ಕಚೇರಿಗಳಲ್ಲಿ ತುಂಬಾ ತೊಂದರೆಯಾಗಿದೆ. ಸರ್ಕಾರದ ಸೇವೆ ಪಡೆಯಲು ಅಡ್ಡಿಯಾಗಿದೆ. ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಜನಸಾಮಾನ್ಯರು ಸರ್ಕಾರಿ ಕಚೇರಿಗಳಲ್ಲಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

‘ಬಿಎಸ್ಎನ್ಎಲ್‌ ಹಿಂದಿನಂತೆಯೇ ಸೇವೆ ಒದಗಿಸಬೇಕು. ನೆಟ್‌ವರ್ಕ್‌ ಹಾಗೂ ಕರೆಗಳ ಸೇವೆಯ ಸಮಸ್ಯೆಗೆ ಸಿಬ್ಬಂದಿ ಶೀಘ್ರವೇ ಸ್ಪಂದಿಸಬೇಕು. ಇಲ್ಲದಿದ್ದರೆ ಕಚೇರಿಗೆ ಶಾಶ್ವತವಾಗಿ ಬೀಗ ಜಡಿಯುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ರಾಜ್ಯ ಸಂಚಾಲಕ ನಾಗರಾಜಗೌಡ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ನಾಗೇಶ್, ತಿಮ್ಮಣ್ಣ, ಕಿರಣ್, ಹನುಮಯ್ಯ, ಅನಿಲ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT