ಬುಧವಾರ, ಏಪ್ರಿಲ್ 21, 2021
32 °C

ಪೊಲೀಸ್ ಬಂದೋಬಸ್ತ್‌ನಲ್ಲಿ ಎಸ್‌ಡಿಎ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಫೆ.28ರಂದು ನಡೆಸಲಾಗುತ್ತಿರುವ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಪಾರದರ್ಶಕವಾಗಿ ನಡೆಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಹೇಳಿದರು.

ಎಫ್‌ಡಿಎ ಪರೀಕ್ಷೆ ಸಿದ್ಧತೆ ಸಂಬಂಧ ಇಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಹಿಂದಿನ ಬಾರಿ ಎಫ್‌ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ಪರೀಕ್ಷೆ ಮುಂದೂಡಲಾಗಿತ್ತು. ಈ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ 19 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪೊಲೀಸ್‌ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಸುರಕ್ಷತೆಗಾಗಿ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ ಕ್ಯಾಮೆರಾ ಅಳವಡಿಸಬೇಕು. ಮೂಲಸೌಕರ್ಯ, ಕುಡಿಯುವ ನೀರು, ವೈದ್ಯಕೀಯ ಸೇವೆ ಕಲ್ಪಿಸಬೇಕು. ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳು ಇರುವಂತೆ ವ್ಯವಸ್ಥೆ ಮಾಡಬೇಕು’ ಎಂದು ಸೂಚನೆ ನೀಡಿದರು.

‘ಅಧಿಕಾರಿಗಳು ಪರೀಕ್ಷೆಯಲ್ಲಿ ಲೋಪ ಆಗದಂತೆ ಕಾರ್ಯ ನಿರ್ವಹಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು. ಅಭ್ಯರ್ಥಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಕೇಂದ್ರಕ್ಕೆ ಬರುವ ಪ್ರತಿ ಅಭ್ಯರ್ಥಿಯನ್ನು ಪ್ರವೇಶದ್ವಾರದಲ್ಲೇ ಪರಿಶೀಲನೆ ಮಾಡಬೇಕು’ ಎಂದು ತಿಳಿಸಿದರು.

ಥರ್ಮಲ್‌ ಸ್ಕ್ರೀನಿಂಗ್‌: ‘ಕೋವಿಡ್‌ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಬೇಕು. ಕೋವಿಡ್ ಲಕ್ಷಣ ಕಂಡುಬಂದರೆ ಬೇರೆ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳಿಗೆ ಮುಜುಗರವಾಗದಂತೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರಿಶೀಲನೆ ನಡೆಸಬೇಕು’ ಎಂದರು.

‘ಈ ಬಾರಿಯ ಪರೀಕ್ಷೆಗೆ ಹಳೆಯ ಪ್ರವೇಶಪತ್ರ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಹೊಸ ಪ್ರವೇಶಪತ್ರವನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್‌ ತರುವುದನ್ನು ನಿರ್ಬಂಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಅಂತರ ಕಾಪಾಡಿಕೊಳ್ಳಬೇಕು ಮತ್ತು ಕೈಗಳಿಗೆ ಸ್ಯಾನಿಟೈಸರ್‌ ಬಳಕೆ ಮಾಡಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.