ಸೋಮವಾರ, ಅಕ್ಟೋಬರ್ 18, 2021
25 °C
ಯೂರಿಯಾ ಕೃತಕ ಅಭಾವ ಸೃಷ್ಟಿ: ಪ್ರತಿಭಟನಾಕಾರರ ಆರೋಪ

ರಸಗೊಬ್ಬರ ಕೊರತೆ: ರೈತ ಸಂಘ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ನೀಗಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಇಲ್ಲಿ ಗುರುವಾರ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ಮಾಡಿದರು.

‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಆದರೆ, ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ- ಸರಬರಾಜಾಗುತ್ತಿಲ್ಲ. ಗೊಬ್ಬರದ ಕಂಪನಿಗಳು ಹಾಗೂ ಮಾರಾಟಗಾರರು ಶಾಮೀಲಾಗಿ ಯೂರಿಯಾದ ಕೃತಕ ಅಭಾವ ಸೃಷ್ಟಿಸಿದ್ದು, ರೈತರಿಗೆ ಸಮಸ್ಯೆಯಾಗುತ್ತಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಯೂರಿಯಾ ಉತ್ಪಾದನಾ ಕಂಪನಿಗಳು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಸರಬರಾಜು ಮಾಡುತ್ತಿಲ್ಲ. ಡೀಲರ್‌ಗಳು ಹಾಗೂ ಅಂಗಡಿ ಮಾಲೀಕರು ಇದನ್ನೇ ಬಂಡವಾಳ ಮಾಡಿಕೊಂಡು ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾಡುತ್ತಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಜಿಲ್ಲೆಯ ಗಡಿ ಭಾಗದಲ್ಲಿ ರೈತರು ರಸಗೊಬ್ಬರಕ್ಕೆ ನೆರೆಯ ಆಂಧ್ರಪ್ರದೇಶದ ಅಂಗಡಿಗಳತ್ತ ಹೋಗುವ ಪರಿಸ್ಥಿತಿ ಸೃಷ್ಟಿಯಾಗಿದೆ. ಸಹಕಾರಿ ಸಂಸ್ಥೆಗಳು ರೈತರ ಪಾಲಿಗೆ ಇದ್ದು ಇಲ್ಲದಂತಾಗಿವೆ. ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರದ ಸಮಸ್ಯೆ ಪರಿಹರಿಸದೆ ಕೈಚೆಲ್ಲಿದ್ದಾರೆ. ಮತ್ತೊಂದೆಡೆ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರುತ್ತಿರುವ ಡೀಲರ್‌ಗಳು ಮತ್ತು ಅಂಗಡಿ ಮಾಲೀಕರ ವಿರುದ್ಧ ಕ್ರಮ ಜರುಗಿಸುತ್ತಿಲ್ಲ’ ಎಂದು ಆರೋಪಿಸಿದರು.

ಸಕಾಲಕ್ಕೆ ಸಿಗುತ್ತಿಲ್ಲ: ‘ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಜಮೀನಿಗಳಲ್ಲಿ ಬೆಳೆಗಳು ಸಮೃದ್ಧವಾಗಿ ಬಂದಿವೆ. ಹೀಗಾಗಿ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಆದರೆ, ಮಾರುಕಟ್ಟೆಯಲ್ಲಿ ಸಕಾಲಕ್ಕೆ ಗೊಬ್ಬರ ಸಿಗುತ್ತಿಲ್ಲ. ರೈತರು ಗೊಬ್ಬರಕ್ಕಾಗಿ ಕೃಷಿ ಕೆಲಸ ಬಿಟ್ಟು ದಿನಗಟ್ಟಲೇ ಊರೂರು ಅಲೆಯುವ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

‘ರಸಗೊಬ್ಬರವನ್ನು ಸಮರ್ಪಕವಾಗಿ ವಿತರಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರದ ರಸಗೊಬ್ಬರ ಸಚಿವರು ಯೂರಿಯಾ ಕೊರತೆಯಿಲ್ಲ ಎಂದು ಸುಳ್ಳು ಹೇಳಿಕೆ ನೀಡಿ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ರೈತರ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ’ ಎಂದು ಕಿಡಿಕಾರಿದರು.

ಹೆದ್ದಾರಿ ಬಂದ್‌: ‘ಗೊಬ್ಬರ ಮಾರಾಟ ದಂದೆಗೆ ಕಡಿವಾಣ ಹಾಕಬೇಕು. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರುವ ಡೀಲರ್‌ಗಳು ಮತ್ತು ಅಂಗಡಿಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ವಿತರಿಸಬೇಕು. ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಮಾಲೂರು ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್‌, ಸದಸ್ಯರಾದ ಹರೀಶ್, ವೆಂಕಟೇಶ್, ನಾಗೇಶ್ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.